ಕಗ್ಗಂಟಾದ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ; ಮೋದಿ, ಶಾ ಜೊತೆ ಮತ್ತೊಮ್ಮೆ ಸಭೆ ನಡೆಸಲಿರುವ ಬೊಮ್ಮಾಯಿ
ಬೆಂಗಳೂರು: ಈ ಬಾರಿಯ ವಿಧಾನಸಭಾ ಚುನಾವಣೆಗೆ ತನ್ನ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಗೆ ಆಡಳಿತಾರೂಢ ಬಿಜೆಪಿ ತನ್ನ ಕಸರತ್ತನ್ನು ಮುಂದುವರಿಸಿದೆ.
ದೆಹಲಿಯಲ್ಲಿ ಸತತ ಮೂರು ದಿನಗಳಿಂದ ಸಭೆ ನಡೆಸಿದ್ದರೂ ಚುನಾವಣೆಗೆ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಬಿಜೆಪಿ ಇನ್ನೂ ಬಿಡುಗಡೆ ಮಾಡಿಲ್ಲ. ಸೋಮವಾರ ಬಿಡುಗಡೆ ಮಾಡುವ ನಿರೀಕ್ಷೆ ಇತ್ತಾದರೂ ಅದೂ ಆಗಿಲ್ಲ.
ಈ ಮಧ್ಯೆ ಬುಧವಾರದಂದು ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದು, ಪಟ್ಟಿ ಅಂತಿಮಗೊಂಡಿದೆ ಎಂದು ಹೇಳಲಾಗುತ್ತಿದೆ.
ಪ್ರಧಾನಿ ಮೋದಿ ಹಾಗು ಅಮಿತ್ ಶಾ ಅವರೊಂದಿಗೆ ಮತ್ತೊಮ್ಮೆ ಸಭೆ ನಡೆಸಿ ಅಂತಿಮವಾಗಿ ಚರ್ಚಿಸಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮುಂದಾಗಿದ್ದಾರೆ ಎಂದು ಹೇಳಲಾಗುತ್ತಿದೆ.
ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ನಂತರ ಟಿಕೆಟ್ ವಂಚಿತರು ಹಾಗು ನಾಯಕರು ಬಿಜೆಪಿ ವಿರುದ್ಧ ಮುಗಿಬೀಳುವ ಸಾಧ್ಯತೆಯನ್ನು ಅರಿತೇ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯನ್ನು ಮುಂದೂಡುತ್ತಾ ಬಂದಿದೆ ಎಂದು ಹೇಳಲಾಗುತ್ತಿದೆ.