ಶೆಟ್ಟರ್, ಶೋಭಾಗೆ ಟಿಕೆಟ್ ಫಿಕ್ಸ್; ಕಟೀಲ್, ಪ್ರತಾಪ ಸಿಂಹಗೆ ಟಿಕೆಟ್ ಕೈತಪ್ಪುವ ಸಾಧ್ಯತೆ: 22 ಬಿಜೆಪಿ ಅಭ್ಯರ್ಥಿಗಳು ಫೈನಲ್
ಬೆಂಗಳೂರು: ನವದೆಹಲಿಯಲ್ಲಿ ಸೋಮವಾರ ನಡೆದ ಬಿಜೆಪಿ ಕೇಂದ್ರ ಚುನಾವಣಾ ಸಮಿತಿ (ಸಿಇಸಿ) ಸಭೆಯು ಕರ್ನಾಟಕದ 22 ಲೋಕಸಭಾ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರನ್ನು ಫೈನಲ್ ಮಾಡಿದೆನ್ನಲಾಗಿದೆ.
ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಅಭ್ಯರ್ಥಿಗಳ ಪಟ್ಟಿ ಅಂತಿಮವಾಗಿದೆ ಎಂದು ಮೂಲಗಳು ತಿಳಿಸಿವೆ.
ಎಲ್ಲಾ ಅಭ್ಯರ್ಥಿಗಳ ಹೆಸರುಗಳನ್ನು ಒಂದು ಅಥವಾ ಎರಡು ದಿನಗಳಲ್ಲಿ ಎರಡು ಪಟ್ಟಿಗಳಲ್ಲಿ ಘೋಷಿಸುವ ನಿರೀಕ್ಷೆಯಿದೆ. ಬಿಜೆಪಿ ಮೂಲಗಳ ಪ್ರಕಾರ, ಬೆಳಗಾವಿಯಿಂದ ಮಾಜಿ ಸಿಎಂ ಜಗದೀಶ್ ಶೆಟ್ಟರ್, ಹುಬ್ಬಳ್ಳಿ-ಧಾರವಾಡದಿಂದ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ಉಡುಪಿ-ಚಿಕ್ಕಮಗಳೂರಿನಿಂದ ಶೋಭಾ ಕರಂದ್ಲಾಜೆ ಮತ್ತು ಶಿವಮೊಗ್ಗದಿಂದ ಬಿವೈ ರಾಘವೇಂದ್ರ ಸೇರಿದಂತೆ ಕೆಲವು ಹೆಸರುಗಳನ್ನು ಅನುಮೋದಿಸಲಾಗಿದೆ.
ಮೈಸೂರು-ಕೊಡಗು, ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ ಸೇರಿದಂತೆ ಕೆಲವು ಕ್ಷೇತ್ರಗಳನ್ನು ತಡೆಹಿಡಿಯಲಾಗಿದೆ. ಪಕ್ಷದ ನಾಯಕರು ಬುಧವಾರದೊಳಗೆ ಈ ಕ್ಷೇತ್ರಗಳ ಹೆಸರನ್ನು ತೆರವುಗೊಳಿಸುವ ನಿರೀಕ್ಷೆಯಿದೆ. ಚಿಕ್ಕೋಡಿಯಿಂದ ರಮೇಶ್ ಕತ್ತಿ, ಚಿಕ್ಕಬಳ್ಳಾಪುರದಿಂದ ಡಾ ಸುಧಾಕರ್, ವಿಜಯಪುರದಿಂದ ಗೋವಿಂದ್ ಕಾರಜೋಳ, ಬೆಂಗಳೂರು ದಕ್ಷಿಣದಿಂದ ತೇಜಸ್ವಿ ಸೂರ್ಯ, ಬೆಂಗಳೂರು ಸೆಂಟ್ರಲ್‌ನಿಂದ ಪಿಸಿ ಮೋಹನ್, ಬೆಂಗಳೂರು ಗ್ರಾಮಾಂತರದಿಂದ ಡಾ ಸಿಎನ್ ಮಂಜುನಾಥ್, ತುಮಕೂರಿನಿಂದ ವಿ ಸೋಮಣ್ಣ, ಹಾವೇರಿಯ ಬಸವರಾಜ ಬೊಮ್ಮಾಯಿ ಹೆಸರನ್ನು ಅಂತಿಮಗೊಳಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಮೈಸೂರು ಕ್ಷೇತ್ರದ ಸಂಸದ ಪ್ರತಾಪಸಿಂಹ ಅವರಿಗೆ ಟಿಕೆಟ್ ಕೈ ತಪ್ಪುವುದು ಬಹುತೇಕ ಖಚಿತವಾಗಿದ್ದು, ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಅವರಿಗೆ ಟಿಕೆಟ್ ದೊರೆಯುವುದು ಬಹುತೇಕ ಖಚಿತವಾಗಿದೆ ಎಂದು ಉನ್ನತ ಮೂಲಗಳು ತಿಳಿಸಿವೆ. ಈ ಹೆಸರುಗಳನ್ನು ಪಕ್ಷದ ಮುಖಂಡರು ಅನುಮೋದಿಸಿದ್ದು, ಅಂತಿಮ ಪಟ್ಟಿ ಪ್ರಕಟವಾದ ನಂತರವಷ್ಟೇ ಹೆಚ್ಚಿನ ಸ್ಪಷ್ಟತೆ ಸಿಗಲಿದೆ .
