ಮುಡಾ ನಿವೇಶನ ವಾಪಸ್: ಸಿದ್ದರಾಮಯ್ಯ ಪತ್ನಿ ಪಾರ್ವತಿ ಬರೆದ ಭಾವುಕ ಪತ್ರವನ್ನೊಮ್ಮೆ ಓದಿ...
ಮೈಸೂರು: ಮಹತ್ವದ ಬೆಳವಣಿಗೆ ಎಂಬಂತೆ ಸಿಎಂ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರು ಮುಡಾದ 14 ಸೈಟ್ಗಳನ್ನು ವಾಪಸ್ ನೀಡುವುದಾಗಿ ಕಮೀಷನರ್ ಅವರಿಗೆ ಪತ್ರ ಬರೆದಿದ್ದಾರೆ. ಮುಡಾ ಹಗರಣದಲ್ಲಿ ಕಾನೂನು ಕುಣಿಕೆ ಬಿಗಿಯಾಗುತ್ತಿರುವುದನ್ನು ಮನಗಂಡ ಸಿದ್ದರಾಮಯ್ಯ ಕುಟುಂಬ ತಮ್ಮ 14 ನಿವೇಶನಗಳನ್ನು ವಾಪಸ್ ನೀಡುವುದಾಗಿ ತಿಳಿಸಿದೆ.
ಸೋಮವಾರ ತೀವ್ರ ರಾಜಕೀಯ ಬೆಳವಣಿಗೆಗಳು ನಡೆದಿದ್ದವು. ಸಿಎಂ ಸಿದ್ದರಾಮಯ್ಯ ಮತ್ತವರ ಪತ್ನಿ ಹಾಗೂ ಇತರರ ವಿರುದ್ಧ ಜಾರಿ ನಿರ್ದೇಶನಾಲಯವು ಪ್ರಕರಣದ ಮಾಹಿತಿ ವರದಿ (ECIR) ದಾಖಲಿಸಿದ ನಂತರ ಸೋಮವಾರ ಸಂಜೆ ಕಾನೂನು ತಜ್ಞರು ಮತ್ತು ಇಬ್ಬರು ಸಚಿವರನ್ನು ಭೇಟಿ ಮಾಡಿದರು, ಸಂಜೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರಕ್ಕೆ (ಮುಡಾ) ತಮ್ಮ ನಿವೇಶನಗಳನ್ನು ವಾಪಸ್ ಕೊಡುವುದಾಗಿ ಪತ್ರ ಬರೆದರು. ಇದಕ್ಕೂ ಮುನ್ನ ನಡೆದ ಸಭೆಯಲ್ಲಿ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ.ಪಾಟೀಲ್, ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ.ಮಹದೇವಪ್ಪ, ಸಿಎಂ ಕಾನೂನು ಸಲಹೆಗಾರ ಎ.ಎಸ್.ಪೊನ್ನಣ್ಣ, ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್ ಮತ್ತು ಎಡಿಜಿಪಿ (ಗುಪ್ತಚರ) ಹೇಮಂತ್ ನಿಂಬಾಳ್ಕರ್ ಉಪಸ್ಥಿತರಿದ್ದರು.