ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲು; ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದೇನು...?
ಬಾಗಲಕೋಟೆ: ಹಾಸನ ಲೋಕಸಭಾ ಕ್ಷೇತ್ರದ ಜೆಡಿಎಸ್-ಬಿಜೆಪಿ ಮೈತ್ರಿ ಅಭ್ಯರ್ಥಿ, ಹಾಲಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಹೇಳಿದ್ದಾರೆ.
ಸಂತ್ರಸ್ತೆಯ 20 ವರ್ಷದ ಮಗ ನೀಡಿದ ದೂರಿನ ಆಧಾರದ ಮೇಲೆ ಅತ್ಯಾಚಾರ ಪ್ರಕರಣ ದಾಖಲಿಸಲಾಗಿದ್ದು, ಪ್ರಜ್ವಲ್ ತಂದೆ ಹಾಗೂ ಜೆಡಿಎಸ್ ಶಾಸಕ ಎಚ್ ಡಿ ರೇವಣ್ಣ ಹಾಗೂ ಆತನ ಆಪ್ತ ಸತೀಶ್ ಬಾಬಣ್ಣ ತನ್ನ ತಾಯಿಯನ್ನು ಅಪಹರಿಸಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಹೀಗಾಗಿ ಪೊಲೀಸರು ಎರಡು ಪ್ರತ್ಯೇಕ ಪ್ರಕರಣಗಳನ್ನು ದಾಖಲಿಸಿದ್ದಾರೆ ಎಂದು ಸಿಎಂ ತಿಳಿಸಿದ್ದಾರೆ.
ಮೂರು ಮಕ್ಕಳ ತಾಯಿಯಾಗಿರುವ ಪ್ರಕರಣದ ಸಂತ್ರಸ್ತೆಯನ್ನು ಹೊಳೆನರಸೀಪುರ ಶಾಸಕ ಎಚ್ ಡಿ ರೇವಣ್ಣ ಮತ್ತು ಬಾಬಣ್ಣ ಅವರು ಮೈಸೂರು ಜಿಲ್ಲೆಯ ಕೃಷ್ಣರಾಜನಗರ ಪಟ್ಟಣದಲ್ಲಿರುವ ಆಕೆಯ ಮನೆಯಿಂದ ಅಪಹರಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಸಂತ್ರಸ್ತೆಯನ್ನು ಗುರುತಿಸಿ, ಪತ್ತೆ ಹಚ್ಚಿ ಭದ್ರತೆ ನೀಡುವಂತೆ ಪೊಲೀಸರಿಗೆ ಸೂಚಿಸಿದ್ದೇನೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ಪ್ರಜ್ವಲ್ ರೇವಣ್ಣ ಎಂಬಾತ ತನ್ನ ತಾಯಿಯನ್ನು ಕಟ್ಟಿಹಾಕಿ ಅತ್ಯಾಚಾರವೆಸಗಿದ್ದನ್ನು ಕೆಲವು ವಿಡಿಯೋಗಳಲ್ಲಿ ತೋರಿಸಲಾಗಿದೆ ಎಂದು ದೂರುದಾರರು ಪೊಲೀಸರಿಗೆ ತಿಳಿಸಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಸತೀಶ್ ಬಾಬಣ್ಣನನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಪ್ರಜ್ವಲ್ ರೇವಣ್ಣ ವಿಚಾರದಲ್ಲಿ ಬಿಜೆಪಿ ತಪ್ಪು ಮಾಡಿದೆ. ಪ್ರಜ್ವಲ್ ರೇವಣ್ಣ ಅವರ ವಿಡಿಯೋಗಳ ಬಗ್ಗೆ ಬಿಜೆಪಿ ಮತ್ತು ಜೆಡಿಎಸ್ ಎರಡೂ ಪಕ್ಷಗಳಿಗೆ ತಿಳಿದಿತ್ತು. ಪ್ರಜ್ವಲ್ ರೇವಣ್ಣ ಪ್ರಕರಣ ಕೇವಲ ಲೈಂಗಿಕ ಕಿರುಕುಳವಲ್ಲ. ಮಹಿಳೆಯರ ಮೇಲೆ ಅತ್ಯಾಚಾರವೆಸಗಿದ್ದಾನೆ. ಅವರ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಾಗಿದೆ ಎಂದು ಸಿದ್ದರಾಮಯ್ಯ ಹೇಳಿದರು.
ಮಹಿಳೆಯೊಬ್ಬಳು ತನ್ನ ಮೇಲೆ ಅತ್ಯಾಚಾರವೆಸಗಿದ್ದಾಳೆಂದು ಸುಳ್ಳು ಹೇಳುತ್ತಾಳೆಯೇ? ದೂರಿನ ನಂತರ ಅವಳ ಜೀವನ ಹಾಳಾಗುವುದಿಲ್ಲವೇ? ವಿವಾಹಿತ ಮಹಿಳೆ ತನ್ನ ಮೇಲೆ ಅತ್ಯಾಚಾರವೆಸಗಿರುವುದಾಗಿ ಬಹಿರಂಗವಾಗಿ ಹೇಳಿದರೆ ಅದನ್ನು ಒಪ್ಪಿಕೊಳ್ಳಬೇಕು. ಈ ವಿಷಯದಲ್ಲಿ ಮಹಿಳೆಯರು ಎಂದಿಗೂ ಸುಳ್ಳು ಹೇಳುವುದಿಲ್ಲ ಎಂದಿದ್ದಾರೆ.
ಇದನ್ನು ಒಪ್ಪಿಕೊಳ್ಳಬೇಕಲ್ಲವೇ? ಗೊತ್ತಿದ್ದೂ (ಪ್ರಜ್ವಲ್ ಗೆ) ಟಿಕೆಟ್ ಕೊಟ್ಟಿದ್ದು ಯಾಕೆ? ಅವರು (ಬಿಜೆಪಿ) ಏಕೆ (ಜೆಡಿ-ಎಸ್‌ನೊಂದಿಗೆ) ಮೈತ್ರಿ ಮಾಡಿಕೊಂಡರು? ಎಂದು ಬಿಜೆಪಿ ನಾಯಕರನ್ನು ಸಿಎಂ ಪ್ರಶ್ನಿಸಿದರು.