
ರಿಕ್ಷಾಕ್ಕೆ ಡಿಕ್ಕಿ ಹೊಡೆದ ಟ್ರಕ್; ಭೀಕರ ಅಪಘಾತದಲ್ಲಿ 5 ಮಂದಿ ಸ್ಥಳದಲ್ಲೇ ಸಾವು!
ಭೋಪಾಲ್: ಮಧ್ಯಪ್ರದೇಶದ ಚಿತ್ರಕೂಟದಲ್ಲಿ ಮಂಗಳವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 5 ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದು, ಮೂವರು ಗಾಯಗೊಂಡಿರುವ ಘಟನೆ ನಡೆದಿದೆ.
ಚಿತ್ರಕೂಟದ ಅಮನ್‌ಪುರದಲ್ಲಿ ಎನ್‌ಎಚ್ 35 ರಲ್ಲಿ ವೇಗವಾಗಿ ಬಂದ ಟ್ರಕ್ಕೊಂದು ರಿಕ್ಷಾಕ್ಕೆ ಡಿಕ್ಕಿ ಹೊಡೆದಿದೆ. ಝಾನ್ಸಿ ಮಿರ್ಜಾಪುರ ರಾಷ್ಟ್ರೀಯ ಹೆದ್ದಾರಿ ಬಳಿ ಈ ಘಟನೆ ನಡೆದಿದೆ. ಸದ್ಯ, ಗಾಯಗೊಂಡವರನ್ನು ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.
ಗಾಯಗೊಂಡವರ ಸ್ಥಿತಿ ಚಿಂತಾಜನಕವಾಗಿದೆ ಎಂದು ಹೆಚ್ಚುವರಿ ಎಸ್‌ಪಿ ಚಕ್ರಪಾಣಿ ತ್ರಿಪಾಠಿ ತಿಳಿಸಿರುವುದಾಗಿ ‘ಎಎನ್’ ಸುದ್ದಿಸಂಸ್ಥೆ ಸಾಮಾಮಜಿಕ ಮಾಧ್ಯಮ ಎಕ್ಸ್ ಸಂದೇಶದಲ್ಲಿ ತಿಳಿಸಿದೆ.
ಗಾಯಾಳುಗಳನ್ನು ತಕ್ಷಣವೇ ಆಸ್ಪತ್ರೆಗೆ ಸಾಗಿಸಲಾಯಿತು. ಅವರಲ್ಲಿ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರನ್ನು ಪ್ರಯಾಗ್ರಾಜ್ನ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತಪಟ್ಟವರ ಪೈಕಿ ಐವರ ಗುರುತು ಪತ್ತೆಯಾಗಿದೆ. ಉಳಿದವರು ಇಬ್ಬರ ಗುರುತು ಪತ್ತೆ ಮಾಡಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಹೆಚ್ಚುವರಿ ಎಸ್‌ಪಿ ಚಕ್ರಪಾಣಿ ತ್ರಿಪಾಠಿ ತಿಳಿಸಿದ್ದಾರೆ.
ಆಟೊರಿಕ್ಷಾಕ್ಕೆ ಡಿಕ್ಕಿ ಹೊಡೆದ ನಂತರ, ಟ್ರಕ್ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ಹೇಳಲಾಗುತ್ತಿದೆ. ಚಿತ್ರಕೂಟ ರೈಲು ನಿಲ್ದಾಣದಿಂದ ರಾಮಘಾಟ್ ಕಡೆಗೆ ಆಟೋ ಹೋಗುತ್ತಿದ್ದು, ಅದರಲ್ಲಿ 9 ಮಂದಿ ಪ್ರಯಾಣಿಸುತ್ತಿದ್ದರು ಎಂದು ಹೇಳಲಾಗುತ್ತಿದೆ. ಮಾಧ್ಯಮ ವರದಿಗಳ ಪ್ರಕಾರ, ಆಟೋ ಮುಂದೆ ಹೋಗುತ್ತಿದ್ದ ವಾಹನವನ್ನು ಹಿಂದಿಕ್ಕಲು ಪ್ರಯತ್ನಿಸಿದಾಗ, ಮುಂಭಾಗದಿಂದ ಬಂದ ಟ್ರಕ್ ಡಿಕ್ಕಿ ಹೊಡೆದಿದೆ.