ಇಡಿ ತನಿಖೆಗೆ ತಡೆಯಾಜ್ಞೆ ಪಡೆಯಲು ಕೋರ್ಟ್ ಮೊರೆ ಹೋಗುವುದು ಸೇರಿದಂತೆ ವಿವಿಧ ಆಯ್ಕೆಗಳ ಬಗ್ಗೆ ಅವರು ಸಿಎಂ ಮುಂದೆ ಚರ್ಚಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಇದಕ್ಕೂ ಮುನ್ನ ಇಡಿ ಬೆಂಗಳೂರು ವಲಯ ಕಚೇರಿಯಲ್ಲಿ ಪ್ರಕರಣ ದಾಖಲಾಗಿತ್ತು. ಕಳೆದ ವಾರಾಂತ್ಯದಲ್ಲಿ ಕರ್ನಾಟಕ ಲೋಕಾಯುಕ್ತದ ಮೈಸೂರು ಘಟಕವು ಸಿದ್ದರಾಮಯ್ಯ, ಅವರ ಪತ್ನಿ ಪಾರ್ವತಿ, ಸಿದ್ದರಾಮಯ್ಯ ಬಾಮೈದ ಮಲ್ಲಿಕಾರ್ಜುನ ಸ್ವಾಮಿ ಮತ್ತು ಮಾಜಿ ಭೂ ಮಾಲೀಕನ ವಿರುದ್ಧ ದಾಖಲಿಸಿದ ಎಫ್‌ಐಆರ್ ಆಧರಿಸಿ ಇಸಿಐಆರ್ ದಾಖಲಿಸಲಾಗಿದೆ ಎಂದು ಇಡಿ ಮೂಲಗಳು ತಿಳಿಸಿವೆ. ಭೂಮಾಲೀಕ - ದೇವರಾಜು - ಇವರಿಂದ ಸ್ವಾಮಿ ಜಮೀನು ಖರೀದಿಸಿ ಪಾರ್ವತಿಗೆ ಉಡುಗೊರೆಯಾಗಿ ನೀಡಿದ್ದರು. 2021ರಲ್ಲಿ ಮೈಸೂರು ನಗರ ವ್ಯಾಪ್ತಿಯ ಡೌನ್‌ಮಾರ್ಕೆಟ್ ಕೆಸರೆ ಪ್ರದೇಶದಲ್ಲಿ ಲೇಔಟ್ ರಚಿಸಲು 3 ಎಕರೆ 16 ಗುಂಟಾ ಜಾಗಕ್ಕೆ ಬದಲಾಗಿ 14 ನಿವೇಶನ ಹಂಚಿಕೆಗೆ ಸಂಬಂಧಿಸಿದಂತೆ ಭ್ರಷ್ಟಾಚಾರ, ವಂಚನೆ ಮತ್ತು ಫೋರ್ಜರಿ ಆರೋಪದ ಮೇಲೆ ಲೋಕಾಯುಕ್ತದಲ್ಲಿ ಪ್ರಕರಣ ದಾಖಲಾಗಿತ್ತು.
ನನ್ನ ಪತಿಯಾಗಿರುವ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಮ್ಮ 40 ವರ್ಷದ ಸುದೀರ್ಘ ರಾಜಕಾರಣದಲ್ಲಿ ಯಾವುದೇ ಸಣ್ಣ ಕಳಂಕವೂ ಅಂಟಿಕೊಳ್ಳದಂತಹ ನೈತಿಕತೆಯನ್ನು ವ್ರತದಂತೆ ಪಾಲಿಸಿಕೊಂಡು ಬಂದವರು. ರಾಜಕೀಯವೂ ಸೇರಿದಂತೆ ಸಾರ್ವಜನಿಕ ಜೀವನದಲ್ಲಿ ಕಾಣಿಸಿಕೊಂಡು ಅವರಿಗೆ ಮುಜುಗರ ಉಂಟು ಮಾಡಬಾರದು ಎಂಬ ನಿರ್ಧಾರಕ್ಕೆ ಬದ್ಧಳಾಗಿ ಬದುಕಿದವಳು. ನಾನೆಂದೂ ಮನೆ, ಆಸ್ತಿ, ಚಿನ್ನ, ಸಂಪತ್ತನ್ನು ಬಯಸಿದವಳಲ್ಲ. ಯಾವುದೇ ಕಾರಣಕ್ಕೂ ನನ್ನಿಂದ ಅವರ ರಾಜಕೀಯ ಜೀವನಕ್ಕೆ ಒಂದು ಸಣ್ಣ ಹನಿಯಷ್ಟೂ ಕಳಂಕ ತಟ್ಟಬಾರದೆಂದು ಎಚ್ಚರಿಕೆಯಿಂದ ನಡೆದುಕೊಂಡವಳು.ನನ್ನ ಪತಿಗೆ ರಾಜ್ಯದ ಜನತೆ ಹರಿಸುತ್ತಾ ಬಂದ ಪ್ರೀತಿ ಅಭಿಮಾನಗಳನ್ನು ದೂರದಿಂದಲೇ ಕಂಡು ಸಂತೋಷ ಮತ್ತು ಹೆಮ್ಮೆ ಪಟ್ಟವಳು.
