ಕುಮಾರಸ್ವಾಮಿ ಸೇರಿದಂತೆ ರಾಜ್ಯದಿಂದ ಐವರಿಗೆ ಮಂತ್ರಿಗಿರಿ! ಸೋಲುಕಂಡಿರುವ ಅಣ್ಣಾಮಲೈಗೂ ಸ್ಥಾನ?
ನವದೆಹಲಿ: ನರೇಂದ್ರ ಮೋದಿ ಅವರು ಸತತ 3ನೇ ಅವಧಿಗೆ ದೇಶದ ಪ್ರಧಾನಿಯಾಗಿ ಇಂದು ರಾತ್ರಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ರಾಷ್ಟ್ರಪತಿ ಭವನದಲ್ಲಿ ರಾತ್ರಿ 7.15ಕ್ಕೆ ಸಮಾರಂಭ ನಡೆಯಲಿದೆ. ಈ ಸಂದರ್ಭದಲ್ಲಿ ರಾಜ್ಯದಿಂದ ಐವರಿಗೆ ಮಂತ್ರಿಗಿರಿ ಸಿಗಲಿದೆ ಎಂಬ ಮಾಹಿತಿ ಹೊರಬಿದ್ದಿದೆ.
ಜೆಡಿಎಸ್ ನಾಯಕ ಎಚ್.ಡಿ.ಕುಮಾರಸ್ವಾಮಿ, ಬಿಜೆಪಿ ನಾಯಕರಾದ ಪ್ರಹ್ಲಾದ್ ಜೋಶಿ, ನಿರ್ಮಲ ಸೀತಾರಾಮನ್, ಶೋಭಾ ಕರಂದ್ಲಾಜೆ, ಸೋಮಣ್ಣಗೆ ಸಚಿವ ಸ್ಥಾನ ಸಿಗಲಿದೆ ಎಂದು ಹೇಳಲಾಗುತ್ತಿದೆ.
ನಿರ್ಮಲಾ ಸೀತಾರಾಮನ್(ಕರ್ನಾಟ ರಾಜ್ಯಸಭಾ ಸದಸ್ಯೆ), ಎಚ್.ಡಿ.ಕುಮಾರಸ್ವಾಮಿ, ಪ್ರಹ್ಲಾದ್ ಜೋಶಿಗೆ ಅವರಿಗೆ ಕ್ಯಾಬಿನೆಟ್ ದರ್ಜೆ ಸಚಿವ ಸ್ಥಾನ ಹಾಗು ಸೋಮಣ್ಣ ಹಾಗೂ ಶೋಭಾ ಕರಂದ್ಲಾಜೆಗೆ ರಾಜ್ಯ ದರ್ಜೆ ಖಾತೆ ಸ್ಥಾನ ಸಿಗಲಿದೆ ಎಂಬ ಮಾಹಿತಿ ಹೊರಬಿದ್ದಿದೆ.
ಇನ್ನು ಸಚಿವ ಸ್ಥಾನ ಖಚಿತವಾಗುತ್ತಿದ್ದಂತೆಯೇ ಸೋಮಣ್ಣ ದೆಹಲಿಯಲ್ಲಿ ಬಿಎಸ್ ಯಡಿಯೂರಪ್ಪ ಭೇಟಿಗೆ ತೆರಳಿದ್ದಾರೆ. ದೆಹಲಿಯಲ್ಲಿ ತಮ್ಮ ಪುತ್ರ ವಿಜಯೇಂದ್ರ ನಿವಾಸದಲ್ಲಿ ಯಡಿಯೂರಪ್ಪ ತಂಗಿದ್ದಾರೆ. ಈ ಬಗ್ಗೆ ದೆಹಲಿಯಲ್ಲಿ ಪ್ರತಿಕ್ರಿಯೆ ನೀಡಿರುವ ಸೋಮಣ್ಣ, ಯಾವ ಖಾತೆ ನೀಡಿದರೂ ಸಮರ್ಥವಾಗಿ ನಿಭಾಯಿಸುತ್ತೇನೆ ಎಂದು ತಿಳಿಸಿದ್ದಾರೆ.
ಇವರ ಜೊತೆ ತಮಿಳುನಾಡಿನಲ್ಲಿ ಸೋಲು ಕಂಡಿರುವ ಅಣ್ಣಾಮಲೈಗೂ ಸಚಿವ ಸ್ಥಾನ ಸಿಗುವ ಸಾಧ್ಯತೆ ಇದೆ ಎನ್ನಲಾಗಿದೆ. ಮಾಜಿ ಐಪಿಎಸ್ ಅಧಿಕಾರಿಯೂ ಆಗಿರುವ ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ, ಕೊಯಮತ್ತೂರ್ ಕ್ಷೇತ್ರದಿಂದ ಡಿಎಂಕೆ ಅಭ್ಯರ್ಥಿ ಗಣಪತಿ ರಾಜಕುಮಾರ್ ಎದುರು 118068 ಮತಗಳಿಂದ ಸೋಲು ಕಂಡಿದ್ದಾರೆ.