ಹಿಂದುಳಿದ ವರ್ಗಗಳ 2A ಪಟ್ಟಿಗೆ ಸೇರಿಸಬೇಕೆಂಬ ಪಂಚಮಸಾಲಿಗರ ಹೋರಾಟಕ್ಕೆ ಬಿಜೆಪಿ ಬೆಂಬಲ; ಸುವರ್ಣಸೌಧದ ಮುಂದೆ ಧರಣಿ; ಪಂಚಮಸಾಲಿ ಮೀಸಲಾತಿ ಹೋರಾಟಗಾರರ ಮೇಲೆ ಲಾಠಿ ಚಾರ್ಜ್ ನಡೆಸಿದ್ದಕ್ಕೆ ಖಂಡನೆ
ಬೆಂಗಳೂರು: ಪಂಚಮಸಾಲಿ ಲಿಂಗಾಯತ ಸಮುದಾಯಕ್ಕೆ ಹಿಂದುಳಿದ ವರ್ಗಗಳ 2A ಪಟ್ಟಿಗೆ ಸೇರಿಸಬೇಕು ಎಂದು ಆಗ್ರಹಿಸಿ ನಡೆಯುತ್ತಿರುವ ಪ್ರತಿಭಟನೆಗೆ ಪ್ರತಿಪಕ್ಷ ಬಿಜೆಪಿ ಬೆಂಬಲ ವ್ಯಕ್ತಪಡಿಸಿದ್ದು, ಹೋರಾಟ ಮತ್ತಷ್ಟು ತೀವ್ರಗೊಂಡಿದೆ. ಜಯಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ಮೀಸಲಾತಿಗಾಗಿ ಹೋರಾಟ ನಡೆಯುತ್ತಿದ್ದು, ಮಂಗಳವಾರ ಪ್ರತಿಭಟನಾಕಾರರ ಮೇಲೆ ಲಾಠಿ ಚಾರ್ಜ್ ಮಾಡಲಾಗಿತ್ತು.
ಪ್ರಸ್ತುತ ಪಂಚಮಸಾಲಿ ಲಿಂಗಾಯತರು ಪ್ರವರ್ಗ 3 ಬಿ ಮೀಸಲಾತಿಯನ್ನು ಪಡೆದುಕೊಳ್ಳುತ್ತಿದ್ದಾರೆ. ಈ ಸಮುದಾಯವನ್ನು ಪ್ರವರ್ಗ 2 ಎ ಗೆ ಬದಲಾಯಿಸಿ ಮೀಸಲಾತಿ ಕೊಡಬೇಕು ಎಂಬ ಬೇಡಿಕೆ ಇದೆ. ಇದಕ್ಕಾಗಿ ಸರ್ಕಾರದ ಮೇಲೆ ಒತ್ತಡ ತರುತ್ತಿದ್ದಾರೆ.
ಪ್ರತಿಭಟನಾಕಾರರ ಮೇಲೆ ಪೊಲೀಸರ ಲಾಠಿ ಚಾರ್ಜ್ ವಿರೋಧಿಸಿ ಸುವರ್ಣಸೌಧದ ಬಳಿ ಇರುವ ಅಂಬೇಡ್ಕರ್ ಪ್ರತಿಮೆ ಎದುರು ವಿಪಕ್ಷ ನಾಯಕ ಆರ್, ಅಶೋಕ್ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ವಿಧಾಪರಿಷತ್ ವಿಪಕ್ಷ ನಾಯಕ ಚಲವಾದಿ ನಾರಾಯಣಸ್ವಾಮಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಮತ್ತಿತರ ಅನೇಕ ಶಾಸಕರು, ವಿಧಾನಪರಿಷತ್ ಸದಸ್ಯರು ಪಾಲ್ಗೊಂಡರು.
ಈ ವೇಳೆ ಮಾತನಾಡಿದ ಅಶೋಕ್, ಮೀಸಲಾತಿಗಾಗಿ ಹೋರಾಡುತ್ತಿರುವ ಪಂಚಮಸಾಲಿ ಲಿಂಗಾಯತರಿಗೆ ಸರ್ಕಾರ ಲಾಠಿ ಚಾರ್ಜ್ ಮೂಲಕ ಪ್ರತಿಕ್ರಿಯಿಸಿದೆ ಎಂದು ಟೀಕಿಸಿದರು.
ಪುಣೆ- ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 4ರ ಹಿರೇಬಾಗೇವಾಡಿಯ ಟೋಲ್ ಪ್ಲಾಜಾ ಬಳಿ ಜಯಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ಪ್ರತಿಭಟನೆ ನಡೆಯುತ್ತಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಲಿಂಗಾಯತ ವಿರೋಧಿಗಳು ಎಂದು ಘೋಷಣೆ ಕೂಗಿ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.
ರಸ್ತೆ ತಡೆಯಿಂದಾಗಿ ಮೂರು ಆಂಬ್ಯುಲೆನ್ಸ್ ಸೇರಿದಂತೆ ಅನೇಕ ವಾಹನಗಳು ಟ್ರಾಫಿಕ್ ಜಾಮ್ ನಲ್ಲಿ ಸಿಲುಕುವಂತಾಯಿತು. ಪೊಲೀಸರ ಮನವಿ ಮೇರೆಗೆ ಸ್ವಾಮೀಜಿ ರಸ್ತೆ ತಡೆಯನ್ನು ತೆರವುಗೊಳಿಸಿದರು.
ಮತ್ತೊಂದೆಡೆ ಹುಬ್ಬಳ್ಳಿಯ ಪ್ರೆಸಿಡೆಂಟ್ ಹೋಟೆಲ್ ಸರ್ಕಲ್ ಬಳಿ ಮಾನವ ಸರಪಳಿ ರಚಿಸಿ, ಟೈರ್ ಗಳಿಗೆ ಬೆಂಕಿ ಹಚ್ಚಿ ರಸ್ತೆ ತಡೆ ನಡೆಸಲಾಯಿತು. ಕಾಂಗ್ರೆಸ್ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.