ಲೋಕಸಭೆ ಚುನಾವಣೆ; ರಾಜ್ಯದ 10 ಹಾಲಿ ಬಿಜೆಪಿ ಸಂಸದರಿಗೆ ಟಿಕೆಟ್ ಕೈತಪ್ಪುವ ಸಾಧ್ಯತೆ !
ಬೆಂಗಳೂರು: ಈ ಬಾರಿ ಲೋಕಸಭೆ ಚುನಾವಣೆಗೆ ಬಿಜೆಪಿ ಈಗಾಗಲೇ 195 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ್ದು, ಬುಧವಾರ ಸಂಜೆಯಿಂದ ತಡರಾತ್ರಿವರೆಗೂ ಎರಡನೇ ಪಟ್ಟಿಗೆ ಸುದೀರ್ಘ ಮೀಟಿಂಗ್ ನಡೆಸಿದೆ. ಈ ಸಭೆಯಲ್ಲಿ ಕರ್ನಾಟಕದ 28 ಕ್ಷೇತ್ರದ ಬಿಜೆಪಿ ಅಭ್ಯರ್ಥಿಗಳ ಹೆಸರನ್ನು ಫೈನಲ್ ಮಾಡುವ ಸಂಬಂಧ ಚರ್ಚೆ ಕೂಡ ನಡೆದಿದೆ.
ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ರಾಜ್ಯದ ಸುಮಾರು 10 ಹಾಲಿ ಬಿಜೆಪಿ ಸಂಸದರಿಗೆ ಟಿಕೆಟ್ ಕೈತಪ್ಪುವ ಸಾಧ್ಯತೆಯಿದೆ. ಅಭ್ಯರ್ಥಿಗಳ ಪಟ್ಟಿಯನ್ನು ಅಂತಿಮಗೊಳಿಸಲು ಬಿಜೆಪಿಯ ಹಿರಿಯ ನಾಯಕರು ನವದೆಹಲಿಯಲ್ಲಿ ಸರಣಿ ಸಭೆಗಳನ್ನು ನಡೆಸುತ್ತಿದ್ದು, ಶುಕ್ರವಾರ ಪಟ್ಟಿ ಬಿಡುಗಡೆಯಾಗುವ ಸಾಧ್ಯತೆಯಿದೆ.
ಮಾಜಿ ಸಿಎಂ ಹಾಗೂ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ, ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ, ಪರಿಷತ್ತಿನ ವಿರೋಧ ಪಕ್ಷದ ನಾಯಕ ಕೋಟ ಶ್ರೀನಿವಾಸ ಪೂಜಾರಿ, ವಿಧಾನಸಭೆ ಪ್ರತಿಪಕ್ಷದ ಉಪನಾಯಕ ಅರವಿಂದ್ ಬೆಲ್ಲದ್ ಸೇರಿದಂತೆ ಕರ್ನಾಟಕದ ಪಕ್ಷದ ಮುಖಂಡರು ಬುಧವಾರ ಸಂಜೆ ಸಭೆಯಲ್ಲಿ ಉಪಸ್ಥಿತರಿದ್ದರು.
ಕೇಂದ್ರ ವಿದೇಶಾಂಗ ಸಚಿವ ಎಸ್ ಜೈಶಂಕರ್ ಕರ್ನಾಟಕದಿಂದ ಸ್ಪರ್ಧಿಸಬಹುದು ಎಂದು ಹೇಳಲಾಗುತ್ತಿದೆ. ಕೆಲವು ದಶಕಗಳ ಹಿಂದೆ ಪ್ರೊಬೇಷನರಿ ಅಧಿಕಾರಿಯಾಗಿ ಚಿಕ್ಕೋಡಿಯಲ್ಲಿ ಕೆಲಸ ಮಾಡಿದ ಅವರು ತಾತ ಮತ್ತು ಅಜ್ಜಿ ಬೆಂಗಳೂರಿನಲ್ಲಿ ವಾಸಿಸುತ್ತಿದ್ದರು ಆದರೆ, ಅವರು ಕರ್ನಾಟಕದಿಂದ ಸ್ಪರ್ಧಿಸಲು ಉತ್ಸುಕರಾಗಿಲ್ಲ ಎಂದು ಹೇಳಲಾಗಿದೆ.