ಮುಸ್ಲಿಮರ 2ಬಿ ಮೀಸಲಾತಿ ರದ್ದುಗೊಳಿಸಿದ ರಾಜ್ಯ ಬಿಜೆಪಿ ಸರ್ಕಾರ; ಒಕ್ಕಲಿಗ, ಲಿಂಗಾಯತರಿಗೆ ಮೀಸಲಾತಿ ಹೆಚ್ಚಳ: ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ
ಬೆಂಗಳೂರು: ರಾಜ್ಯದಲ್ಲಿ ಚುನಾವಣಾ ಹತ್ತಿರವಾಗುತ್ತಿದ್ದಂತೆಯೇ ಎರಡು ಬೃಹತ್ ಸಮುದಾಯಗಳನ್ನು ಸೆಳೆಯುವ ತಂತ್ರಗಾರಿಕೆಯನ್ನು ಬಿಜೆಪಿ ಸರ್ಕಾರ ಮಾಡಿದೆ. ಒಕ್ಕಲಿಗರಿಗೆ ಹಾಗು ಲಿಂಗಾಯತರಿಗೆ 2ಸಿ ಮತ್ತು 2ಡಿ ಅಡಿ ಮೀಸಲಾತಿ ಪ್ರಮಾಣವನ್ನು ಕ್ರಮವಾಗಿ ಶೇ 4ರಿಂದ 6 ಹಾಗೂ ಶೇ 5ರಿಂದ 7ಕ್ಕೆ ಹೆಚ್ಚಿಸಲಾಗಿದ್ದು, ಇದಕ್ಕಾಗಿ ಮುಸ್ಲಿಮರಿಗೆ 2ಬಿ ಅಡಿ ನೀಡಲಾಗುತ್ತಿದ್ದ ಮೀಸಲಾತಿಯನ್ನು ರಾಜ್ಯ ಬಿಜೆಪಿ ಸರ್ಕಾರ ರದ್ದುಗೊಳಿಸಿದೆ.
ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ ಕೈಗೊಂಡಿರುವ ರಾಜ್ಯ ಸರಕಾರ, ಮುಸ್ಲಿಮರಿಗೆ ಆರ್ಥಿಕವಾಗಿ ಹಿಂದುಳಿದವರ ವರ್ಗದಲ್ಲಿ (EWS) ಮೀಸಲಾತಿ ನೀಡಲು ನಿರ್ಧರಿಸಿದೆ.
ಶುಕ್ರವಾರ ವಿಧಾನಸೌಧದಲ್ಲಿ ನಡೆದ ಮಹತ್ವದ ಸಚಿವ ಸಂಪುಟ ಸಭೆಯ ನಂತರ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಎಸ್ಸಿ ಎಸ್ಟಿ ಮೀಸಲಾತಿ ಪ್ರಮಾಣ ಹೆಚ್ಚಳಕ್ಕೆ ಕ್ರಮ ಕೈಗೊಂಡಿದ್ದೇವೆ ಎಂದು ಹೇಳಿದರು.
ಬಂಜಾರ, ಬೋವಿ ಸಮುದಾಯವನ್ನು SCಯಿಂದ ಹೊರಗಿಡಲಾಗಲ್ಲ, ಎಲ್ಲಾ ದಾಖಲೆ ಪರಿಶೀಲಿಸಿ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿದ್ದು, ST ಸಮುದಾಯದಲ್ಲಿ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ನೀಡಲಾಗುತ್ತದೆ ಎಂದ ಬೊಮ್ಮಾಯಿ, SC ಸಮುದಾಯಕ್ಕೆ ಒಳ ಮೀಸಲಾತಿ ನೀಡಲು ಸಂಪುಟ ನಿರ್ಧಾರ ಕೈಗೊಂಡಿದೆ. SC ಮೀಸಲಾತಿಯನ್ನು 4 ಗುಂಪುಗಳಾಗಿ ವರ್ಗೀಕರಿಸಿ ಜನಸಂಖ್ಯೆಗೆ ಅನುಗುಣವಾಗಿ ನೀಡಲಾಗಿದೆ ಎಂದರು.