ರಂಗೇರುತ್ತಿರುವ ಚುನಾವಣೆ ಕಾವು; 150 ಅಭ್ಯರ್ಥಿಗಳ ಹೆಸರು ಅಂತಿಮಗೊಳಿಸಿದ ಕಾಂಗ್ರೆಸ್
ಬೆಂಗಳೂರು: ರಾಜ್ಯದಲ್ಲಿ ಚುನಾವಣಾ ಕಾವು ರಂಗೇರುತ್ತಿದ್ದು, ಈ ಮಧ್ಯೆ ಕಾಂಗ್ರೆಸ್ ತನ್ನ 150 ಅಭ್ಯರ್ಥಿಗಳ ಹೆಸರು ಅಂತಿಮಗೊಳಿಸಿದೆ.
ಕಾಂಗ್ರೆಸ್ ಸ್ಕ್ರೀನಿಂಗ್ ಕಮಿಟಿ ಅಧ್ಯಕ್ಷ ಮೋಹನ್ ಪ್ರಕಾಶ್ ಸಮ್ಮುಖದಲ್ಲಿ ಮಂಗಳವಾರ ರಾತ್ರಿ ಕಾಂಗ್ರೆಸ್ ನಾಯಕರ ಸಭೆ ನಡೆದಿದ್ದು, ಈ ಸಭೆಯಲ್ಲಿ ಸುಮಾರು 150 ಅಭ್ಯರ್ಥಿಗಳ ಹೆಸರು ಅಂತಿಮಗೊಳಿಸಲಾಗಿದೆ ಎಂಬ ಮಾಹಿತಿ ಹೊರಬಿದ್ದಿದೆ.
ಕಾಂಗ್ರೆಸ್ ಸ್ಕ್ರೀನಿಂಗ್ ಕಮಿಟಿ ಅಧ್ಯಕ್ಷ ಮೋಹನ್ ಪ್ರಕಾಶ್ ಕಳೆದ 3 ದಿನಗಳಲ್ಲಿ ರಾಜ್ಯದಲ್ಲಿ ಬೀಡು ಬಿಟ್ಟಿದ್ದಾರೆ. KPCC ಕಾರ್ಯಾಧ್ಯಕ್ಷರು, AICC ಕಾರ್ಯದರ್ಶಿಗಳು, ವಿಧಾನಪರಿಷತ್ ಪ್ರತಿಪಕ್ಷದ ನಾಯಕ ಬಿ.ಕೆ ಹರಿಪ್ರಸಾದ್, ಎಂಬಿ ಪಾಟೀಲ್ ಸೇರಿದಂತೆ ಪ್ರಮುಖರ ಜೊತೆಗೆ ಸಭೆ ನಡೆಸಿ, ಈ ಬಾರಿ ಯಾರೆನ್ನೆಲ್ಲ ಕಣಕ್ಕಿಳಿಸಬೇಕು ಎಂಬ ಬಗ್ಗೆ ಚರ್ಚೆ ನಡೆದಿದೆ.
ಕಾಂಗ್ರೆಸ್ ಟಿಕೆಟ್ ನೀಡುವ ವಿಚಾರವಾಗಿ ನಿನ್ನೆ ರಾತ್ರಿ ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್, ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ, ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಸಭೆ ನಡೆಸಿದ್ದಾರೆ. ಸಭೆಯಲ್ಲಿ ಬಿ.ಕೆ ಹರಿ ಪ್ರಸಾದ್, ಎಂಬಿ ಪಾಟೀಲ್, ಸ್ಕ್ರೀನಿಂಗ್ ಕಮಿಟಿ ಅಧ್ಯಕ್ಷ ಮೋಹನ್ ಪ್ರಕಾಶ್ ಉಪಸ್ಥಿತರಿದ್ದರು.
150 ಅಭ್ಯರ್ಥಿಗಳ ಹೆಸರನ್ನು ಅಂತಿಮಗೊಳಿಸಲಾಗಿದ್ದು, ಈ ಹೆಸರುಗಳನ್ನು ಕೇಂದ್ರ ಚುನಾವಣಾ ಸಮಿತಿಗೆ ಕಳಿಸಿಕೊಡಲು ತೀರ್ಮಾನ ಮಾಡಲಾಗಿದೆ ಎಂದು ತಿಳಿದುಬಂದಿದೆ.