ಪಿಯುಸಿ ಪರೀಕ್ಷೆಯಲ್ಲಿ ಹಿಜಾಬ್ ಧರಿಸಲು ಅವಕಾಶಕ್ಕಾಗಿ ಅರ್ಜಿ ಸಲ್ಲಿಸಿದ ವಿದ್ಯಾರ್ಥಿನಿಯರ ಗುಂಪು; ವಿಚಾರಣೆಗೆ ಸುಪ್ರೀಂ ಒಪ್ಪಿಗೆ
ನವದೆಹಲಿ: ಈ ಬಾರಿಯ ಪಿಯುಸಿ ಪರೀಕ್ಷೆಯಲ್ಲಿ ಹಿಜಾಬ್ ಧರಿಸಲು ಅವಕಾಶ ನೀಡಬೇಕು ಎಂದು ಕೋರಿ ಕರ್ನಾಟಕದ ವಿದ್ಯಾರ್ಥಿನಿಯರ ಗುಂಪೊಂದು ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ಬುಧವಾರ ಒಪ್ಪಿಗೆ ಸೂಚಿಸಿದೆ.
ಹಿಜಾಬ್ ಕುರಿತ ಅರ್ಜಿಯ ವಿಚಾರಣೆ ನಡೆಸಲು ಒಪ್ಪಿದ ಮುಖ್ಯನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್ ಹಾಗೂ ಪಿ.ಎಸ್ ನರಸಿಂಹ ಅವರಿದ್ದ ಪೀಠ, ಅರ್ಜಿಯನ್ನು ಪಟ್ಟಿ ಮಾಡುವ ಬಗ್ಗೆ ಪರಿಶೀಲನೆ ಮಾಡಲಾಗುವುದು ಎಂದು ಪೀಠ ಹೇಳಿದೆ.
ಬರುವ ತಿಂಗಳ ಮಾರ್ಚ್ 9 ರಿಂದ ದ್ವಿತೀಯ PUC ಪರೀಕ್ಷೆಗಳು ಆರಂಭವಾಗಲಿದ್ದು, ಸರ್ಕಾರಿ ಕಾಲೇಜುಗಳಲ್ಲಿ ಹಿಜಾಬ್ ಧರಿಸಿ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಬೇಕು ಎಂದು ವಿದ್ಯಾರ್ಥಿನಿಯರ ಪರ ನ್ಯಾಯವಾದಿ ಶಾದನ್ ಫರಾಸತ್ ಅವರು ಪೀಠಕ್ಕೆ ಮನವಿ ಮಾಡಿದರು.
ಈಗಾಗಲೇ ಹಿಜಾಬ್ ವಿವಾದದಿಂದಾಗಿ ವಿದ್ಯಾರ್ಥಿನಿಯರ 1 ಶೈಕ್ಷಣಿಕ ವರ್ಷ ಹಾಳಾಗಿದೆ. ಮತ್ತೊಂದು ವರ್ಷ ಹಾಳಾಗದೆ ಇರಲು, ಅವರಿಗೆ ಹಿಜಾಬ್ ಧರಿಸಿ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಬೇಕು. ಅರ್ಜಿ ಸಲ್ಲಿಸಿರುವ ಈ ಎಲ್ಲಾ ವಿದ್ಯಾರ್ಥಿಗಳು ಈಗ ಖಾಸಗಿ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದು, ಪರೀಕ್ಷೆ ಬರೆಯಲು ಸರ್ಕಾರಿ ಕಾಲೇಜಿಗೆ ತೆರಳಬೇಕು. ಹೀಗಾಗಿ ಅಲ್ಲಿ ಪರೀಕ್ಷೆ ಬರೆಯುವ ವೇಳೆ ಹಿಜಾಬ್ ಧರಿಸಲು ಅವಕಾಶ ನೀಡಬೇಕು ಎಂದು ಮನವಿ ಮಾಡಿದ್ದಾರೆ.
ಕರ್ನಾಟಕದ PU ಕಾಲೇಜುಗಳಲ್ಲಿ ಹಿಜಾಬ್ ನಿಷೇಧ ಸಂಬಂಧ, 2022ರ ಅಕ್ಟೋಬರ್ 13 ರಂದು ಸುಪ್ರೀಂ ಕೋರ್ಟ್‌ನ ದ್ವಿಸದಸ್ಯ ಪೀಠ ಭಿನ್ನ ತೀರ್ಪು ನೀಡಿತ್ತು. ಈ ಕಾರಣದಿಂದ ತ್ರಿದಸ್ಯ ಪೀಠಕ್ಕೆ ಪ್ರಕರಣವನ್ನು ವರ್ಗಾವಣೆ ಮಾಡಲಾಗಿತ್ತು.