ಈ ಬಾರಿಯ ಲೋಕಸಭಾ ಚುನಾವಣೆಗೆ ಬಿಜೆಪಿ-ಜೆಡಿಎಸ್ ಮೈತ್ರಿ; ತೆರೆಮರೆಯಲ್ಲಿ ಸಿದ್ಧತೆ ಆರಂಭ: ಕಾಂಗ್ರೆಸ್ ಸರ್ಕಾರಕ್ಕೆ ಠಕ್ಕರ್ ನೀಡಲು ಪ್ಲಾನ್
ಬೆಂಗಳೂರು: ವಿಧಾನಸಭಾ ಚುನಾವಣೆಯ ಹೀನಾಯ ಸೋಲಿನ ಬೆನ್ನಲ್ಲೇ ಮುಂಬರುವ ಚುನಾವಣೆಗಳನ್ನು ಎದುರಿಸಲು ಜೆಡಿಎಸ್ ಈಗಿನಿಂದಲೇ ತೆರೆಮರೆಯಲ್ಲಿ ಸಿದ್ಧತೆ ಆರಂಭಿಸಿದ್ದು, ಸೋಲಿನ ಸೇಡು ತೀರಿಸಿಕೊಳ್ಳಲು ಬಿಜೆಪಿ ಜೊತೆ ಮೈತ್ರಿ ಮಾಡಿಕೊಳ್ಳುವ ಸಾಧ್ಯತೆಯಿದೆ.
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮತ್ತು ಜಿಲ್ಲಾ ಮತ್ತು ತಾಲ್ಲೂಕು ಪಂಚಾಯಿತಿಗಳ ಚುನಾವಣೆಗೆ ತಯಾರಿ ನಡೆಸುತ್ತಿರುವ ಜೆಡಿಎಸ್ ಸದ್ದಿಲ್ಲದೇ ಬಿಜೆಪಿ ಜೊತೆ ಮೈತ್ರಿಗೆ ಮುಂದಾಗಿದೆ ಎಂದು ಹೇಳಲಾಗುತ್ತಿದೆ.
ಬಿಬಿಎಂಪಿ ಮತ್ತು ತಾಲೂಕು ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣೆಯ ಫಲಿತಾಂಶದ ನಂತರ ಲೋಕಸಭೆ ಚುನಾವಣೆಯಲ್ಲಿ ಮೈತ್ರಿ ಮಾಡಿಕೊಳ್ಳಲು ಜೆಡಿಎಸ್ ನಿರ್ಧರಿಸಿದೆ ಎಂದು ತಿಳಿದು ಬಂದಿದೆ.
2024 ರ ಲೋಕಸಭೆ ಚುನಾವಣೆಯಲ್ಲಿ ಜೆಡಿಎಸ್ ಏಕಾಂಗಿಯಾಗಿ ಹೋಗಲಿದೆಯೇ ಅಥವಾ ಸಮಾನ ಮನಸ್ಕ ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಳ್ಳುತ್ತದೆಯೇ ಎಂದು ನಿರ್ಣಯಿಸಲು ಈಗಲೇ ಸಾಧ್ಯವಿಲ್ಲ ಎಂದು ಜೆಡಿಎಸ್ ನಾಯಕರೊಬ್ಬರು ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಗೆ ತಿಳಿಸಿದರು.
ಆದರೆ ಜೆಡಿಎಸ್‌ನ ಹಿರಿಯ ನಾಯಕ ಹಾಗೂ ಮಾಜಿ ಸಿಎಂ ಹೆಚ್‌ಡಿ ಕುಮಾರಸ್ವಾಮಿ ಅವರು ಇತ್ತೀಚೆಗೆ ದೆಹಲಿಗೆ ಭೇಟಿ ನೀಡಿದ್ದು, ಅವರು ಬಿಜೆಪಿಯ ಉನ್ನತ ನಾಯಕರೊಂದಿಗೆ ಮಾತುಕತೆ ನಡೆಸಿರುವ ಸಾಧ್ಯತೆಯಿದೆ ಎಂದು ಕೆಲವು ಬಲ್ಲ ಮೂಲಗಳು ಹೇಳುತ್ತಿವೆ.
