ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಿಜೆಪಿ ಶಾಸಕ ಎನ್.ವೈ. ಗೋಪಾಲಕೃಷ್ಣ; ಕಾಂಗ್ರೆಸ್ ಸೇರ್ಪಡೆಗೆ ಸಿದ್ಧತೆ
ಶಿರಸಿ: ಕೂಡ್ಲಿಗಿಯ BJP ಶಾಸಕ ಎನ್.ವೈ. ಗೋಪಾಲಕೃಷ್ಣ ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರನ್ನು ಭೇಟಿಯಾಗಿ ಶುಕ್ರವಾರ ರಾಜೀನಾಮೆ ಸಲ್ಲಿಸಿದ್ದಾರೆ.
ಕಾಂಗ್ರೆಸ್ ಸೇರ್ಪಡೆ ಸಂಬಂಧ ಈಗಾಗಲೇ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆನ್ನಲಾಗಿದ್ದು, ಈ ಹಿನ್ನೆಲೆಯಲ್ಲಿ ಇಂದು ರಾಜೀನಾಮೆ ನೀಡಿದ್ದಾರೆ.
ಶಿರಸಿಯ ಕಚೇರಿಗೆ ಆಗಮಿಸಿದ್ದ ಶಾಸಕ ಗೋಪಾಲಕೃಷ್ಣ ಅವರು ಕಾಗೇರಿಯವರೊಂದಿಗೆ ಉಭಯಕುಶಲೋಪರಿ ಮಾತನಾಡಿ, ಬಳಿಕ ತನ್ನ ರಾಜೀನಾಮೆ ಪತ್ರ ಸಲ್ಲಿಸಿದರು.
ಗೋಪಾಲಕೃಷ್ಣ ಮೂಲತಃ ಕಾಂಗ್ರೆಸ್ ಪಕ್ಷದಲ್ಲಿ ಗುರುತಿಸಿಕೊಂಡು ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ವಿಧಾನಸಭಾ ಕ್ಷೇತ್ರದಿಂದ ಶಾಸಕರಾಗಿ 4 ಬಾರಿ ಶಾಸಕರಾಗಿ ಗೆದ್ದಿದ್ದರು. 2018ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ಕಾಂಗ್ರೆಸ್ಸಿನೊಂದಿಗೆ ಮುನಿಸಿಕೊಂಡು ಬಿಜೆಪಿ ಪಕ್ಷ ಸೇರ್ಪಡೆಯಾಗಿ ಕೂಡ್ಲಿಗಿ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಜಯಗಳಿಸಿದ್ದರು.