ಶಾಸಕ ಹರೀಶ್‌ ಪೂಂಜ ವಿರುದ್ಧ ಮತ್ತೊಂದು ಎಫ್‌ಐಆರ್‌! ಎಫ್‌ಐಆರ್‌ನಲ್ಲಿ ಏನೆಲ್ಲ ದಾಖಲಾಗಿದೆ ನೋಡಿ...

ಶಾಸಕ ಹರೀಶ್‌ ಪೂಂಜ ವಿರುದ್ಧ ಮತ್ತೊಂದು ಎಫ್‌ಐಆರ್‌! ಎಫ್‌ಐಆರ್‌ನಲ್ಲಿ ಏನೆಲ್ಲ ದಾಖಲಾಗಿದೆ ನೋಡಿ...

ಬೆಳ್ತಂಗಡಿ: ಕಲ್ಲಿನ ಅಕ್ರಮ ಗಣಿಗಾರಿಕೆ ಹಾಗೂ ಸ್ಫೋಟಕಗಳ ಅಕ್ರಮ ದಾಸ್ತಾನು ಪ್ರಕರಣದಲ್ಲಿ ಬಿಜೆಪಿ ಯುವ ಮೋರ್ಚಾ‌ದ ಬೆಳ್ತಂಗಡಿ ಮಂಡಲದ ಅಧ್ಯಕ್ಷ ಶಶಿರಾಜ್‌ ಶೆಟ್ಟಿ ಬಂಧನ ಖಂಡಿಸಿ ಇಲ್ಲಿ ಸೋಮವಾರ ಪ್ರತಿಭಟನೆ ನಡೆಸಿದ ಸಂದರ್ಭ ಪೊಲೀಸ್ ಇಲಾಖೆ ಹಾಗೂ ಬೆಳ್ತಂಗಡಿ ಠಾಣೆ ಪೊಲೀಸ್ ನಿರೀಕ್ಷಕರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ, ಅವಮಾನ ಮಾಡಿ, ಡಿಜೆ ಹಳ್ಳಿ ಕೆಜೆ ಹಳ್ಳಿ ಪೊಲೀಸ್ ಠಾಣೆಗೆ ಆದ ಗತಿಯನ್ನು ಬೆಳ್ತಂಗಡಿ ಠಾಣೆಗೂ ಕಾಣಿಸುತ್ತೇನೆ ಎಂದು ಜೀವ ಬೆದರಿಕೆ ಒಡ್ಡಿರುವ ಶಾಸಕ ಹರೀಶ್ ಪೂಂಜ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಮಂಗಳವಾರ ಮತ್ತೊಂದು  ಪ್ರಕರಣ ದಾಖಲಿಸಲಾಗಿದೆ.

‘ಶಶಿರಾಜ್‌ ಶೆಟ್ಟಿ ಬಂಧನ ಖಂಡಿಸಿ ಬೆಳ್ತಂಗಡಿಯ ವಿಕಾಸಸೌಧದ ಎದುರು ಸೋಮವಾರ ಬಿಜೆಪಿ ವತಿಯಿಂದ ನಡೆಸಿದ್ದ ಪ್ರತಿಭಟನೆಗೆ ಸಂಬಂಧಪಟ್ಟ ಇಲಾಖೆಯಿಂದ ಪೂರ್ವಾನುಮತಿ ಪಡೆದಿರಲಿಲ್ಲ. ಶಾಸಕ ಹರೀಶ್ ಪೂಂಜ ಮತ್ತು ಇತರರು ಸೇರಿ ಈ ಪ್ರತಿಭಟನೆ ಸಭೆ ನಡೆಸಿದ್ದರು’ ಎಂದು ಪೊಲೀಸರು ತಿಳಿಸಿದ್ದಾರೆ.