ಜೆಡಿಎಸ್ 2019 ರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಂಡು ಸ್ಪರ್ಧಿಸಿತ್ತು . ಎರಡೂ ಪಕ್ಷಗಳು ತಲಾ ಒಂದು ಸ್ಥಾನವನ್ನು ಗೆಲ್ಲುವಲ್ಲಿ ಯಶಸ್ವಿಯಾಗಿದ್ದವು - ಹಾಸನ (ಜೆಡಿಎಸ್) ಮತ್ತು ಬೆಂಗಳೂರು ಗ್ರಾಮಾಂತರ (ಕಾಂಗ್ರೆಸ್). ಅವರ ಜಾತ್ಯತೀತ ತಳಹದಿಯು ಒಂದೇ ಆಗಿರುವುದರಿಂದ ಸೋಲಿಗೆ ಕಾರಣವಾಗಿತ್ತು ಎನ್ನಲಾಗಿತ್ತು.
ಒಂದು ವೇಳೆ ಮೈತ್ರಿ ರಚನೆಯಾದ್ರೆ ಜೆಡಿಎಸ್ ಗೆಲ್ಲುತ್ತೆ ಅಂತ ಹೇಳುವ ಸುಮಾರು 5 ರಿಂದ 6 ಕ್ಷೇತ್ರಗಳನ್ನು ಬಿಟ್ಟುಕೊಡುವುದು. ಇನ್ನುಳಿದ ಕ್ಷೇತ್ರದಲ್ಲಿ ಸಂಪೂರ್ಣ ಬೆಂಬಲವನ್ನು ಬಿಜೆಪಿ ಕೇಳಬಹುದು, ಪ್ರತ್ಯಕ್ಷ ಹಾಗೂ ಪರೋಕ್ಷ ಮೈತ್ರಿ ಮಾಡಿಕೊಂಡರೆ ಎರಡೂ ಪಕ್ಷಗಳಿಗೆ ಸ್ವಲ್ಪ ಮಟ್ಟಿಗೆ ಲಾಭವಾಗಬಹುದು ಎಂಬುದು ರಾಜಕೀಯ ಪಂಡಿತರ ಅಭಿಪ್ರಾಯ.
ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ವಿರುದ್ಧ ಜೆಡಿಎಸ್ ಮತ್ತು ಬಿಜೆಪಿ ಒಟ್ಟಾಗಿ ಕೆಲಸ ಮಾಡುವ ಸಾಧ್ಯತೆಯನ್ನು ತಳ್ಳಿ ಹಾಕುವಂತಿಲ್ಲ, ಏತನ್ಮಧ್ಯೆ, ಬಿಜೆಪಿ ಇನ್ನೂ ವಿಧಾನಸಭೆಯಲ್ಲಿ ತನ್ನ ವಿರೋಧ ಪಕ್ಷದ ನಾಯಕನನ್ನು ಆಯ್ಕೆ ಮಾಡಿಲ್ಲ.
ವಿಧಾನಸಭೆ ಅಧಿವೇಶನ ಆರಂಭಕ್ಕೂ ಮುನ್ನವೇ ನೇಮಕ ಮಾಡಲಾಗುವುದು ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಇತ್ತೀಚೆಗೆ ಹೇಳಿದ್ದರು. ಜುಲೈ 3 ರಿಂದ ಬಜೆಟ್ ಅಧಿವೇಶನ ಪ್ರಾರಂಭವಾಗಲಿದೆ. ಜೆಡಿಎಸ್ ಮತ್ತು ಬಿಜೆಪಿ ಕೆಲವು ವಿಷಯಗಳಲ್ಲಿ ಸರ್ಕಾರವನ್ನು ಸಂಘಟಿಸಿ ಮೂಲೆಗುಂಪು ಮಾಡಬಹುದು ಎನ್ನಲಾಗುತ್ತಿದೆ.(ಕೃಪೆ:ಕನ್ನಡಪ್ರಭ)