ಲಂಚ ಪ್ರಕರಣ: ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪಗೆ ಹೈಕೋರ್ಟ್‌ನಿಂದ ಷರತ್ತುಬದ್ಧ ಜಾಮೀನು ಮಂಜೂರು
ಬೆಂಗಳೂರು: ದಾವಣಗೆರೆಯ ಚನ್ನಗಿರಿ ಕ್ಷೇತ್ರದ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರ ಲಂಚ ಹಣ ಪಡೆಯುವಾಗ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪರಿಗೆ ಹೈಕೋರ್ಟ್ ಮಂಗಳವಾರ ಷರತ್ತುಬದ್ಧ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.
ವಿರೂಪಾಕ್ಷಪ್ಪ ಪುತ್ರ ಮಾಡಾಳ್ ಪ್ರಶಾಂತ್ ಮೇಲೆ ಲೋಕಾಯುಕ್ತ ಪೊಲೀಸರು ನಡೆಸಿದ ದಾಳಿಯ ನಂತರ ಅವರ ನಿವಾಸ ಮತ್ತು ಕಚೇರಿಯಲ್ಲಿ ಸಿಕ್ಕಿದ 8 ಕೋಟಿಗೂ ಅಧಿಕ ಲೆಕ್ಕಕ್ಕೆ ಸಿಗದ ನಗದು ಪ್ರಕರಣ ಹಿನ್ನೆಲೆಯಲ್ಲಿ ಮಾಡಾಳ್ ವಿರೂಪಾಕ್ಷಪ್ಪ ಸೇರಿದಂತೆ 6 ಮಂದಿ ವಿರುದ್ಧ ಪ್ರಕರಣ ದಾಖಲಾಗಿತ್ತು.
ಮಂಗಳವಾರ ವಿಚಾರಣೆ ನಡೆಸಿ ತೀರ್ಪು ನೀಡಿದ ಹೈಕೋರ್ಟ್ ನ ಏಕಸದಸ್ಯ ಪೀಠ, ಶಾಸಕ ವಿರೂಪಾಕ್ಷಪ್ಪರಿಗೆ ಮಧ್ಯಂತರ ಜಾಮೀನು ನೀಡಿ ಆದೇಶ ಪ್ರತಿ ಕೈಗೆ ಸಿಕ್ಕಿದ 48 ಗಂಟೆಗಳೊಳಗೆ ಶರಣಾಗುವಂತೆ ಶಾಸಕರಿಗೆ ಸೂಚಿಸಿದೆ.
ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತದ (KSDL) ಟೆಂಡರ್ ಪ್ರಕ್ರಿಯೆ ಯಲ್ಲಿ ಲಂಚ ಪಡೆದ ಪ್ರಕರಣದಲ್ಲಿ ಮೊದಲನೇ ಆರೋಪಿಯಾಗಿರುವ ಚನ್ನಗಿರಿ ಕ್ಷೇತ್ರದ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ, ಪ್ರಕರಣದ ನಂತರ ತಲೆಮರೆಸಿಕೊಂಡಿದ್ದು, ಲೋಕಾಯುಕ್ತ ಪೊಲೀಸರು ಬಂಧನಕ್ಕಾಗಿ ಹುಡುಕಾಟ ನಡೆಸಿದ್ದರು. ಈಗ ವಿರೂಪಾಕ್ಷಪ್ಪರಿಗೆ ಹೈಕೋರ್ಟ್ ಷರತ್ತುಬದ್ಧ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.
ಶಾಸಕರು-ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ಮೇಲ್ಮನವಿ ವಿಚಾರಣೆಯ ವಿಶೇಷ ನ್ಯಾಯಪೀಠದ ನ್ಯಾಯಮೂರ್ತಿ ಕೆ.ನಟರಾಜನ್ ಅವರು ಬಿಜೆಪಿ ಶಾಸಕ ವಿರೂಪಾಕ್ಷಪ್ಪ ಅವರ ಜಾಮೀನು ಅರ್ಜಿಯ ವಿಚಾರಣೆ ನಡೆಸಿದರು.
₹ 5 ಲಕ್ಷ ಮೊತ್ತದ ವೈಯಕ್ತಿಕ ಬಾಂಡ್ ಮತ್ತು ಇಬ್ಬರ ಭದ್ರತೆಯ ಷರತ್ತುಗಳೊಂದಿಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದರು. ಈ ಪ್ರಕರಣದ ವಿಚಾರಣೆಯನ್ನು 17ಕ್ಕೆ ಮುಂದೂಡಲಾಗಿದೆ.