ಭಟ್ಕಳದಲ್ಲಿ ಮೀನೂಟ ಸವಿದು ದೇವರ ದರ್ಶನ ಮಾಡಿದ ಸಿ.ಟಿ ರವಿ ಫೋಟೋ ವೈರಲ್; ಬಿಜೆಪಿ ವಿರುದ್ಧ ಮುಗಿಬಿದ್ದ ಕಾಂಗ್ರೆಸ್
ಬೆಂಗಳೂರು: ಮೀನೂಟ ತಿಂದು ಧರ್ಮಸ್ಥಳಕ್ಕೆ ಹೋಗಿದ್ದರೆಂಬ ಕಾರಣಕ್ಕೆ ಹಿಂದೆ ಸಿದ್ದರಾಮಯ್ಯ ವಿರುದ್ಧ ದೊಡ್ಡ ವಿವಾದವನ್ನೇ ಸೃಷ್ಟಿಸಿದ್ದ ಬಿಜೆಪಿಯವರಿಗೆ ಈಗ ಇಂಥದ್ದೇ ಒಂದು ಸಂಕಷ್ಟ ಎದುರಾಗಿದೆ.
BJP ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಇಂಥದ್ದೇ ವಿವಾದಕ್ಕೆ ಸಿಲುಕಿದ್ದು, ಮಾಂಸದೂಟ ಸೇವನೆ ಮಾಡಿ ಕಾರವಾರದಲ್ಲಿ ದೇವಸ್ಥಾನಕ್ಕೆ ಹೋಗಿದ್ದಾರೆ. ಫೆಬ್ರವರಿ 19 ರಂದು ರವಿವಾರ ಸಿ.ಟಿ ರವಿ ಉತ್ತರ ಕನ್ನಡ ಜಿಲ್ಲೆಯ ಪ್ರವಾಸದ ವೇಳೆ ಭಟ್ಕಳದ ಶಿರಾಲಿಯಲ್ಲಿ ಶಾಸಕ ಸುನೀಲ್ ನಾಯ್ಕ ಮನೆಯಲ್ಲಿ ಮೀನೂಟ ತಿಂದು, ದೇವರ ದರ್ಶನ ಮಾಡಿದ್ದು, ಸಾಮಾಜಿಕ ಜಾಲತಾಣದಲ್ಲಿ ಫೋಟೋಗಳು ಹರಿದಾಡುತ್ತಿದ್ದು, ವಿವಾದಕ್ಕೆ ಕಾರಣವಾಗಿದೆ.
ಮೀನೂಟ ತಿಂದು ಸಿ.ಟಿ ರವಿ ಭಟ್ಕಳ ನಗರದ ಹಳೇ ಬಸ್ ನಿಲ್ದಾಣ ಸಮೀಪ ಇರುವ ನಾಗಬನ ಹಾಗೂ ಕರಿಬಂಟ ಹನುಮ ದೇವಸ್ಥಾನಕ್ಕೆ ಭಟ್ಕಳ ಶಾಸಕ ಸುನಿಲ್ ನಾಯ್ಕ ಹಾಗೂ ದೇವಸ್ಥಾನದ ಕಮಿಟಿ ಸದಸ್ಯರೊಂದಿಗೆ ಭೇಟಿ ನೀಡಿದ್ದರು.
ಸಾಮಾಜಿಕ ಜಾಲತಾಣದಲ್ಲಿ ಸಿ.ಟಿ.ರವಿಯ ಫೋಟೋಗಳು ಹರಿದಾಡುತ್ತಿದ್ದು, ಬಿಜೆಪಿ ವಿರುದ್ಧ ಕಾಂಗ್ರೆಸ್ ನಾಯಕರು ಮುಗಿಬಿದ್ದಿದ್ದಾರೆ. ಹಿಂದೆ ಸಿದ್ದರಾಮಯ್ಯ ಮೀನೂಟ ತಿಂದು ಧರ್ಮಸ್ಥಳಕ್ಕೆ ಹೋಗಿದ್ದನ್ನ ಬಿಜೆಪಿ ದೊಡ್ಡ ವಿವಾದ ಮಾಡಿದ್ದನ್ನು ನೆನಪಿಸಿಕೊಂಡಿರುವ ಕಾಂಗ್ರೆಸ್ಗೆ ಇದೊಂದು ಅಸ್ತ್ರ ಸಿಕ್ಕಂತಾಗಿದೆ.