ರಾಮೇಶ್ವರಂ ಕೆಫೆ ಸ್ಫೋಟ ಶಂಕಿತ ಆರೋಪಿ ತಮಿಳುನಾಡಿನವ! ವ್ಯಾಪಕ ಆಕ್ರೋಶದ ಬೆನ್ನಲ್ಲೇ ಕ್ಷಮೆಯಾಚಿಸಿದ ಶೋಭಾ ಕರಂದ್ಲಾಜೆ
ಬೆಂಗಳೂರು: ಉಡುಪಿ - ಚಿಕ್ಕಮಗಳೂರು ಕ್ಷೇತ್ರದಲ್ಲಿ ಬಿಜೆಪಿ ಕಾರ್ಯಕರ್ತರ ವಿರೋಧದಿಂದ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರಕ್ಕೆ ಶಿಫ್ಟ್ ಆಗಿರುವ ಕೇಂದ್ರ ಸಚಿವ ಶೋಭಾ ಕರಂದ್ಲಾಜೆ, ತನ್ನ ನಾಲಿಗೆ ಹರಿಬಿಟ್ಟು ವಿವಾದವನ್ನು ಮೈಮೇಲೆ ಎಳೆದುಕೊಂಡಿದ್ದಾರೆ.
ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಸಂಭವಿಸಿದ ಸ್ಫೋಟದಲ್ಲಿ ಭಾಗಿಯಾಗಿರುವ ಶಂಕಿತ ಆರೋಪಿ ತಮಿಳುನಾಡಿನವರು ಎಂದು ಹೇಳಿಕೆ ನೀಡಿದ್ದು, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಹೇಳಿಕೆ ನೀಡಿದ ಕೆಲವೇ ಗಂಟೆಗಳ ನಂತರ, ತಮ್ಮ ಹೇಳಿಕೆ ಹಿಂಪಡೆದು, ಕ್ಷಮೆ ಕೇಳಿದ್ದಾರೆ.
ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಮಾರ್ಚ್ 1 ರಂದು ನಡೆದ ಸ್ಫೋಟದಲ್ಲಿ ಭಾಗಿಯಾಗಿರುವ ಶಂಕಿತ ಆರೋಪಿ ತಮಿಳುನಾಡಿನವನು ಎಂದು ಹೇಳಿಕೆ ನೀಡಿದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಕೆಲವೇ ಗಂಟೆಗಳಲ್ಲಿ ಈ ಬಗ್ಗೆ ಕ್ಷಮೆ ಯಾಚಿಸಿದ್ದಾರೆ.
ತಮಿಳುನಾಡಿನ ಜನತೆಯ ಕ್ಷಮೆ ಕೋರಿ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಶೋಭಾ, ನನ್ನ ಮಾತುಗಳು ಪ್ರಕರಣದ ಬಗ್ಗೆ ಬೆಳಕು ಚೆಲ್ಲುವ ಉದ್ದೇಶ ಇದ್ದವೇ ಹೊರತು ಆರೋಪ ಹೊರಿಸುವ ಆಶಯ ಇರಲಿಲ್ಲ ಎಂದು ನಾನು ಸ್ಪಷ್ಟಪಡಿಸಲು ಬಯಸುತ್ತೇನೆ. ಆದರೂ ನನ್ನ ಹೇಳಿಕೆಗಳು ಕೆಲವರಿಗೆ ನೋವು ತಂದಿರುವುದನ್ನು ಗಮನಿಸಿದ್ದೇನೆ, ಅದಕ್ಕಾಗಿ ನಾನು ಕ್ಷಮೆಯಾಚಿಸುತ್ತೇನೆ. ನನ್ನ ಟೀಕೆಗಳು ರಾಮೇಶ್ವರಂ ಕೆಫೆ ಸ್ಫೋಟಕ್ಕೆ ಸಂಬಂಧಿಸಿ ಕೃಷ್ಣಗಿರಿ ಅರಣ್ಯದಲ್ಲಿ ತರಬೇತಿ ಪಡೆದವರ ಬಗ್ಗೆ ಹೇಳಿರುವುದಾಗಿತ್ತು. ತಮಿಳುನಾಡಿನ ಎಲ್ಲರಿಗೂ, ನನ್ನ ಹೃದಯದಿಂದ ಕ್ಷಮೆಯನ್ನು ಕೇಳುತ್ತೇನೆ. ಇದಲ್ಲದೆ, ನಾನು ನನ್ನ ಹಿಂದಿನ ಮಾತುಗಳನ್ನು ಹಿಂತೆಗೆದುಕೊಳ್ಳುತ್ತೇನೆ’ ಎಂದು ಬರೆದುಕೊಂಡಿದ್ದಾರೆ.
ರಾಮೇಶ್ವರಂ ಕೆಫೆ ಸ್ಫೋಟದ ಬಗ್ಗೆ ಈ ಹಿಂದೆ ಶೋಭಾ ಕರಂದ್ಲಾಜೆ ಅವರು, ‘ತಮಿಳುನಾಡಿನಿಂದ ಬಂದ ವ್ಯಕ್ತಿಯೊಬ್ಬ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಇಟ್ಟಿದ್ದ. ದೆಹಲಿಯಿಂದ ಬಂದ ವ್ಯಕ್ತಿಯೊಬ್ಬ ವಿಧಾನಸೌಧದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ್ದ. ಕೇರಳದಿಂದ ಬಂದ ವ್ಯಕ್ತಿಯೊಬ್ಬ ವಿದ್ಯಾರ್ಥಿಗಳ ಮೇಲೆ ಆ್ಯಸಿಡ್ ಎರಚಿದ್ದ’ ಎಂದು ಮಂಗಳವಾರ ಹೇಳಿದ್ದರು.