ಬಿಜೆಪಿ ಜಾರಿ ಮಾಡಿದ್ದ ಮತಾಂತರ ನಿಷೇಧ ಕಾಯ್ದೆ ತಿದ್ದುಪಡಿ ರದ್ದು: ಸಂಪುಟ ಸಭೆ ಮಹತ್ವದ ತೀರ್ಮಾನ

ಬಿಜೆಪಿ ಜಾರಿ ಮಾಡಿದ್ದ ಮತಾಂತರ ನಿಷೇಧ ಕಾಯ್ದೆ ತಿದ್ದುಪಡಿ ರದ್ದು: ಸಂಪುಟ ಸಭೆ ಮಹತ್ವದ ತೀರ್ಮಾನ


ಬೆಂಗಳೂರು: ಬಿಜೆಪಿ ಅವಧಿಯಲ್ಲಿ ಮಾಡಿದ್ದ ಮತಾಂತರ ನಿಷೇಧ ಕಾಯ್ದೆ ತಿದ್ದುಪಡಿ ರದ್ದು ಮಾಡಲು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ.

ಬಿಜೆಪಿ ಸರ್ಕಾರ ಮತಾಂತರ ನಿಷೇಧ ಕಾಯ್ದೆಯಲ್ಲಿ ಸೇರಿಸಿದ್ದ ಅಂಶಗಳನ್ನು ಕೈಬಿಟ್ಟು ತಿದ್ದುಪಡಿ ಮಾಡಲು ನಿರ್ಧಾರ ಮಾಡಲಾಗಿದೆ. ಜುಲೈ ಅಧಿವೇಶನದಲ್ಲಿ ತಿದ್ದುಪಡಿ ಮಸೂದೆ ಮಂಡನೆ ಆಗಲಿದೆ. 

ಸಚಿವ ಸಂಪುಟ ಮುಗಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಸದೀಯ ವ್ಯವಹಾರಗಳ ಸಚಿವ ಎಚ್​ಕೆ ಪಾಟೀಲ್​, ಸಭೆಯಲ್ಲಿ ಕೈಗೊಳ್ಳಲಾದ ಪ್ರಮುಖ ತೀರ್ಮಾನಗಳ ಬಗ್ಗೆ ಮಾಹಿತಿ ನೀಡಿದರು.

ಧಾರ್ಮಿಕ ಸ್ವಾತಂತ್ರ್ಯ ಹಕ್ಕು ಸಂರಕ್ಷಣಾ ಕಾಯ್ದೆ 2022 ತಿದ್ದುಪಡಿ ರದ್ದು ಮಾಡಲು ಸಂಪುಟ ನಿರ್ಧಾರ ಕೈಗೊಂಡಿದೆ ಎಂದು ಕಾನೂನು ಸಚಿವ ಎಚ್ ಕೆ ಪಾಟೀಲ್ ಹೇಳಿದರು.

ಬಿಜೆಪಿ ಅವಧಿಯಲ್ಲಿ ಜಾರಿಗೆ ತಂದಿದ್ದ, ಮತಾಂತರ ನಿಷೇಧ ಕಾಯ್ದೆ ತಿದ್ದುಪಡಿ ಸಾಕಷ್ಟು ವಿವಾದವನ್ನು‌ ಹುಟ್ಟು ಹಾಕಿತ್ತು. ಮತಾಂತರ ತಡೆಯುವ ನಿಟ್ಟಿನಲ್ಲಿ ಈ ಕಾಯ್ದೆಗೆ ತಿದ್ದುಪಡಿ ಮಾಡಲಾಗಿದೆ ಎಂದು ಬಿಜೆಪಿ ಸರ್ಕಾರ ಸಮರ್ಥಿಸಿಕೊಂಡಿತ್ತು. ಆದರೆ ಸದನದಲ್ಲಿ ಕಾಂಗ್ರೆಸ್ ಇದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿತ್ತು.

ಆದರೆ ಇದೀಗ ಮೂರನೇ ಕ್ಯಾಬಿನೆಟ್ ಸಭೆಯಲ್ಲೇ ಮತಾಂತರ ನಿಷೇಧ ಕಾಯ್ದೆಗೆ ಕೊಕ್ ಕೊಡಲಾಗಿದೆ. ಈ ಕುರಿತಾದ ಮಸೂದೆಯನ್ನು ಮುಂದಿನ ಅಧಿವೇಶನದಲ್ಲಿ ಮಂಡನೆ ಮಾಡಲು ನಿರ್ಧಾರ ಮಾಡಲಾಗಿದೆ ಎಂದು ಕಾನೂನು‌‌ ಸಚಿವ ಎಚ್ ಕೆ ಪಾಟೀಲ್ ತಿಳಿಸಿದರು.

