ಮಹಾರಾಷ್ಟ್ರದಲ್ಲಿ ಕಂದಕಕ್ಕೆ ಉರುಳಿ ಬಿದ್ದ ಖಾಸಗಿ ಬಸ್; 12 ಮಂದಿ ಸಾವು; 25ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ
ರಾಯಗಢ(Headlines Kannada): ಮಹಾರಾಷ್ಟ್ರದಲ್ಲಿ ಖಾಸಗಿ ಬಸ್ಸೊಂದು ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ 12 ಮಂದಿ ಸಾವನ್ನಪ್ಪಿರುವ ಘಟನೆ ಇಂದು ನಡೆದಿದೆ.
ರಾಯಗಢದ ಪುಣೆ- ಮುಂಬೈ ಹೆದ್ದಾರಿಯಲ್ಲಿ ಶನಿವಾರ ಬೆಳಗ್ಗೆ 4 ಗಂಟೆ ದುರ್ಘಟನೆ ನಡೆದಿದ್ದು, ಘಟನೆಯಲ್ಲಿ 25ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆಂದು ಪೊಲೀಸರು ತಿಳಿಸಿದ್ದಾರೆ.
ಪುಣೆಯಿಂದ ಮುಂಬೈ ಕಡೆಗೆ ಹೋಗುತ್ತಿದ್ದ ಬಸ್ಸಿನಲ್ಲಿ 40 ಪ್ರಯಾಣಿಕರರಿದ್ದರು. ಬೆಳಗಿನ ಜಾವ 4 ಗಂಟೆ ಸುಮಾರಿಗೆ ಪ್ರಯಾಣಿಕರು ನಿದ್ರೆಯಲ್ಲಿದ್ದಾಗ ಪುಣೆ ಮುಂಬೈ ಹೆದ್ದಾರಿಯ ಖೋಪೋಲಿಯಲ್ಲಿ ವೇಗವಾಗಿ ಸಾಗುತ್ತಿದ್ದ ಬಸ್, ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಬಿದ್ದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ.
ಬಸ್ ಸಂಪೂರ್ಣ ನುಜ್ಜುಗುಜ್ಜಾಗಿದ್ದು, ಸ್ಥಳದಲ್ಲಿ 12 ಮಂದಿ ಸಾವನ್ನಪ್ಪಿದ್ದಾರೆ, 25ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ. ಅವರನ್ನು ಸ್ಥಳೀಯ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಘಟನೆಯ ಬಗ್ಗೆ ಮಾಹಿತಿ ತಿಳಿದ ತಕ್ಷಣ ಘಟನಾ ಸ್ಥಳಕ್ಕೆ ಬಂದ ರಕ್ಷಣಾ ಪಡೆ ಸಿಬ್ಬಂದಿ ಬಸ್ನಲ್ಲಿದ್ದ ಜನರನ್ನು ರಕ್ಷಣೆ ಮಾಡಿದರು.