ಉಡುಪಿಯಲ್ಲಿ ಮಂಗಳೂರು ವಿವಿ ಅಂತರ್ ಕಾಲೇಜು ಅಥ್ಲೆಟಿಕ್ ಚಾಂಪಿಯನ್‌ಶಿಪ್ ಕ್ರೀಡಾಕೂಟಕ್ಕೆ ಚಾಲನೆ
ಉಡುಪಿ(Headlines Kannada): ಮಂಗಳೂರು ವಿಶ್ವವಿದ್ಯಾನಿಲಯ, ಉಡುಪಿ ಜಿಲ್ಲಾ ಪಂಚಾಯತ್, ತೆಂಕನಿಡಿಯೂರು ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ, ಉಡುಪಿ ಜಿಲ್ಲಾ ಅಮೆಚೂರ್ ಅಥ್ಲೆಟಿಕ್ ಅಸೋಸಿಯೇಶನ್, ಲಯನ್ಸ್ ಕ್ಲಬ್ ಉಡುಪಿ ಅಮೃತ್ ಇವುಗಳ ಸಂಯುಕ್ತ ಆಶ್ರಯದಲ್ಲಿ ಅಜ್ಜರಕಾಡು ಜಿಲ್ಲಾ ಮಹಾತ್ಮಗಾಂಧಿ ಕ್ರೀಡಾಂಗಣದಲ್ಲಿ 2 ದಿನಗಳ ಕಾಲ ಹಮ್ಮಿಕೊಂಡಿರುವ ಮಂಗಳೂರು ವಿಶ್ವವಿದ್ಯಾಲಯದ ಅಂತರ್ ಕಾಲೇಜು ಪುರುಷರ ಮತ್ತು ಮಹಿಳೆಯರ ಅಥ್ಲೆಟಿಕ್ ಚಾಂಪಿಯನ್‌ಶಿಪ್, ಉಡುಪಿ ಜಿಲ್ಲಾ ಮಟ್ಟದ ದಿವ್ಯಾಂಗ ವಿದ್ಯಾರ್ಥಿಗಳ ಅಥ್ಲೆಟಿಕ್ ಮೀಟ್ ಮತ್ತು ಕಿರಿಯರ ಅಥ್ಲೆಟಿಕ್ ಮೀಟ್ ಕ್ರೀಡಾಕೂಟಕ್ಕೆ ಇಂದು ಚಾಲನೆ ನೀಡಲಾಯಿತು.
ಮಂಗಳೂರು ವಿಶ್ವವಿದ್ಯಾಲಯದ ರಿಜಿಸ್ಟ್ರಾರ್ ಡಾ.ಕಿಶೋರ್ ಕುಮಾರ್ ಸಿ.ಕೆ. ಚಾಂಪಿಯನ್‌ಶಿಪ್‌ನ್ನು ಉದ್ಘಾಟಿಸಿದರು. ಉಡುಪಿ MLA ಕೆ.ರಘುಪತಿ ಭಟ್ ಅಧ್ಯಕ್ಷತೆ ವಹಿಸಿದ್ದರು.
ಲಯನ್ಸ್ 317ಸಿ ಜಿಲ್ಲಾ ಗವರ್ನರ್ ಎಂ.ಕೆ.ಭಟ್, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನುಗಾರಿಕಾ ಫೇಡರೇಶನ್ ಅಧ್ಯಕ್ಷ ಯಶ್‌ಪಾಲ್ ಸುವರ್ಣ, ಉಡುಪಿ ಜಿಲ್ಲಾ ಅಮೆಚೂರ್ ಅಥ್ಲೆಟಿಕ್ ಅಸೋಸಿಯೇಶನ್ ಮಾಜಿ ಅಧ್ಯಕ್ಷ ಅಶೋಕ್ ಅಡ್ಯಂತಾಯ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.
ವೇದಿಕೆಯಲ್ಲಿ ಲಯನ್ಸ್ ಕ್ಲಬ್ ಉಡುಪಿ ಅಮೃತ್ ಅಧ್ಯಕ್ಷ ಜಯಪ್ರಕಾಶ್ ಭಂಡಾರಿ, ಜಿಲ್ಲಾ ಅಮೆಚೂರ್ ಅಥ್ಲೆಟಿಕ್ ಅಸೋಸಿಯೇಶನ್ ಅಧ್ಯಕ್ಷ ಡಾ. ಕೆಂಪರಾಜ್, ಮಂಗಳೂರು ವಿಶ್ವವಿದ್ಯಾಲಯದ ದೈಹಿಕ ಶಿಕ್ಷಣ ವಿಭಾಗದ ನಿರ್ದೇಶಕ ಜೆೆರಾಲ್ಡ್ ಸಂತೋಷ್ ಡಿಸೋಜ ಉಪಸ್ಥಿತರಿದ್ದರು.
ತೆಂಕನಿಡಿಯೂರು ಕಾಲೇಜಿನ ಪ್ರಾಂಶುಪಾಲ ಸುರೇಶ್ ರೈ ಕೆ. ಸ್ವಾಗತಿಸಿದರು. ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಡಾ.ರೋಶನ್ ಕುಮಾರ್ ಶೆಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಸತೀಶ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.
2 ಸಾವಿರ ಕ್ರೀಡಾಪಟುಗಳು ಭಾಗಿ:
ಮಂಗಳೂರು ವಿವಿ ಚಾಂಪಿಯನ್‌ಶಿಪ್‌ನಲ್ಲಿ 1300, ದಿವ್ಯಾಂಗರ ಕ್ರೀಡಾಕೂಟದಲ್ಲಿ 300 ಮತ್ತು ಕಿರಿಯರ ಅಥ್ಲೆಟಿಕ್ ಮೀಟ್ ನಲ್ಲಿ 400 ವಿದ್ಯಾರ್ಥಿಗಳು ಪಾಲ್ಗೊಂಡಿದ್ದಾರೆ.