ಬೆಂಗಳೂರಿನ ಬಾಬುಸಾಬ್ ಪಾಳ್ಯ ಕಟ್ಟಡ ಕುಸಿತ ದುರಂತ: ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಸಿಎಂ; ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂ.ಘೋಷಣೆ ಮಾಡಿದ ಸಿದ್ದರಾಮಯ್ಯ

ಬೆಂಗಳೂರಿನ ಬಾಬುಸಾಬ್ ಪಾಳ್ಯ ಕಟ್ಟಡ ಕುಸಿತ ದುರಂತ: ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಸಿಎಂ; ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂ.ಘೋಷಣೆ ಮಾಡಿದ ಸಿದ್ದರಾಮಯ್ಯ

ಬೆಂಗಳೂರು: ನಗರದ ಬಾಬುಸಾಬ್ ಪಾಳ್ಯದಲ್ಲಿ ಆರು ಅಂತಸ್ತಿನ ಕಟ್ಟಡ ಕುಸಿದು ಮೃತಪಟ್ಟ 8 ಮಂದಿಯ ಕುಟುಂಬಸ್ಥರಿಗೆ ಸರ್ಕಾರದಿಂದ ತಲಾ 5 ಲಕ್ಷ ರೂಪಾಯಿ ಪರಿಹಾರ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ.



ರಾಜಧಾನಿ ಬೆಂಗಳೂರಿನಲ್ಲಿ ಹೆಣ್ಣೂರು ಬಳಿಯ ಬಾಬುಸಾಬ್ ಪಾಳ್ಯದಲ್ಲಿ 6 ಅಂತಸ್ತಿನ ನಿರ್ಮಾಣ ಹಂತದ ಕಟ್ಟಡ ಕುಸಿದು ಬಿದ್ದು ಎಂಟು ಮಂದಿ ಮೃತಪಟ್ಟಿದ್ದರು. ಸಿಎಂ ಸಿದ್ದರಾಮಯ್ಯ ಅವರು ಇಂದು ಬೆಳಗ್ಗೆ ಸ್ಥಳಕ್ಕೆ ಭೇಟಿ ನೀಡಿದ್ದು, ಮೃತರ ಕುಟುಂಬಕ್ಕೆ 5 ಲಕ್ಷ ರೂ ಘೋಷಣೆ ಮಾಡಿದ್ದಾರೆ.

ನಂತರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ನಾನು ನಿನ್ನೆ ವೈಯಾನಡ್‌ಗೆ ಹೋಗಿದ್ದೆ. ಹಾಗಾಗಿ ಇಲ್ಲಿಗೆ ಬರುವುದು ತಡವಾಗಿದೆ. ಕಟ್ಟಡ ಕುಸಿತ ದುರಂತದಲ್ಲಿ ಎಂಟು ಮಂದಿ ಮೃತಪಟ್ಟಿದ್ದಾರೆ. ಆರು ಮಂದಿಗೆ ಗಾಯಳಾಗಿವೆ ಅವರ ಆಸ್ಪತ್ರೆ ಖರ್ಚು ಸರ್ಕಾರ ಭರಿಸುತ್ತದೆ. ಮೃತರ ಕುಟುಂಬಕ್ಕೆ ಸರ್ಕಾರದಿಂದ ಪರಿಹಾರವಾಗಿ 5 ಲಕ್ಷ ನೀಡಲಾಗುವುದು. ಕಾರ್ಮಿಕ ಇಲಾಖೆಯಿಂದ ಎರಡು ಲಕ್ಷ ನೀಡಲಾಗುತ್ತದೆ. ಬಿಬಿಎಂಪಿಯಿಂದ ಮೂರು ಲಕ್ಷ ಪರಿಹಾರ ಘೋಷಿಸಿದೆ ಎಂದು ತಿಳಿಸಿದರು.