ಹೀಗಿದ್ದರೂ ಮೈಸೂರಿನ ಮುಡಾ ನಿವೇಶನಕ್ಕೆ ಸಂಬಂಧಿಸಿದಂತೆ ಕೇಳಿಬಂದ ಆರೋಪಗಳಿಂದ ನಾನು ಘಾಸಿಗೊಂಡಿದ್ದೇನೆ. ನನ್ನ ಸ್ವಂತ ಸೋದರ ಅರಿಶಿನ – ಕುಂಕುಮದ ಭಾಗವಾಗಿ ಕೊಟ್ಟ ಜಮೀನಿನ ಬಾಬು ಪಡೆದ ನಿವೇಶನಗಳು ಇಷ್ಟೊಂದು ರಾದ್ಧಾಂತವಾಗುತ್ತದೆ. ಇದರಿಂದ ನನ್ನ ಪತಿಯವರು ಅನ್ಯಾಯವಾಗಿ ಆರೋಪಗಳನ್ನು ಎದುರಿಸುವಂತಾಗಬಹುದು ಎನ್ನುವುದನ್ನು ನಾನು ಊಹಿಸಿದವಳೂ ಅಲ್ಲ. ನನಗೆ ಈ ನಿವೇಶನ, ಮನೆ, ಆಸ್ತಿ, ಸಂಪತ್ತು ಯಾವುದೂ ಕೂಡ ನನ್ನ ಪತಿಯ ಗೌರವ, ಘನತೆ, ಮರ್ಯಾದೆ ಮತ್ತು ಅವರ ನೆಮ್ಮದಿಗಿಂತ ದೊಡ್ಡದಲ್ಲ. ಇಷ್ಟು ವರ್ಷಗಳ ಕಾಲ ಅಧಿಕಾರದಲ್ಲಿದ್ದ ಅವರಿಂದ ಏನನ್ನೂ ನನಗಾಗಲೀ, ನನ್ನ ಕುಟುಂಬಕ್ಕಾಗಲೀ ಬಯಸದೇ ಇದ್ದ ನನಗೆ ಈ ನಿವೇಶನಗಳು ತೃಣಕ್ಕೆ ಸಮ.
ಈ ಹಿನ್ನೆಲೆಯಲ್ಲಿ ವಿವಾದಕ್ಕೆ ಕಾರಣವಾಗಿರುವ ಮುಡಾದ 14 ನಿವೇಶನಗಳನ್ನು ವಾಪಸ್ ಮಾಡಲು ನಿರ್ಧರಿಸಿದ್ದೇನೆ. ಈ ಬಗ್ಗೆ ನನ್ನ ಪತಿಯವರ ಅಭಿಪ್ರಾಯ ಏನಿದೆ ಎನ್ನುವುದು ನನಗೆ ತಿಳಿದಿಲ್ಲ. ನನ್ನ ಮಗನ ಬಳಿಯಾಗಲಿ, ನನ್ನ ಕುಟುಂಬದ ಇತರ ಸದಸ್ಯರ ಬಳಿಯಾಗಲಿ ಇದರ ಬಗ್ಗೆ ನಾನು ಚರ್ಚಿಸಿಲ್ಲ. ಇದು ನಾನು ನನ್ನ ಆತ್ಮ ಸಾಕ್ಷಿಯ ಕರೆಗೆ ಓಗೊಟ್ಟು ಪ್ರಜ್ಞಾಪೂರ್ವಕವಾಗಿ ಕೈಗೊಂಡಿರುವ ತೀರ್ಮಾನ. ಈ ಹಂತದಲ್ಲಿ ಇಂತಹ ನಿರ್ಧಾರಕ್ಕೆ ಏಕೆ ಬಂದಿರಿ? ಎಂದು ಯಾರಾದರೂ ಕೇಳಬಹುದು. ಆರೋಪ ಕೇಳಿ ಬಂದ ದಿನವೇ ನಾನು ಈ ನಿರ್ಧಾರ ಮಾಡಿದ್ದೆ. ಆದರೆ, ಈ ಮುಡಾ ನಿವೇಶನ ಹಂಚಿಕೆಯ ಆರೋಪವನ್ನು ರಾಜಕೀಯ ದುರುದ್ದೇಶದಿಂದ ಮಾಡಲಾಗಿದ್ದು, ಈ ಅನ್ಯಾಯದ ವಿರುದ್ಧ ಹೋರಾಡಬೇಕು. ಅವರ ಸಂಚಿಗೆ ನಾವು ಬಲಿಯಾಗಬಾರದು ಎಂದು ಕೆಲವು ಹಿತೈಷಿಗಳು ಹೇಳಿದ ಕಾರಣಕ್ಕೆ ನಿವೇಶನ ವಾಪಸು ಮಾಡಬೇಕೆಂಬ ನಿರ್ಧಾರವನ್ನು ಕೈ ಬಿಟ್ಟಿದ್ದೆ. ನನ್ನ ಈ ನಿರ್ಧಾರ ಅಚಲವಾಗಿದ್ದು, ಈ ನಿವೇಶನಗಳನ್ನು ವಾಪಸು ನೀಡುವುದರ ಜೊತೆಗೆ ಮುಡಾಕ್ಕೆ ಸಂಬಂಧಿಸಿದ ಎಲ್ಲಾ ಆರೋಪಗಳ ಬಗ್ಗೆ ಸಮಗ್ರ ತನಿಖೆ ಮಾಡಬೇಕೆಂದು ಆಗ್ರಹಿಸುತ್ತೇನೆ.
ಕೊನೆಯದಾಗಿ, ಎಲ್ಲಾ ರಾಜಕೀಯ ಪಕ್ಷದ ನಾಯಕರು ಮತ್ತು ಮಾಧ್ಯಮ ಕ್ಷೇತ್ರದ ಬಂಧುಗಳಲ್ಲಿ ನನ್ನ ವಿನಮ್ರ ವಿನಂತಿ. ದಯವಿಟ್ಟು ರಾಜಕೀಯ ಕ್ಷೇತ್ರದಿಂದ ದೂರವಿದ್ದು, ತಮ್ಮ ಪಾಡಿಗೆ ತಾವಿರುವ ರಾಜಕೀಯ ಕುಟುಂಬದ ಹೆಣ್ಣು ಮಕ್ಕಳನ್ನು ರಾಜಕೀಯ ದ್ವೇಷ ಸಾಧನೆಗಾಗಿ ವಿವಾದದ ಕಣಕ್ಕೆ ಎಳೆದು ತಂದು ಅವರ ಘನತೆ, ಗೌರವಗಳಿಗೆ ಹಾನಿ ಮಾಡಬೇಡಿ ಎಂದು ಭಾವನಾತ್ಮಕವಾಗಿ ಪತ್ರ ಬರೆದಿದ್ದಾರೆ. ಸ್ನೇಹಮಯಿ ಕೃಷ್ಣ ಅವರು ಸಲ್ಲಿಸಿದ್ದ ಖಾಸಗಿ ದೂರಿನ ಆಧಾರದ ಮೇಲೆ ಸೆಪ್ಟೆಂಬರ್ 25 ರಂದು ಜನಪ್ರತಿನಿಧಿ ನ್ಯಾಯಾಲಯದ ನಿರ್ದೇಶನದ ಮೇರೆಗೆ ಲೋಕಾಯುಕ್ತ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ. ಸೆಪ್ಟೆಂಬರ್ 24 ರಂದು, ಕರ್ನಾಟಕ ಹೈಕೋರ್ಟ್ ಭ್ರಷ್ಟಾಚಾರ ತಡೆ (ಪಿಸಿ) ಕಾಯ್ದೆಯ ಸೆಕ್ಷನ್ 17 ಎ ಅಡಿಯಲ್ಲಿ ಸಿದ್ದರಾಮಯ್ಯ ವಿರುದ್ಧ ಪ್ರಕರಣಗಳನ್ನು ದಾಖಲಿಸಲು ರಾಜ್ಯಪಾಲ ತಾವರಚಂದ್ ಗೆಹ್ಲೋಟ್ ನೀಡಿದ್ದ ಅನುಮೋದನೆಯನ್ನು ಎತ್ತಿ ಹಿಡಿದಿತ್ತು.