
ಮತ್ತೆ ಕೊರೋನಾ ಭೀ#ತಿ; ಚೀನಾ ಸೇರಿದಂತೆ ವಿಶ್ವದ ಹಲವು ದೇಶಗಳಿಂದ ಬರುವ ಪ್ರಯಾಣಿಕರಿಗೆ ವಿಮಾನ ನಿಲ್ದಾಣಗಳಲ್ಲಿ ಕೋವಿಡ್ ಪರೀಕ್ಷೆ!
Wednesday, December 21, 2022
ನವದೆಹಲಿ(Headlines Kannada): ಚೀನಾ ಸೇರಿದಂತೆ ವಿಶ್ವದ ಹಲವು ದೇಶಗಳಲ್ಲಿ ಮತ್ತೆ ಕೊರೋನಾ ಆರ್ಭಟ ಮುಂದುವರಿದಿದೆ. ಈ ಹಿನ್ನೆಲೆಯಲ್ಲಿ ಚೀನಾ ಸೇರಿದಂತೆ ಇತರ ದೇಶಗಳಿಂದ ಭಾರತಕ್ಕೆ ಆಗಮಿಸುವ ಅಂತಾರಾಷ್ಟ್ರೀಯ ಪ್ರಯಾಣಿಕರಿಗೆ ವಿಮಾನ ನಿಲ್ದಾಣಗಳಲ್ಲಿ ಮತ್ತೆ ಕೋವಿಡ್ ಪರೀಕ್ಷೆ ನಡೆಸಲು ಕೇಂದ್ರ ಸರಕಾರ ಮುಂದಾಗಿದೆ.
ದೇಶದಲ್ಲಿನ ಕೊರೋನಾ ಪರಿಸ್ಥಿತಿಯನ್ನು ಪರಿಶೀಲಿಸಲು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಅವರ ಅಧ್ಯಕ್ಷತೆಯಲ್ಲಿ ಬುಧವಾರ ನಡೆದ ತಜ್ಞರ ಸಭೆಯ ನಂತರ ಈ ಕ್ರಮ ಕೈಗೊಳ್ಳಲು ಸರಕಾರ ಮುಂದಾಗಿದೆ.
"ಕೋವಿಡ್ ಹಿನ್ನೆಲೆಯಲ್ಲಿ ಚೀನಾ ಸೇರಿದಂತೆ ವಿವಿಧ ದೇಶಗಳಿಂದ ಆಗಮಿಸುವ ಅಂತಾರಾಷ್ಟ್ರೀಯ ವಿಮಾನ ಪ್ರಯಾಣಿಕರಿಗೆ ರ್‍ಯಾಂಡಮ್ ಸ್ಯಾಂಪಲ್ ಪರೀಕ್ಷೆ ಮಾಡಲಾಗುತ್ತದೆ" ಎಂದು ಮೂಲಗಳು ತಿಳಿಸಿವೆ.
ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಮಾಂಡವಿಯಾ, ದೇಶದಲ್ಲಿ ಕೋವಿಡ್ ಮಹಾ#ಮಾರಿಯೇ ಆಟ ಇನ್ನೂ ಮುಗಿದಿಲ್ಲ. ಈ ಬಗ್ಗೆ ಸಂಬಂಧಿತರಿಗೂ ಎಚ್ಚರಿಕೆ ನೀಡುವಂತೆ ಹಾಗು ಕಣ್ಗಾವಲು ಹೆಚ್ಚಿಸುವಂತೆ ನಾನು ಸೂಚಿಸಿದ್ದೇನೆ. ಯಾವುದೇ ಪರಿಸ್ಥಿತಿಯನ್ನು ನಿರ್ವಹಿಸಲು ನಾವು ಸದಾ ಸಿದ್ಧರಿದ್ದೇವೆ ಎಂದು ಹೇಳಿದ್ದಾರೆ.