ಯಡಿಯೂರಪ್ಪ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ; ಗೃಹ ಸಚಿವ ಪರಮೇಶ್ವರ್ ಹೇಳಿದ್ದು ಹೀಗೆ....
ಬೆಂಗಳೂರು: ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಸಂಬಂಧ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿದೆ. ಇದರ ಬೆನ್ನಲ್ಲೇ ಡಿಸಿಎಂ ಡಿಕೆ ಶಿವಕುಮಾರ್ ಅವರು ಗೃಹ ಸಚಿವ ಡಾ.ಜಿ. ಪರಮೇಶ್ವರ ಅವರ ನಿವಾಸಕ್ಕೆ ಭೇಟಿ ನೀಡಿ ಮಾತುಕತೆ ನಡೆಸಿದ್ದಾರೆ. ಬಳಿಕ ಮಾತನಾಡಿದ ಡಿಕೆ ಶಿವಕುಮಾರ್, ಇದೊಂದು ಸೂಕ್ಷ್ಮ ವಿಷಯವಾಗಿರುವುದರಿಂದ ಗೃಹ ಸಚಿವರೇ ಮಾತಾಡುತ್ತಾರೆ ಎಂದರು.
ನಂತರ ಮಾತನಾಡಿದ ಪರಮೇಶ್ವರ್ ಅವರು, ಯಡಿಯೂರಪ್ಪ ಒಬ್ಬ ಹಿರಿಯ ರಾಜಕಾರಣಿ. ಇದರಲ್ಲಿ ಯಾವುದೇ ರಾಜಕೀಯ ದುರುದ್ದೇಶ ಇಲ್ಲ. ನಿನ್ನೆ ರಾತ್ರಿ ಒಬ್ಬ ಮಹಿಳೆ ದೂರು ಕೊಟ್ಟಿದ್ದಾರೆ. ಇದರನ್ನು ಪರಿಗಣಿಸಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಕಾನೂನು ಪ್ರಕಾರ ಪೊಲೀಸರು ತನಿಖೆ ಮಾಡುತ್ತಿದ್ದಾರೆ ಎಂದರು.
ತನಿಖೆ ಆಗುವವರೆಗೂ ಯಾವುದೇ ವಿಷಯ ತಿಳಿಸಲು ಸಾಧ್ಯವಿಲ್ಲ. ಇದು ಒಬ್ಬ ಮಾಜಿ ಮುಖ್ಯಮಂತ್ರಿ ವಿಷಯಕ್ಕೆ ಸಂಬಂಧಿಸಿದ್ದಾಗಿದೆ. ಇದು ಬಹಳ ಸೂಕ್ಷ್ಮ ವಿಷಯವಾಗಿದೆ. ಮಹಿಳೆಗೆ ರಕ್ಷಣೆ ಅಗತ್ಯ ಬಿದ್ದರೆ ಕೊಡುತ್ತೇವೆ. ಅವರನ್ನು ವಶಕ್ಕೆ ಪಡೆಯುವ ಸಂಬಂಧ ತನಿಖೆಯ ಮೇಲೆ ನಿರ್ಧಾರ ಮಾಡಲಾಗುತ್ತದೆ. ಇದರ ಬಗ್ಗೆ ಡಿಸಿಎಂ ಡಿಕೆ ಶಿವಕುಮಾರ್ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಜೊತೆಗೂ ಚರ್ಚೆ ಮಾಡಿದ್ದೇವೆ. ಮುಖ್ಯಮಂತ್ರಿ ಕೂಡ ಇದರ ಬಗ್ಗೆ ಮಾಹಿತಿ ಪಡೆದಿದ್ದಾರೆ ಎಂದರು.
ಮಹಿಳೆ ಮಾನಸಿಕ ಅಸ್ವಸ್ಥೆ?
ಯಡಿಯೂರಪ್ಪ ವಿರುದ್ಧ ದೂರು ನೀಡಿದ ಮಹಿಳೆ ಮಹಿಳೆ ಮಾನಸಿಕ ಅಸ್ವಸ್ಥೆ ಅಂತಾ ಹೇಳುತ್ತಿದ್ದಾರೆ ಎಂದ ಪರಮೇಶ್ವರ್, ಅವರು ದೂರನ್ನು ಟೈಪ್ ಮಾಡಿ ಕೊಟ್ಟಿದ್ದಾರೆ. ಆದರೆ ಕೈಯಿಂದ ಬರೆದು ದೂರು ಕೊಟ್ಟಿದ್ದಲ್ಲ. ಟೈಪ್ ಕಾಪಿ ಕೊಟ್ಟಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಈ ಪ್ರಕರಣ ಒಬ್ಬ ಮಾಜಿ ಸಿಎಂ ವಿಷಯಕ್ಕೆ ಸಂಬಂಧಿಸಿದೆ. ಯಾವುದೇ ವಿಷಯ ಆದರೂ ಎಚ್ಚರಿಕೆಯಿಂದ ಹೇಳಬೇಕು ಎಂದರು.