SC-ST ಮೀಸಲಾತಿ ವಿಳಂಬ; ಕಾಂಗ್ರೆಸ್‌ನಿಂದ ರಾಜಭವನ ಚಲೋಗೆ ಯತ್ನ; ಸಿದ್ದರಾಮಯ್ಯ, ಡಿಕೆಶಿ ಸೇರಿದಂತೆ ಹಲವು ಕಾಂಗ್ರೆಸ್ ನಾಯಕರು ಪೊಲೀಸರ ವಶಕ್ಕೆ
ಬೆಂಗಳೂರು: ಮೀಸಲಾತಿ ಹೆಚ್ಚಳವನ್ನು ಸಂವಿಧಾನದ 9ನೇ ಪರಿಚ್ಛೇದಕ್ಕೆ ಸೇರಿಸಲು ರಾಜ್ಯ ಸರ್ಕಾರ ಕೇಂದ್ರಕ್ಕೆ ಶಿಫಾರಸು ಮಾಡುವಲ್ಲಿ ವಿಳಂಬ ಧೋರಣೆ ಅನುಸರಿಸಿದೆ ಎಂದು ಆರೋಪಿಸಿ ಕಾಂಗ್ರೆಸ್ ಮುಖಂಡರು,ಕಾರ್ಯಕರ್ತರು ಶುಕ್ರವಾರ ನಗರದಲ್ಲಿ ರಾಜಭವನ ಚಲೋ ನಡೆಸಿದರು.
ಕೆಪಿಸಿಸಿ ಕಚೇರಿಯಿಂದ ರಾಲಿ ಆರಂಭಿಸಿ ರಾಜಭವನ ಮುತ್ತಿಗೆಗೆ ಯತ್ನಿಸಿದ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಸೇರಿದಂತೆ ಹಲವು ಕಾಂಗ್ರೆಸ್ ನಾಯಕರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಪ್ರತಿಭಟನೆಯಲ್ಲಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಮೇಲ್ಮನೆ ಪ್ರತಿಪಕ್ಷ ನಾಯಕ ಬಿ.ಕೆ.ಹರಿಪ್ರಸಾದ್, ಕಾರ್ಯಾಧ್ಯಕ್ಷ ರಾಮಲಿಂಗಾ ರೆಡ್ಡಿ, ಸಲೀಂ ಅಹಮ್ಮದ್ ಸೇರಿದಂತೆ ಕಾಂಗ್ರೆಸ್ ನಾಯಕರು, ಕಾರ್ಯಕರ್ತರು ಪಾಲ್ಗೊಂಡಿದ್ದರು.
ಬಿಜೆಪಿ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದ ಕೈ ನಾಯಕರು SC-ST ಮೀಸಲಾತಿ ಸಂಬಂಧ ಶೆಡ್ಯೂಲ್ 9ಕ್ಕೆ ಸೇರ್ಪಡೆಗೊಳಿಸಲು ಕೋರಿ ಕೇಂದ್ರ ಸರ್ಕಾರಕ್ಕೆ ವಿಳಂಬವಾಗಿ ಶಿಫಾರಸು ಮಾಡಿರುವ ವಿರುದ್ಧ ಆಕ್ರೋಶ ಹೊರಹಾಕಿದರು. ರಾಜ್ಯ ಹಾಗು ಕೇಂದ್ರ ಬಿಜೆಪಿ ಸರ್ಕಾರ ದಲಿತ ವಿರೋಧಿ ಸರ್ಕಾರ ಎಂದು ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.