ಅಶ್ಲೀಲ ವಿಡಿಯೋಗಳ ಪೆನ್ ಡ್ರೈವ್ ಪ್ರಕರಣ; ಪ್ರಜ್ವಲ್ ರೇವಣ್ಣ ವಿರುದ್ಧ ಎಫ್‌ಐಆರ್!
ಹಾಸನ: ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಪ್ರಜ್ವಲ್ ರೇವಣ್ಣ ವಿರುದ್ಧ ಹೊಳೆನರಸೀಪುರ ನಗರ ಠಾಣೆಯಲ್ಲಿ ಎಫ್.ಐ.ಆರ್. ದಾಖಲಾಗಿದೆ.
ಮಹಿಳೆಯೊಬ್ಬರು ನೀಡಿದ ದೂರು ಆಧರಿಸಿ ಹೊಳೆನರಸೀಪುರ ಟೌನ್ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 354A, 354D, 506, 509 ರ ಅಡಿ ಪ್ರಕರಣ ದಾಖಲಾಗಿದೆ. ಪ್ರಕರಣವು ಗಂಭೀರ ಸ್ವರೂಪ ಪಡೆದಿದ್ದು, ಶೀಘ್ರವೇ ತನಿಖಾ ತಂಡ ಪ್ರಜ್ವಲ್ ಅವರ ಹುಡುಕಾಟಕ್ಕೆ ಮುಂದಾಗಲಿದೆ ಎನ್ನಲಾಗುತ್ತಿದೆ.
ರಾಜ್ಯಾದ್ಯಂತ ಸಂಚಲನ ಮೂಡಿಸಿರುವ ಹಾಸನ ಅಶ್ಲೀಲ ವಿಡಿಯೋಗಳ ಪೆನ್ ಡ್ರೈವ್ ಪ್ರಕರಣದ ತನಿಖೆಗೆ ರಾಜ್ಯ ಸರ್ಕಾರ ವಿಶೇಷ ತನಿಖಾ ತಂಡ(ಎಸ್.ಐ.ಟಿ) ರಚಿಸಿ ಅಧಿಕಾರಿಗಳನ್ನು ನೇಮಿಸಿದೆ. ಇಂದು ಸರ್ಕಾರ ಹೊರಡಿಸಿರುವ ವಿಶೇಷ ನಡಾವಳಿಯಲ್ಲಿ ಐಪಿಎಸ್ ಅಧಿಕಾರಿಗಳಾದ ಬಿ. ಕೆ . ಸಿಂಗ್, ಸುಮನ್ ಡಿ. ಪನ್ಸೇಕರ್ ಮತ್ತು ಸೀಮಾ ಲಾಟ್ಕರ್ ಅವರನ್ನು ತನಿಖೆಗೆ ನೇಮಿಸಿರುವುದಾಗಿ ತಿಳಿಸಿದೆ.
ಪ್ರಜ್ವಲ್ ರೇವಣ್ಣ ಅವರು ಸಾವಿರಾರು ಮಹಿಳೆಯರಿಗೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕಾಂಗ್ರೆಸ್ ಮಹಿಳಾ ಸದಸ್ಯರು ಮತ್ತು ಮಹಿಳಾ ಪರ ಸಂಘಟನೆ ಸದಸ್ಯರು ಬೀದಿಗಿಳಿದು ಪ್ರತಿಭಟನೆ ನಡೆಸಿದ್ದಾರೆ.