'ಗೃಹ ಲಕ್ಷ್ಮಿ' ಯೋಜನೆಗೆ ನಾಳೆಯಿಂದ ಅರ್ಜಿ ಸಲ್ಲಿಕೆ ಆರಂಭ; ಸಾಂಕೇತಿಕವಾಗಿ ಚಾಲನೆ ನೀಡಲಿದ್ದಾರೆ ಸಿಎಂ ಸಿದ್ದರಾಮಯ್ಯ
ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿಗಳಲ್ಲಿ ಒಂದಾದ 'ಗೃಹ ಲಕ್ಷ್ಮಿ' ಯೋಜನೆಗೆ ನಾಳೆಯಿಂದ ಅರ್ಜಿ ಸಲ್ಲಿಕೆಗೆ ಅವಕಾಶ ಕಲ್ಪಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಖಾತೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದರು.
ವಿಧಾನಸೌಧದಲ್ಲಿಂದು ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಬಿಪಿಎಲ್ ಕಾರ್ಡ್, ಅಂತ್ಯೋದಯ ಕಾರ್ಡ್ ನವರಿಗೆ ಈ ಯೋಜನೆ ಲಾಭ ಸಿಗುತ್ತದೆ. ನಾಳೆಯಿಂದ ಆಫ್ ಲೈನ್ ಹಾಗೂ ಅನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು ಎಂದರು.
ನಾಳೆ ಮಧ್ಯಾಹ್ನ 1.30ಕ್ಕೆ ‘ಗೃಹಲಕ್ಷ್ಮೀ’ ಅರ್ಜಿ ಸಲ್ಲಿಕೆಗೆ ಸಿಎಂ ಸಿದ್ದರಾಮಯ್ಯ ಸಾಂಕೇತಿಕವಾಗಿ ಚಾಲನೆ ನೀಡಲಿದ್ದಾರೆ. ಸೇವಾ ಸಿಂಧು ಪೋರ್ಟಲ್ನಲ್ಲಿ ಚಾಲನೆ ನೀಡಲಿದ್ದಾರೆ. ಶಕ್ತಿಭವನದಲ್ಲಿ ಸೇವಾ ಸಿಂಧು ವೆಬ್ಪೋರ್ಟಲ್ ಸಿಎಂರಿಂದ ಲಾಂಚ್ ಮಾಡಲಿದ್ದಾರೆ ಎಂದು ಅವರು ತಿಳಿಸಿದರು.
ಅರ್ಜಿಗಳನ್ನು ಆನ್‌ಲೈನ್ ಮೂಲಕ ಅಥವಾ ಭೌತಿಕವಾಗಿ ಗ್ರಾಮ ಒನ್/ಬೆಂಗಳೂರು ಒನ್/ಕರ್ನಾಟಕ ಒನ್ ಕೇಂದ್ರಗಳಲ್ಲಿ ಸೇವಾಸಿಂಧು ಪೋರ್ಟಲ್ ಮೂಲಕ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಅರ್ಜಿದಾರರ ಹಾಗೂ ಪತಿಯ ಆಧಾರ್ ಕಾರ್ಡ್ ಸಂಖ್ಯೆ ಮೊಬೈಲ್ ಸಂಖ್ಯೆ ಹಾಗೂ ಅರ್ಜಿದಾರರ ಬ್ಯಾಂಕ್ ಖಾತೆ ವಿವರಗಳು ಅಗತ್ಯವಾಗಿರುತ್ತದೆ ಎಂದು ಅವರು ಹೇಳಿದರು.
ಅರ್ಜಿ ಸಲ್ಲಿಕೆಗೆ ಯಾವುದೇ ಕೊನೆಯ ದಿನಾಂಕ ಇರುವುದಿಲ್ಲ. ವರ್ಷವಿಡೀ ನಿರಂತರ ಪ್ರಕ್ರಿಯೆಯಾಗಿರುತ್ತದೆ. ಅರ್ಜಿ ಸಲ್ಲಿಕೆಗೆ ಯಾವುದೇ ಶುಲ್ಕ ವಿಧಿಸಲಾಗುವುದಿಲ್ಲ, ಸಂಪೂರ್ಣ ಉಚಿತವಾಗಿರುತ್ತದೆ. ಯೋಜನೆಯ ಕುರಿತಂತೆ ಸಂದೇಹ/ ಕುಂದುಕೊರತೆಗಳಿದ್ದಲ್ಲಿ ಸಹಾಯವಾಣಿ (Helpline) - 1902 ಗೆ ಸಂಪರ್ಕಿಸಬಹುದಾಗಿದೆ ಎಂದು ಅವರು ಮಾಹಿತಿ ನೀಡಿದರು.
ಗೃಹಲಕ್ಷ್ಮಿ, ಯೋಜನೆಯು ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾಗಿದ್ದು, ಬಿಪಿಎಲ್/ಎಪಿಎಲ್/ಅಂತ್ಯೋದಯ ಕಾರ್ಡ್ ನಲ್ಲಿ ನಮೂದಿಸಿರುವಂತೆ ಕುಟುಂಬದ ಯಜಮಾನಿ ಮಹಿಳೆಗೆ ಪ್ರತಿ ತಿಂಗಳು ರೂ.2000/- ಗಳನ್ನು ನೇರ ನಗದು ವರ್ಗಾವಣೆ ಮೂಲಕ ನೀಡಲಾಗುತ್ತದೆ.
ಇ- ಗವರ್ನೆನ್ಸ್ ಮೂಲಕ ಅರ್ಜಿ ಹಾಕುವ ವ್ಯವಸ್ಥೆ ಮಾಡಿದ್ದೇವೆ. ಅರ್ಜಿದಾರರ ಪತಿ ತೆರಿಗೆದಾರರು ಆಗಿದ್ರೆ ಅರ್ಜಿ ಸ್ವೀಕಾರ ಆಗೋದಿಲ್ಲ. ಹೀಗಾಗಿ ಸುಳ್ಳು ಮಾಹಿತಿ ನೀಡಿ ಅರ್ಜಿ ಸಲ್ಲಿಸಲು ಸಾಧ್ಯವಿಲ್ಲ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದರು.