ಮಹಾರಾಷ್ಟ್ರದಲ್ಲಿ ಚಲಿಸುತ್ತಿದ್ದ ಬಸ್‌ನಲ್ಲಿ ಬೆಂಕಿ; 3 ಮಕ್ಕಳು ಸೇರಿದಂತೆ 26 ಜನರು ಸಜೀವ ದಹನ-7 ಮಂದಿ ಗಂಭೀರ

ಮಹಾರಾಷ್ಟ್ರದಲ್ಲಿ ಚಲಿಸುತ್ತಿದ್ದ ಬಸ್‌ನಲ್ಲಿ ಬೆಂಕಿ; 3 ಮಕ್ಕಳು ಸೇರಿದಂತೆ 26 ಜನರು ಸಜೀವ ದಹನ-7 ಮಂದಿ ಗಂಭೀರ

ಮುಂಬೈ: ಚಲಿಸುತ್ತಿದ್ದ ಬಸ್‌ನಲ್ಲಿ ಬೆಂಕಿ ಹೊತ್ತಿಕೊಂಡು 3 ಮಕ್ಕಳು ಸೇರಿದಂತೆ 26 ಜನರು ಸಜೀವ ದಹನವಾಗಿ, 7 ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಮಹಾರಾಷ್ಟ್ರ ಸಮೃದ್ಧಿ ಮಹಾಮಾರ್ಗ್ ಎಕ್ಸ್​​ಪ್ರೆಸ್ ಹೆದ್ದಾರಿಯಲ್ಲಿ ಶನಿವಾರ ನಡೆದಿದೆ.

ಬುಲ್ಧಾನ ಜಿಲ್ಲೆಯ ಸಿಂಧಖೇದರಾಜ ಬಳಿಯ ಪಿಂಪಲಖುಟಾ ಗ್ರಾಮದ ಬಳಿ ಸಮೃದ್ಧಿ ಹೆದ್ದಾರಿಯಲ್ಲಿ ಈ ಅಪಘಾತ ಸಂಭವಿಸಿದೆ. ಈ ಪ್ರಯಾಣಿಕರ ಬಸ್ ನಾಗ್ಪುರದಿಂದ ಪುಣೆಗೆ ಹೋಗುತ್ತಿತ್ತು ಎನ್ನಲಾಗಿದ್ದು, ಇಂದು ಬೆಳಗಿನ ಜಾವ 2 ಗಂಟೆಗೆ ಸುಮಾರಿಗೆ ಈ ಭೀಕರ ಅಪಘಾತ ಸಂಭವಿಸಿದೆ ಎಂದು ಹೇಳಲಾಗುತ್ತಿದೆ.

ಅಪಘಾತಕ್ಕೀಡಾದ ಬಸ್ ವಿದರ್ಭ ಟ್ರಾವೆಲ್ಸ್​ಗೆ ಸೇರಿದ್ದಾಗಿದ್ದು,  ಬಸ್‌ನಲ್ಲಿ ನಾಗ್ಪುರ, ವಾರ್ಧಾ ಮತ್ತು ಯವತ್ಮಾಲ್‌ನಿಂದ ಪ್ರಯಾಣಿಕರು ಪ್ರಯಾಣಿಸುತ್ತಿದ್ದರು ಎಂದು ವರದಿಗಳು ತಿಳಿಸಿವೆ.

ಸಿಂಧಖೇಡರಾಜ ಸಮೀಪದ ಪಿಂಪಲಖುಟಾ ಗ್ರಾಮದ ಬಳಿ ಸಮೃದ್ಧಿ ಹೆದ್ದಾರಿಯಲ್ಲಿ ಬಸ್ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದಿದೆ. ಈ ವೇಳೆ ಬಸ್'ಗೆ ಬೆಂಕಿ ಹೊತ್ತಿಕೊಂಡಿದೆ. ಬೆಂಕಿ ಕಾಣಿಸಿಕೊಂಡ ನಂತರ ಕೇವಲ ಎಂಟು ಮಂದಿ ಪ್ರಯಾಣಿಕರು ಮಾತ್ರ ಹೊರಬರಲು ಸಾಧ್ಯವಾಗಿದೆ. ಇನ್ನುಳಿದ 25  ಮಂದಿ ಪ್ರಯಾಣಿಕರು ಸಜೀವ ದಹನವಾಗಿದ್ದಾರೆ.

