ಏಪ್ರಿಲ್ 22ರೊಳಗೆ ಈಶ್ವರಪ್ಪ ನಾಮಪತ್ರ ವಾಪಸ್ ಪಡೆಯದಿದ್ದರೆ ಬಿಜೆಪಿಯಿಂದ ಉಚ್ಛಾಟನೆ ಎಚ್ಚರಿಕೆ!

ಏಪ್ರಿಲ್ 22ರೊಳಗೆ ಈಶ್ವರಪ್ಪ ನಾಮಪತ್ರ ವಾಪಸ್ ಪಡೆಯದಿದ್ದರೆ ಬಿಜೆಪಿಯಿಂದ ಉಚ್ಛಾಟನೆ ಎಚ್ಚರಿಕೆ!

ಶಿವಮೊಗ್ಗ: ಶಿವಮೊಗ್ಗದಲ್ಲಿ ಬಿಜೆಪಿ ಅಭ್ಯರ್ಥಿ ಬಿವೈ ರಾಘವೇಂದ್ರ ವಿರುದ್ಧ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಬಿಜೆಪಿ ನಾಯಕ ಕೆಎಸ್ ಈಶ್ವರಪ್ಪಗೆ ಬಿಜೆಪಿ ಬಿಗ್ ಶಾಕ್ ನೀಡಿದೆ.

ಮಾಜಿ ಡಿಸಿಎಂ ಕೆಎಸ್ ಈಶ್ವರಪ್ಪ ತಮ್ಮ ಪುತ್ರ ಕೆಇ ಕಾಂತೇಶ್'ಗೆ ಹಾವೇರಿ ಲೋಕಸಭೆ ಕ್ಷೇತ್ರದ ಟಿಕೆಟ್ ನಿರಾಕರಿಸಿದ್ದರಿಂದ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಹಾಗೂ ಬಿಜೆಪಿ ವಿರುದ್ಧ ಮುನಿಸಿಕೊಂಡಿದ್ದು, ಶಿವಮೊಗ್ಗದಲ್ಲಿ ಬಿಜೆಪಿ ಅಭ್ಯರ್ಥಿ ಬಿವೈ ರಾಘವೇಂದ್ರ ವಿರುದ್ಧ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದಾರೆ.

ಬಿಎಸ್ ವೈ ಕುಟುಂಬದಿಂದ ಬಿಜೆಪಿಯನ್ನು ಮುಕ್ತಗೊಳಿಸಬೇಕು ಎಂದು ಪಣತೊಟ್ಟಿರುವ ಈಶ್ವರಪ್ಪ ಕಳೆದ ವಾರ ತಮ್ಮ ನಾಮಪತ್ರವನ್ನೂ ಸಲ್ಲಿಕೆ ಮಾಡಿದ್ದರು. ಇದರ ಬೆನ್ನಲ್ಲೇ ಬಿವೈ ರಾಘವೇಂದ್ರ ಮುಂದಿನ ದಿನಗಳಲ್ಲಿ ಈಶ್ವರಪ್ಪ ನಾಮಪತ್ರ ವಾಪಸ್ ಪಡೆಯಲಿದ್ದಾರೆ ಎಂದು ಹೇಳಿಕೆ ನೀಡಿದ್ದರು. ಇದರ ಬೆನ್ನಲ್ಲೇ ಬ್ರಹ್ಮನೇ ಬಂದು ಹೇಳಿದರೂ ನಾನು ನಾಮಪತ್ರ ವಾಪಸ್ ಪಡೆಯುವುದಿಲ್ಲ ಎಂದು ಹೇಳುತ್ತಿದ್ದಾರೆ.

ಈ ಹಿಂದೆ ಈಶ್ವರಪ್ಪರಿಗೆ ಹೈಕಮಾಂಡ್ ದೆಹಲಿಗೆ ಬರುವಂತೆ ಬುಲಾವ್ ನೀಡಿತ್ತು. ಆದರೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಈಶ್ವರಪ್ಪರ ಭೇಟಿಗೆ ಅವಕಾಶ ನೀಡದ ಹಿನ್ನೆಲೆಯಲ್ಲಿ ಬೇಸರದಿಂದ ಬಂದಿದ್ದ ಈಶ್ವರಪ್ಪ ನಂತರ ನಾನು ಶಿವಮೊಗ್ಗದಿಂದ ಸ್ಪರ್ಧಿಸೇ ತೀರುತ್ತೇನೆ ಎಂದು ಹಠ ತೊಟ್ಟಿದ್ದಾರೆ.

ಇನ್ನು ಈಶ್ವರಪ್ಪ ಮನವೊಲಿಕೆ ಮಾಡುವ ಕೆಲಸವನ್ನು ಬಿಜೆಪಿ ಹೈಕಮಾಂಡ್ ಕೈಬಿಟ್ಟಿದೆ. ಅಲ್ಲದೆ ಕಾದು ನೋಡುವ ತಂತ್ರ ಅನುಸರಿಸುತ್ತಿದ್ದು ಏಪ್ರಿಲ್ 22ರೊಳಗೆ ಈಶ್ವರಪ್ಪ ನಾಮಪತ್ರ ವಾಪಸ್ ಪಡೆಯದಿದ್ದರೆ ಅವರನ್ನು ಪಕ್ಷದಿಂದ ಉಚ್ಛಾಟಿಸುವ ಕ್ರಮಕ್ಕೆ ಹೈಕಮಾಂಡ್ ಮುಂದಾಗಲಿದೆ ಎಂದು ಹೇಳಲಾಗುತ್ತಿದೆ.

ಈ ಸಂಬಂಧ ಮೊದಲ ಬಾರಿಗೆ ಪ್ರತಿಕ್ರಿಯಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರು, ಈಶ್ವರಪ್ಪ ಅವರು ನಾಮಪತ್ರ ವಾಪಸ್ ಪಡೆಯದಿದ್ದರೆ ಪಕ್ಷ ಅವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಿದೆ ಎಂದು ಎಚ್ಚರಿಕೆ ನೀಡಿದ್ದಾರೆ.

Ads on article

Advertise in articles 1

advertising articles 2

Advertise under the article