‘ಬಂಧಿತ ಕಾರ್ಯಕರ್ತರಿಗಾಗಿ ಪೊಲೀಸರ ಕಾಲರ್ ಹಿಡಿಯಲು ಸಿದ್ದ ಎಂದು ಈ ಪ್ರತಿಭಟನಾ ಸಭೆಯಲ್ಲಿ ಹರೀಶ್‌ ಪೂಂಜ ಹೇಳಿದ್ದಾರೆ. ಬೆಂಗಳೂರಿನ ಡಿ.ಜೆ.ಹಳ್ಳಿ, ಕೆ.ಜೆ ಹಳ್ಳಿಯ ಪೊಲೀಸ್ ಠಾಣೆಗೆ ಆದ ಗತಿಯನ್ನು ಬೆಳ್ತಂಗಡಿ ಠಾಣೆಗೂ ಕಾಣಿಸುತ್ತೇನೆಂದು ಬೆದರಿಸಿದ್ದಾರೆ. ಬೆಳ್ತಂಗಡಿ ಠಾಣೆಯ ಇನ್‌ಸ್ಪೆಕ್ಟರ್‌ಗೆ, ಇತರ ಪೊಲೀಸ್ ಅಧಿಕಾರಿಗಳಿಗೆ ಹಾಗೂ ಪೊಲೀಸ್ ಇಲಾಖೆಗೆ ಅವ್ಯಾಚ ಶಬ್ದಗಳಿಂದ ನಿಂದಿಸಿ, ಅವಮಾನ ಮಾಡಿದ್ದಾರೆ. ಜೀವ ಬೆದರಿಕೆಯನ್ನೂ ಒಡ್ಡಿದ್ದಾರೆ. ಸಾರ್ವಜನಿಕರು ತಮ್ಮ ಕೆಲಸ ಕಾರ್ಯಗಳ ಸಲುವಾಗಿ ತಾಲ್ಲೂಕು ಕಚೇರಿಗೆ  ಹೋಗದಂತೆ ತಡೆ ಒಡ್ಡಿದ್ದಾರೆ. ಈ ಅಂಶಗಳು ಎಫ್‌ಐಆರ್‌ನಲ್ಲಿವೆ’ ಎಂದು ಪೊಲೀಸರು ತಿಳಿಸಿದ್ದಾರೆ.  

‘ಭಾರತೀಯ ದಂಡ ಸಂಹಿತೆಯ ಸೆಕ್ಷನ್‌ 143 (ಕಾನೂನುಬಾಹಿರವಾಗಿ ಗುಂಪುಗೂಡುವುದು), ಸೆಕ್ಷನ್‌ 147 (ಗಲಭೆ ಸೃಷ್ಟಿ), ಸೆಕ್ಷನ್‌ 341 (ಅಕ್ರಮವಾಗಿ ನಿರ್ಬಂಧಿಸುವಿಕೆ), ಸೆಕ್ಷನ್‌ 504 (ಉದ್ದೇಶಪೂರ್ವಕವಾಗಿ ಹೀಯಾಳಿಸಿ ಪ್ರಚೋದನೆಗೆ ಒಳಪಡಿಸುವುದು), ಸೆಕ್ಷನ್‌ 506 (ಕ್ರಿಮಿನಲ್‌ ಬೆದರಿಕೆ ಒಡ್ಡುವುದು) ಜೊತೆಗೆ ಸೆಕ್ಷನ್‌ 149ರ (ಉದ್ದೇಶಪೂರ್ವಕಾಗಿ ಗುಂಪುಗೂಡಿ ಸಂಚು ರೂಪಿಸುವುದು) ಅಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ’ ಎಂದು ಅವರು ಮಾಹಿತಿ ನೀಡಿದ್ದಾರೆ.

ಕಲ್ಲಿನ ಅಕ್ರಮ ಗಣಿಗಾರಿಕೆ ಹಾಗೂ ಸ್ಫೋಟಕಗಳ ಅಕ್ರಮ ದಾಸ್ತಾನು ಪ್ರಕರಣದಲ್ಲಿ ಬಂಧಿತನಾಗಿದ್ದ  ಶಶಿರಾಜ್‌ ಶೆಟ್ಟಿ ಬಿಡುಗಡೆಗೆ ಆಗ್ರಹಿಸಿ ಪೊಲೀಸರಿಗೆ ಬೆದರಿಕೆ ಒಡ್ಡಿ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ಶಾಸಕ ಹರೀಶ್‌ ಪೂಂಜ ವಿರುದ್ಧ ಭಾನುವಾರ ಎಫ್‌ಐಆರ್‌ ದಾಖಲಾಗಿತ್ತು.

ಅರಣ್ಯ ಒತ್ತುವರಿ ಮಾಡಿದ್ದವರನ್ನು ಒಕ್ಕಲೆಬ್ಬಿಸುತ್ತಿದ್ದ ಅರಣ್ಯಾಧಿಕಾರಿಗಳಿಗೆ ಬೆದರಿಕೆ ಒಡ್ಡಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಬಗ್ಗೆ ಶಾಸಕ ಹರೀಶ್‌ ಪೂಂಜ ವಿರುದ್ಧ ಕೆಲ ತಿಂಗಳ ಹಿಂದೆ ಎಫ್‌ಐಆರ್‌ ದಾಖಲಾಗಿತ್ತು.

Ads on article

Advertise in articles 1

advertising articles 2

Advertise under the article