ಮೃತದೇಹ ಕಳುಹಿಸುವ ಕೆಲಸ ಆಗುತ್ತದೆ. ಅನಧಿಕೃತವಾಗಿ ಕಟ್ಟಿದ ಕಟ್ಟಡಗಳಿಗೆ ನೊಟೀಸ್ ಕೊಟ್ಟಿದ್ದಾರೆ. ಆದರೂ ಕಟ್ಟಿದ್ದಾರೆ. ಜೋನ್ ನ ಐಎಎಸ್ ಅಫೀಸ್ ಮತ್ತು ಎಕ್ಸಿಕ್ಯೂಟಿವ್ ಇಂಜಿನಿಯರ್ ಗೆ ನೋಟೀಸ್ ಕೊಡಲು ಹೇಳಲಾಗಿದೆ. ಕಾನೂನು ಪ್ರಕಾರ ಮನೆ ಕಟ್ಟಬೇಕು ಎಂದು ಜನರಿಗೆ ಮನವಿ ಮಾಡುತ್ತೇನೆ. ಕಳಪೆ ಕಾಮಗಾರಿಯಿಂದ ಈ ಕಟ್ಟಡ ಬಿದ್ದಿದೆ. ಅನಧಿಕೃತವಾಗಿ ಮನೆ ಕಟ್ಟಲು ಬಿಡಬಾರದು. ಇದಕ್ಕೆಲ್ಲಾ ಅಧಿಕಾರಿಗಳು ಹೊಣೆ ಹಾಗಾಗಿ ಕಮಿಷನರ್‌ಗೆ ಸೂಚನೆ ಕೊಟ್ಟಿದ್ದೇನೆ ಎಂದರು.

ಮೃತರ ಸಂಖ್ಯೆ 8ಕ್ಕೆ ಏರಿಕೆ

ಬೆಂಗಳೂರಿನ ಬಾಬುಸಾಬ್ ಪಾಳ್ಯದಲ್ಲಿ ನಡೆದಿರುವ ಭೀಕರ ಕಟ್ಟಡ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 8ಕ್ಕೆ ಏರಿಕೆಯಾಗಿದೆ. ಮಂಗಳವಾರ ಸಂಜೆಯಿಂದಲೂ ನಡೆಯುತ್ತಿರುವ ಕಾರ್ಯಾಚರಣೆಯಲ್ಲಿ ಇದುವರೆಗೆ 8ಕಾರ್ಮಿಕರ ಮೃತದೇಹಗಳನ್ನ ಹೊರಗೆ ತೆಗೆಯಲಾಗಿದೆ. ಸ್ಥಳದಲ್ಲೇ ಮೊಕ್ಕಾಂ ಹೂಡಿರುವ ಎನ್​ಡಿಆರ್​​ಎಫ್, ಎಸ್​ಡಿಆರ್​​ಎಫ್ ಸಿಬ್ಬಂದಿ ನಿರಂತರವಾಗಿ ಶೋಧ ಕಾರ್ಯ ನಡೆಸುತ್ತಿದ್ದಾರೆ. 14 ಜನರನ್ನು ರಕ್ಷಿಸಿದ್ದಾರೆ.

ಕಟ್ಟಡದ ಅವಶೇಷಗಳಡಿಯಿಂದ ಬಿಹಾರ ಮೂಲದ ಅರ್ಮಾನ್, ಮೊಹಮ್ಮದ್ ಸಾಹೀಲ್, ಶ್ರೀರಾನ್ ಕಿರುಪಾಲ್, ಸೋಲೋ ಪಾಸ್ವಾನ್, ತಮಿಳುನಾಡು ಮೂಲದ ಮಣಿಕಂಠನ್, ಸತ್ಯಾರಾಜು, ಆಂಧ್ರದ ತುಳುಸಿರೆಡ್ಡಿ, ಉತ್ತರ ಪ್ರದೇಶದ ಪುಲ್ಚನ್ ಯಾದವ್ ಎಂಬುವರ ಮೃತದೇಹಗಳನ್ನು ಹೊರಗೆ ತೆಗೆಯಲಾಗಿದೆ. ಅವಶೇಷಗಳಡಿ ಸಿಲುಕಿರುವ ಏಳುಮಲೈ, ಗಜೇಂದ್ರ ಪತ್ತೆಗೆ ಶೋಧ ನಡೆಯುತ್ತಿದೆ.

ಬಾಬುಸಾಬ್ ಪಾಳ್ಯದಲ್ಲಿ ಕುಸಿದು ಬಿದ್ದಿರುವ ಈ ಕಟ್ಟಡ ಕೇವಲ 40*60 ಅಳತೆಯಲ್ಲಿ ನಿರ್ಮಾಣವಾಗುತ್ತಿತ್ತು. ಮಾಲೀಕ ಯಾವೆಲ್ಲ ನಿಯಮಗಳನ್ನ ಉಲ್ಲಂಘನೆ ಮಾಡಬೇಕೋ ಅಷ್ಟೂ ನಿಯಮಗಳನ್ನು ಉಲ್ಲಂಘಿಸಿದ್ದ ಎಂದು ತಿಳಿದುಬಂದಿದೆ.

Ads on article

Advertise in articles 1

advertising articles 2

Advertise under the article