
ಉಡುಪಿ: ಮಾ.27ರಂದು ವಿಶ್ವ ರಂಗಭೂಮಿ ದಿನಾಚರಣೆ ಕಾರ್ಯಕ್ರಮ; ಸಾಹಿತಿ ಡಾ. ಮಾಧವಿ ಎಸ್. ಭಂಡಾರಿ ಅವರಿಗೆ ಸನ್ಮಾನ
Monday, March 25, 2024
ಉಡುಪಿ: ರಂಗಭೂಮಿ ಉಡುಪಿ ಇದರ ಆಶ್ರಯದಲ್ಲಿ ಎಂಜಿಎಂ ಕಾಲೇಜು ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಕಾರದೊಂದಿಗೆ ಇದೇ ಮಾ.27ರಂದು ಉಡುಪಿ ಎಂ.ಜಿ.ಎಂ. ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ಆಯೋಜಿಸಿರುವ ವಿಶ್ವ ರಂಗಭೂಮಿ ದಿನಾಚರಣೆ ಕಾರ್ಯಕ್ರಮದಲ್ಲಿ ಸಾಹಿತಿ ಡಾ. ಮಾಧವಿ ಎಸ್. ಭಂಡಾರಿ ಅವರನ್ನು ಸನ್ಮಾನಿಸಲಾಗುವುದು ಎಂದು ರಂಗಭೂಮಿ ಸಂಸ್ಥೆಯ ಅಧ್ಯಕ್ಷ ಡಾ. ತಲ್ಲೂರು ಶಿವರಾಮ ಶೆಟ್ಟಿ ತಿಳಿಸಿದ್ದಾರೆ.
ಉಡುಪಿಯಲ್ಲಿಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಅಂದು ಸಂಜೆ 6ಗಂಟೆಗೆ ಮಾಹೆಯ ಉಪಕುಲಾಧಿಪತಿ ಎಚ್.ಎಸ್. ಬಲ್ಲಾಳ್ ಅವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ರಂಗಭೂಮಿ ಸಂಸ್ಥೆಯು ಪ್ರತಿ ವರ್ಷದಂತೆ ಈ ಬಾರಿ ಕೂಡ ಹೊಸ ನಾಟಕವನ್ನು ರಂಗಕ್ಕೆ ಪರಿಚಯಿಸುತ್ತಿದೆ. ಹೆಸರಾಂತ ನಿರ್ದೇಶಕ ಗಣೇಶ್ ಮಂದಾರ್ತಿ ಅವರ ನಿರ್ದೇಶನದಲ್ಲಿ 'ಸೀತಾರಾಮ ಚರಿತಾ' ಎಂಬ ನೂತನ ನಾಟಕವು ರಂಗಭೂಮಿ ಕಲಾವಿದರಿಂದ ಪ್ರದರ್ಶನಗೊಳ್ಳಲಿದೆ ಎಂದರು.
ಸುದ್ದಿಗೋಷ್ಠಿಯಲ್ಲಿ ರಂಗಭೂಮಿ ಉಪಾಧ್ಯಕ್ಷ ಭಾಸ್ಕರ ರಾವ್ ಕಿದಿಯೂರು ಇದ್ದರು.