
ಲಂಚ ಪ್ರಕರಣ: ಕೊನೆಗೂ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಬಂಧನ
ಬೆಂಗಳೂರು: ಲಂಚ ಪ್ರಕರಣದ ಪ್ರಮುಖ ಆರೋಪಿಯಾಗಿರುವ ದಾವಣಗೆರೆ ಜಿಲ್ಲೆ ಚನ್ನಗಿರಿ ಕ್ಷೇತ್ರದ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರನ್ನು ಸೋಮವಾರ ಕೊನೆಗೂ ಪೊಲೀಸರು ಬಂಧಿಸಿದ್ದಾರೆ.
ಮಾಡಾಳ್ ವಿರೂಪಾಕ್ಷಪ್ಪ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಇಂದು ಹೈಕೋರ್ಟ್ ಏಕಸದಸ್ಯ ಪೀಠ ವಜಾಗೊಳಿಸಿದ ನಂತರ ವಿರೂಪಾಕ್ಷಪ್ಪರನ್ನು ಬಂಧಿಸಲಾಗಿದೆ.
ಹೈಕೋರ್ಟಿನಲ್ಲಿ ಅರ್ಜಿ ವಜಾಗೊಂಡ ವೇಳೆ ಚನ್ನಗಿರಿಯಲ್ಲಿ ಸರ್ಕಾರಿ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ವಿರೂಪಾಕ್ಷಪ್ಪ, ಕ್ಷಣಮಾತ್ರದಲ್ಲಿ ಅಲ್ಲಿಂದ ತೆರಳಿ ನಾಪತ್ತೆಯಾಗಿದ್ದರು. ವಿರೂಪಾಕ್ಷಪ್ಪರನ್ನು ಬಂಧಿಸುವುದಕ್ಕಾಗಿ ಲೋಕಾಯುಕ್ತ ಪೊಲೀಸರ ತಂಡ ಅವರ ನಿವಾಸಕ್ಕೆ ತೆರಳಿದ್ದು, ಈ ವೇಳೆ ಅವರು ಬೆಂಗಳೂರಿಗೆ ಕಾರಿನಲ್ಲಿ ತೆರಳಿದ್ದಾರೆ ಎನ್ನಲಾಗಿತ್ತು. ಇದೀಗ ಕೊನೆಗೂ ವಿರೂಪಾಕ್ಷಪ್ಪರನ್ನು ಬಂಧಿಸುವಲ್ಲಿ ಲೋಕಾಯುಕ್ತ ಪೊಲೀಸರು ಯಶಸ್ವಿಯಾಗಿದ್ದಾರೆ. ಚನ್ನಗಿರಿಯಿಂದ ಬೆಂಗಳೂರಿಗೆ ಬರುತ್ತಿದ್ದಾಗ ಅವರನ್ನು ಲೋಕಾಯುಕ್ತ ಪೊಲೀಸರ ತಂಡ ಬಂಧಿಸಲಾಗಿದೆ.
ವಿರುಪಾಕ್ಷಪ್ಪ ಮಾಡಾಳ್ ಅವರ ಪುತ್ರ KAS ಅಧಿಕಾರಿ ಪ್ರಶಾಂತ್ ಮಾಡಾಳ್ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದರು. ಬಳಿಕ ಮಾಡಾಳ್ ವಿರೂಪಾಕ್ಷಪ್ಪ ಅವರ ದಾವಣಗೆರೆ ನಿವಾಸದ ಮೇಲೂ ಲೋಕಾಯುಕ್ತ ದಾಳಿ ನಡೆದಿತ್ತು. ಅಲ್ಲಿಯೂ ಕೋಟ್ಯಂತರ ರೂ. ನಗದು ಪತ್ತೆಯಾಗಿದ್ದು, ಪ್ರಕರಣದಲ್ಲಿ ವಿರೂಪಾಕ್ಷಪ್ಪರನ್ನು ಪ್ರಮುಖ ಆರೋಪಿಯನ್ನಾಗಿ ಮಾಡಲಾಗಿತ್ತು.
ನಂತರ ನಾಪತ್ತೆಯಾಗಿದ್ದ ಮಾಡಾಳ್ ವಿರೂಪಾಕ್ಷಪ್ಪ ಜಾಮೀನು ದೊರೆತ ನಂತರ ಸಾರ್ವಜನಿಕವಾಗಿ ಕಾಣಿಸಿಕೊಂಡಿದ್ದರು. ಅವರಿಗೆ ತರಾತುರಿಯಲ್ಲಿ ಜಾಮೀನು ಮಂಜೂರು ಮಾಡಿದ್ದಕ್ಕೆ ತೀವ್ರ ವಿರೋಧ ವ್ಯಕ್ತವಾಗಿತ್ತು. ಸಿಜೆಐಗೂ ಪತ್ರ ಬರೆಯಲಾಗಿತ್ತು.