ರಾಷ್ಟ್ರಗೀತೆ ಹಾಡುವ ಸ್ಥಳಗಳಲ್ಲಿ ಸಂವಿಧಾನದ ಪೀಠಿಕೆ ಓದುವುದುನ್ನು ಕಡ್ಡಾಯಗೊಳಿಸಲಾಗುವುದು. ಪಠ್ಯ ಪುಸ್ತಕ ಪರಿಷ್ಕರಣೆಗೆ ಸಚಿವ ಸಂಪುಟ ಸಭೆ ಅನುಮೋದಿಸಿದೆ. ಎಪಿಎಂಸಿ ಕಾನೂನು ಹಿಂಪಡೆಯಲು ಕಾಂಗ್ರೆಸ್ ಸರ್ಕಾರ ನಿರ್ಧರಿಸಿದೆ. ಸಣ್ಣ ನೀರಾವರಿ ಇಲಾಖೆ ಪ್ರಸ್ತಾವನೆಗೆ ಸಂಪುಟ ಅನುಮೋದಿಸಿದೆ. ಬೆಂಗಳೂರು ಗ್ರಾಮಾಂತರ, ತುಮಕೂರು ಜಿಲ್ಲೆಯ 83 ಕೆರೆಗಳ ಭರ್ತಿ ಮಾಡುವುದು. 1081 ಕೋಟಿ ವೆಚ್ಚದಲ್ಲಿ ವೃಷಭಾವತಿ ನಾಲೆ ನೀರು ಶುದ್ಧೀಕರಿಸಿದ ನೀರನ್ನು ಕೆರೆಗಳಿಗೆ ಹರಿಸಲು ಸಂಪುಟ ಸಮ್ಮತಿಸಿದೆ.

ವಿಪತ್ತು ನಿರ್ವಹಣೆ ಪರಿಶೀಲನೆಗೆ ಸಂಪುಟ ಉಪ ಸಮಿತಿ ರಚನೆ ಮಾಡಿದ್ದು, ಸಾರಿಗೆ ನಿಗಮಗಳ 79 ಕೋಟಿ ರೂ. ಮೋಟಾರ್​ ವೆಹಿಕಲ್ ಟ್ಯಾಕ್ಸ್​ ವಿನಾಯಿತಿಗೆ ತಿರ್ಮಾನಿಸಲಾಗಿದೆ.

ಪಠ್ಯಪುಸ್ತಕದಲ್ಲಿ ಹೆಡ್ಗೇವಾರ್, ಸೂಲಿಬೆಲೆ ಬರೆದ ಅಂಶ ಕೈಬಿಟ್ಟ ಸರ್ಕಾರ

ವಿಧಾನಸೌಧದಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಪಠ್ಯ ಪುಸ್ತಕ ಪರಿಷ್ಕರಣೆಗೆ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ. ಆರ್​ಎಸ್​ಎಸ್ ಸಂಸ್ಥಾಪಕ ಕೇಶವ ಹೆಡ್ಗೇವಾರ್​ ಭಾಷಣ ತೆಗೆದಿದ್ದೇವೆ. ಸಾವರ್ಕರ್, ಚಕ್ರವರ್ತಿ ಸೂಲಿಬೆಲೆ ಬರೆದ ಅಂಶಗಳನ್ನು ಸಹ ತೆಗೆದಿದ್ದೇವೆ. ಮಕ್ಕಳು ಸರಿಯಾದ ವಿಚಾರ ಕಲಿಯಬೇಕೆಂದು ಕೆಲ ಬದಲಾವಣೆ ಮಾಡಿದ್ದೇವೆ. ನಾವು ತುಂಬಾ ಆಳವಾಗಿ ಹೋಗಬೇಕಾಗಿತ್ತು, ಹಾಗೆ ಮಾಡಿಲ್ಲ. ಸರ್ಕಾರಕ್ಕೆ ಹೊರೆಯಾಗದಂತೆ ಸರಳವಾಗಿ ಪಠ್ಯ ಪರಿಷ್ಕರಿಸಿದ್ದೇವೆ ಎಂದರು.

Ads on article

Advertise in articles 1

advertising articles 2

Advertise under the article