ಇನ್ನು ಬಸ್​ಗೆ ಬೆಂಕಿ ಬಿದ್ದ ಸುದ್ದಿ ತಿಳಿದ ಪೊಲೀಸರು ಮತ್ತು ಅಗ್ನಿ ಶಾಮಕದಳ ಸಿಬ್ಬಂದಿ ಕೂಡಲೇ ಸ್ಥಳಕ್ಕೆ ದೌಡಾಯಿಸಿ ರಕ್ಷಣಾ ಕಾರ್ಯಾಚರಣೆ ಕೈಗೊಂಡರು. ಬಸ್ಸಿನಿಂದ 25 ಮೃತದೇಹಗಳನ್ನು ಹೊರತೆಗೆದು ಸರ್ಕಾರಿ ಆಸ್ಪತ್ರೆಗೆ ರವಾನಿಸಿದ್ದಾರೆ. ಅಲ್ಲದೆ, ಘಟನೆಯಲ್ಲಿ ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಗಾಯಗೊಂಡಿದ್ದ 8 ಮಂದಿಯ ಪೈಕಿ ಇದೀಗ ಓರ್ವ ವ್ಯಕ್ತಿ ಸಾವನ್ನಪ್ಪಿದ್ದು, ಇದರೊಂದಿಗೆ ಮೃತರ ಸಂಖ್ಯೆ 26ಕ್ಕೆ ಏರಿಕೆಯಾಗಿದೆ.

ಘಟನೆ ವೇಳೆ ಬಸ್ಸಿನಲ್ಲಿ ಒಟ್ಟು 33 ಜನರು ಪ್ರಯಾಣಿಸುತ್ತಿದ್ದರು ಎಂದು ಎನ್ನಲಾಗಿದೆ. ಗಾಯಾಳುಗಳನ್ನು ಬುಲ್ಧಾನ ಸಿವಿಲ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಎಂದು ಬುಲ್ಧಾನ ಪೊಲೀಸ್ ಉಪ ಎಸ್ಪಿ ಬಾಬುರಾವ್ ಮಹಾಮುನಿ ತಿಳಿಸಿದ್ದಾರೆ.

ಸುರಕ್ಷಿತವಾಗಿ ಪಾರಾದವರಲ್ಲಿ ಚಾಲಕ ಮತ್ತು ಸಹಾಯಕ ಸೇರಿದ್ದಾರೆ. ಇದೇ ವೇಳೆ ಗಾಯಾಳುಗಳನ್ನು ಸಮೀಪದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಾಹಿತಿಯ ಪ್ರಕಾರ, ಈ ಪ್ರಯಾಣಿಕರಲ್ಲಿ ಹೆಚ್ಚಿನವರು ನಾಗ್ಪುರ, ವಾರ್ಧಾ ಮತ್ತು ಯವತ್ಮಾಲ್‌ ನಿವಾಸಿಗಳಾಗಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಬಸ್ ಮೊದಲು ಕಬ್ಬಿಣದ ಕಂಬಕ್ಕೆ ಡಿಕ್ಕಿ ಹೊಡೆದು ನಂತರ ಡಿವೈಡರ್​ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಬಸ್ ಪಲ್ಟಿಯಾಗಿದೆ. ಬಳಿಕ ಬದುಕುಳಿದ ಪ್ರಯಾಣಿಕರು ಬಸ್ಸಿನ ಬಾಗಿಲು ಒದ್ದು ಮತ್ತು ಗಾಜುಗಳನ್ನು ಒಡೆದು ಹೊರಬಂದಿದ್ದಾರೆಂದು ತಿಳಿದುಬಂದಿದೆ.

ಅಪಘಾತದ ನಂತರ ಬಸ್ಸಿನಿಂದ ಹೆಚ್ಚಿನ ಪ್ರಮಾಣದ ಡೀಸೆಲ್ ರಸ್ತೆಯ ಮೇಲೆ ಸೋರಿಕೆಯಾಗಿದೆ. ಈ ವೇಳೆ ಬಸ್​ನ ಇಂಜಿನ್​ನಲ್ಲಿ ಸ್ಪಾರ್ಕ್​ ಆಗಿ ಬೆಂಕಿ ಹೊತ್ತಿಕೊಂಡಿರಬಹುದು ಎಂದು ಶಂಕಿಸಲಾಗಿದೆ.

ಬಸ್‌ನಿಂದ 25 ಮೃತದೇಹಗಳನ್ನು ಹೊರತೆಗೆದು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಬಸ್ಸಿನಿಂದ ಹೊರತೆಗೆದ ಮೃತದೇಹಗಳನ್ನು ಗುರುತಿಸುವುದು ಕಷ್ಟವಾಗುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ.

ಈ ಘಟನೆ ಕುರಿತು ಬುಲ್ಧಾನ್​ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮೃತರ ಸಂಬಂಧಿಗಳಿಗೆ ಮಾಹಿತಿ ರವಾನಿಸುವ ಕಾರ್ಯವನ್ನು ಕೈಗೊಂಡಿದ್ದಾರೆ. ಸುದ್ದಿ ತಿಳಿದ ಕುಟುಂಬಸ್ಥರು ಬುಲ್ಧಾನ್​ನ ಸರ್ಕಾರಿ ಆಸ್ಪತ್ರೆಗೆ ದೌಡಾಯಿಸುತ್ತಿದ್ದಾರೆ.

Ads on article

Advertise in articles 1

advertising articles 2

Advertise under the article