
ಮುಡಾ ಪ್ರಕರಣವನ್ನು ಬೇರೆಡೆಗೆ ಸೆಳೆಯಲು ಜಾತಿಗಣತಿ ವಿಷಯವನ್ನು ಮುನ್ನಲೆಗೆ ತಂದು ನಾಟಕ ಆಡಲಾಗುತ್ತಿದೆ: ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ ಎಚ್.ಡಿ.ಕುಮಾರಸ್ವಾಮಿ
ಬೆಂಗಳೂರು: ಮುಡಾ ನಿವೇಶನ ಹಂಚಿಕೆ ಪ್ರಕರಣದಿಂದ ಜನರ ಗಮನವನ್ನು ಬೇರೆಡೆಗೆ ಸೆಳೆಯಲು ಜಾತಿಗಣತಿ ವಿಷಯವನ್ನು ಮುನ್ನಲೆಗೆ ತಂದು ನಾಟಕ ಆಡಲಾಗುತ್ತಿದೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಸೋಮವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಸುಮಾರು ಹತ್ತು ವರ್ಷಗಳ ಹಿಂದೆ ತಯಾರಿಸಲಾದ ಜಾತಿ ಗಣತಿ ವರದಿಯ ಪ್ರಸ್ತುತತೆಯ ಬಗ್ಗೆ ಪ್ರಶ್ನಿಸಿದ ಕುಮಾರಸ್ವಾಮಿ, ತಮ್ಮ ತಪ್ಪುಗಳನ್ನು ಮುಚ್ಚಿಕೊಳ್ಳಲು ಈ ವಿಷಯವನ್ನು ಪ್ರಸ್ತಾಪಿಸಿದ್ದಾರೆ. ಸರ್ಕಾರದ ವಿರುದ್ಧ ಗುರುತರ ಆರೋಪಗಳು ಕೇಳಿ ಬಂದಾಗಲೆಲ್ಲ ಜನರ ಗಮನ ಬೇರೆಡೆಗೆ ಸೆಳೆಯಲು ತಂತ್ರಗಾರಿಕೆ ಮಾಡುತ್ತಿದ್ದಾರೆ. ಈಗ ಮೂಡಾ ಹಗರಣದ ಮೂಲಕ ಜನರ ದಿಕ್ಕು ತಪ್ಪಿಸಲು ಜಾತಿಗಣತಿಯ ವಿಚಾರವನ್ನು ಮುನ್ನೆಲೆಗೆ ತಂದಿದ್ದಾರೆ ಎಂದರು.
ಹಿಂದುಳಿದ ವರ್ಗಗಳ ಸಮುದಾಯಗಳ ಸಚಿವರು ಮತ್ತು ಶಾಸಕರೊಂದಿಗೆ ಸಿಎಂ ಸಿದ್ದರಾಮಯ್ಯ ಅವರು ಇಂದು ಚರ್ಚಿಸಿದ್ದು, "ಜಾತಿ ಗಣತಿ" ವರದಿ ಎಂದು ಜನಪ್ರಿಯವಾಗಿರುವ ಸಾಮಾಜಿಕ-ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ ವರದಿಯ ಬಗ್ಗೆ ಚರ್ಚಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಜಾತಿ ಗಣತಿ ವರದಿಯನ್ನು ಸಚಿವ ಸಂಪುಟದ ಮುಂದೆ ಇಡಲು ಸರ್ಕಾರ ನಿರ್ಧರಿಸಿದ್ದು, ಸಂಪುಟ ಸಭೆಯಲ್ಲಿ ಚರ್ಚಿಸಿ ಅದನ್ನು ವಿಧಾನಸಭೆಯಲ್ಲಿ ಮಂಡಿಸಬೇಕೆ ಅಥವಾ ನೇರವಾಗಿ ಜಾರಿಗೊಳಿಸಬೇಕೆ ಎಂಬ ಬಗ್ಗೆ ನಿರ್ಧರಿಸಲಾಗುವುದು ಎಂದು ಗೃಹ ಸಚಿವ ಜಿ ಪರಮೇಶ್ವರ ಅವರು ಭಾನುವಾರ ಹೇಳಿದ್ದಾರೆ.