ದಕ್ಷಿಣ ಕನ್ನಡ ಸಂಸದ ನಳಿನ್‌ಕುಮಾರ್ ಕಟೀಲ್ ಅವರಿಗೆ ಟಿಕೆಟ್ ಕೈ ತಪ್ಪುವ ಸಾಧ್ಯತೆ ಇದ್ದು, ಚಿತ್ರದುರ್ಗದಿಂದ ಕೇಂದ್ರ ಸಚಿವ ನಾರಾಯಣಸ್ವಾಮಿ ಅವರಿಗೆ ಟಿಕೆಟ್ ಸಿಗುವ ನಿರೀಕ್ಷೆ ಇದೆ.ಸಭೆಯಲ್ಲಿ ಸಿಇಸಿ ಸದಸ್ಯರೂ ಆದ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ, ಬಿಎಲ್ ಸಂತೋಷ್, ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ, ಕೇಂದ್ರ ಸಚಿವರಾದ ರಾಜನಾಥ್ ಸಿಂಗ್, ಅಮಿತ್ ಶಾ ಮತ್ತಿತರರು ಉಪಸ್ಥಿತರಿದ್ದರು.
ಎಲ್ಲಾ 28 ಕ್ಷೇತ್ರಗಳ ಅಭ್ಯರ್ಥಿಗಳ ಬಗ್ಗೆ ಚರ್ಚಿಸಲಾಗಿದೆ ಎಂದು ವಿಜಯೇಂದ್ರ ದೆಹಲಿಯಲ್ಲಿ ಸುದ್ದಿಗಾರರಿಗೆ ತಿಳಿಸಿದರು. ಒಂದು ಅಥವಾ ಎರಡು ದಿನಗಳಲ್ಲಿ ಹೆಸರುಗಳು ಬಿಡುಗಡೆಯಾಗುವ ನಿರೀಕ್ಷೆಯಿದೆ ಎಂದು ಅವರು ಹೇಳಿದರು, ಆದರೆ ಕೆಲವು ಕ್ಷೇತ್ರಗಳಲ್ಲಿ ಮುಖ ಬದಲಾವಣೆಯ ವಿವರಗಳನ್ನು ಬಹಿರಂಗಪಡಿಸಲಿಲ್ಲ.
ಪ್ರಸ್ತುತ ಕರ್ನಾಟಕದ 28 ಸ್ಥಾನಗಳಲ್ಲಿ ಬಿಜೆಪಿ 25 ಸಂಸದರನ್ನು ಹೊಂದಿದೆ ಮತ್ತು ಒಬ್ಬ ಸ್ವತಂತ್ರ ಸಂಸದರ ಬೆಂಬಲವನ್ನು ಹೊಂದಿದೆ. ಈ ಬಾರಿ ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡಿರುವ ಬಿಜೆಪಿ ಅಷ್ಟೇ ಸೀಟುಗಳನ್ನು ಉಳಿಸಿಕೊಳ್ಳಲು ಹವಣಿಸುತ್ತಿದೆ. ಕನಿಷ್ಠ 10 ಲೋಕಸಭಾ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಬದಲಾಯಿಸಲಾಗಿದೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.
ಇದೇ ವೇಳೆ ಬೆಂಗಳೂರಿನಲ್ಲಿ ಜೆಡಿಎಸ್ ಸಭೆ ನಡೆಸಿದ್ದು, ಬೆಂಗಳೂರು ಗ್ರಾಮಾಂತರದಿಂದ ಡಾ.ಸಿ.ಎನ್.ಮಂಜುನಾಥ್ ಅವರನ್ನು ಕಣಕ್ಕಿಳಿಸಲು ಎರಡೂ ಪಕ್ಷಗಳ ಮುಖಂಡರು ಉತ್ಸುಕರಾಗಿದ್ದಾರೆ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.