ಸಿದ್ದರಾಮಯ್ಯ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದ ಶಾಲಾ ಶಿಕ್ಷಕ ಅಮಾನತು
ಚಿತ್ರದುರ್ಗ: ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೂತನ ಸರ್ಕಾರ ರಚನೆಯಾದ ಬೆನ್ನಲ್ಲೇ, ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದ ಶಿಕ್ಷಕನನ್ನು ಅಮಾನತು ಮಾಡಲಾಗಿದೆ.
ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲೂಕಿನ ಕಾನುಬೇನಹಳ್ಳಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಶಾಂತಮೂರ್ತಿ ಅಮಾನತುಗೊಳಿಸಿ ಬಿಇಒ ಜಯಪ್ಪ ಆದೇಶ ಹೊರಡಿಸಿದ್ದಾರೆ.
ರಾಜ್ಯಕ್ಕಾಗಿ ಮುಖ್ಯಮಂತ್ರಿಗಳು ಮಾಡಿದ ಸಾಲ, ಸಿದ್ದರಾಮಯ್ಯ ಸರ್ಕಾರದ ಅವಧಿಯಲ್ಲಿ 2,42,000 ಕೋಟಿ ಸಾಲ ಆಗಿದೆ. ಬಿಟ್ಟಿ ಭಾಗ್ಯ ಕೊಡದೆ ಇನ್ನೇನು ಎಂದು ಶಿಕ್ಷಕ ಶಾಂತಮೂರ್ತಿ ರಾಜ್ಯ ಸರ್ಕಾರದ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಟೀಕೆ ಮಾಡಿ ಪೋಸ್ಟ್ ಹಾಕಿದ್ದರು. ಈ ಹಿನ್ನೆಲೆಯಲ್ಲಿ ಶಿಕ್ಷಕನನ್ನು ಅಮಾನತುಗೊಳಿಸಲಾಗಿದೆ.
ಎಸ್ಎಂ ಕೃಷ್ಣ, ಧರ್ಮಸಿಂಗ್, ಹೆಚ್ಡಿ ಕುಮಾರಸ್ವಾಮಿ, ಬಿಎಸ್ ಯಡಿಯೂರಪ್ಪ, ಸದಾನಂದ ಗೌಡ, ಜಗದೀಶ್ ಶೆಟ್ಟರ್ ಎಲ್ಲ ಮುಖ್ಯಮಂತ್ರಿಗಳು ಮಾಡಿದ ಒಟ್ಟು ಸಾಲ 71, 331 ಕೋಟಿ ಆಗಿದ್ದರೇ, ಸಿದ್ದರಾಮಯ್ಯನವರು ಮಾಡಿದ ಸಾಲವೇ 2,42,000 ಕೋಟಿ ಆಗಿದೆ. ಕಾಂಗ್ರೆಸ್ ಪಕ್ಷ ಬಿಟ್ಟಿ ಭಾಗ್ಯ ಕೊಡದೆ ಇನ್ನೇನು ಎಂದು ನೂತನ ಸಿಎಂ ಸಿದ್ದರಾಮಯ್ಯ ವಿರುದ್ಧ ಶಿಕ್ಷಕ ಶಾಂತಮೂರ್ತಿ ಅವಹೇಳನಕಾರಿ ವಿಷಯವನ್ನು ತಮ್ಮ ಫೇಸ್‌ಬುಕ್ ಖಾತೆಯಲ್ಲಿ ಹಂಚಿಕೊಂಡಿದ್ದರು. ಈ ವಿಚಾರಕ್ಕೆ ಸಂಬಂಧಿಸಿದಂತೆ ಶಿಕ್ಷಕನ ವಿರುದ್ಧ ಜಿಲ್ಲಾಧಿಕಾರಿಗಳಿಗೆ ದೂರು ಸಲ್ಲಿಸಲಾಗಿದೆ. ಈ ದೂರಿನ ಅನ್ವಯ ಜಿಲ್ಲಾಧಿಕಾರಿಗಳು ಡಿಡಿಪಿಐಗೆ ಕ್ರಮಕೈಗೊಳ್ಳಲು ಸೂಚಿಸಿದ್ದಾರೆ. ಡಿಡಿಪಿಐ ಸೂಚನೆ ಮೇರೆಗೆ ಕ್ಷೇತ್ರ ಶಿಕ್ಷಣಾಧಿಕಾರಿಗಳು ಶಾಂತಮೂರ್ತಿ ಅವರನ್ನು ಅಮಾನತುಗೊಳಿಸಿ ಆದೇಶಿಸಿದ್ದಾರೆ.