ಕಾಂತರಾಜು ಸಮಿತಿಯನ್ನು ಯಾವಾಗ ರಚಿಸಲಾಯಿತು? 10 ವರ್ಷಗಳ ಹಿಂದೆ ಕಾಂತರಾಜು ಆಯೋಗ ರಚನೆ ಮಾಡಿದ್ದರು. ಈಗ ಆ ವರದಿಗೆ 10 ವರ್ಷ ಆಗಿ ಹೋಗಿದೆ. 10 ವರ್ಷಗಳಲ್ಲಿ ಅನೇಕ ಬೆಳವಣಿಗೆಗಳು ಆಗಿವೆ. ಹಳೆಯ ಜಾತಿಗಣತಿ ವರದಿಯನ್ನು ಇಷ್ಟು ದಿನ ಯಾಕೆ ಬಿಡುಗಡೆ ಮಾಡಲಿಲ್ಲ? ಎಂದು ಕುಮಾರಸ್ವಾಮಿ ಪ್ರಶ್ನಿಸಿದರು.
ದಶಕದ ಹಿಂದೆ ನಡೆದ ಜಾತಿ ಗಣತಿಯಿಂದ ಯಾವುದೇ ಸಮುದಾಯಕ್ಕೆ ಯಾವುದೇ ಪ್ರಯೋಜನ ಇಲ್ಲ. "ನಾನು ವರದಿಯನ್ನು ಬಿಡುಗಡೆ ಮಾಡಲು ಬಿಡಲಿಲ್ಲ ಎಂದು (ಕಾಂಗ್ರೆಸ್‌ನಿಂದ) ಆರೋಪಿಸಲಾಗಿದೆ. ಲೋಕಸಭೆ ಚುನಾವಣೆಗೆ ಮೊದಲೇ ಸಿದ್ದರಾಮಯ್ಯ ಅವರ ಕೈಗೆ ಜಾತಿಗಣತಿ ವರದಿ ಕೊಡಲಾಗಿದೆ, ಅಲ್ಲವೇ? ಲೋಕಸಭೆ ಚುನಾವಣೆ ಮೊದಲೇ ವರದಿ ಪಡೆದರೂ ಇಷ್ಟು ದಿನಗಳವರೆಗೂ ಅದರ ಬಗ್ಗೆ ಸದ್ದೇ ಇರಲಿಲ್ಲ ಯಾಕೆ? ಎಂದು ಪ್ರಶ್ನಿಸಿದರು.
ಜಾತಿ ಗಣತಿ ವರದಿ ಸಾರ್ವಜನಿಕವಾಗಿ ಪ್ರಕಟಿಸಿ ಜಾರಿಗೊಳಿಸಬೇಕು ಎಂದು ಕಾಂಗ್ರೆಸ್ ಹಿರಿಯ ಮುಖಂಡ ಬಿ ಕೆ ಹರಿಪ್ರಸಾದ್ ಭಾನುವಾರ ಹೇಳಿದ್ದು, ಈ ಬಗ್ಗೆ ಪ್ರತಿಕ್ರಿಯಿಸಿದ ಕುಮಾರಸ್ವಾಮಿ, ಅದರ ಬದಲು ಅವರು(ಕಾಂಗ್ರೆಸ್) ಚುನಾವಣೆಗೆ ಹೋಗಲಿ. ಜಾತಿ ಗಣತಿ ವರದಿ ಇಟ್ಟುಕೊಂಡು ವಿಧಾನಸಭೆ ವಿಸರ್ಜಿಸಿ ಮತ್ತೊಮ್ಮೆ ಚುನಾವಣೆಗೆ ಹೋಗಲಿ ನೋಡೋಣ ಎಂದು ಸವಾಲು ಹಾಕಿದರು.
ರಾಜ್ಯದಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿಲ್ಲ. ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮಾಡಿರುವ ಅಕ್ರಮಗಳನ್ನು ಮುಚ್ಚಿಹಾಕಲು ಜನರ ಗಮನ ಬೇರೆಡೆ ಸೆಳೆಯಲು ಜಾತಿ ಗಣತಿ ವಿಷಯ ಪ್ರಸ್ತಾಪಿಸಿದ್ದಾರೆ ಎಂದು ಜೆಡಿಎಸ್. ರಾಜ್ಯಾಧ್ಯಕ್ಷರು ಆರೋಪಿಸಿದರು.