ಸಿ.ಟಿ ರವಿ ಪ್ರಕರಣ; ಬೆಳಗಾವಿ ಕೋರ್ಟ್‌ನಿಂದ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ವರ್ಗಾವಣೆ
ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಅಶ್ಲೀಲ ಪದಬಳಕೆ ಆರೋಪ ಪ್ರಕರಣದಲ್ಲಿ ಬಿಜೆಪಿ ಎಂಎಲ್‌ಸಿ ಸಿ.ಟಿ ರವಿ ಜಾಮೀನು ಅರ್ಜಿ ವಿಚಾರಕ್ಕೆ ಸಂಬಂಧಿಸಿದಂತೆ ಬೆಳಗಾವಿ ಕೋರ್ಟ್ ಪ್ರಕರಣವನ್ನು ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ವರ್ಗಾಹಿಸಿದೆ.
ಹೀಗಾಗಿ ಸಿಟಿ ರವಿ ಅವರನ್ನ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸುವಂತೆ ಬೆಳಗಾವಿ 5ನೇ ಜೆಎಂಎಫ್‌ಸಿ ಕೋರ್ಟ್‌ನ ನ್ಯಾಯಾಧೀರಾದ ಸ್ಪರ್ಶಾ ಡಿಸೋಜಾ ಅವರು ಆದೇಶಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಸಿಟಿ ರವಿಯನ್ನು ಪೊಲೀಸರು ಬೆಂಗಳೂರಿಗೆ ಕರೆತರುತ್ತಿದ್ದಾರೆ. ಹೀಗಾಗಿ ಬಿಜೆಪಿ ನಾಯಕರು ಸಿಟಿ ಕಾರನ್ನು ಹಿಂಬಾಲಿಸಿಕೊಂಡು ಬರುತ್ತಿದ್ದಾರೆ.
ಇಂದು ಬೆಳಗ್ಗೆ ಹಿರೇಬಾಗೇವಾಡಿ ಪೊಲೀಸರು ಸಿಟಿ ರವಿ ಅವರನ್ನು ಬೆಳಗಾವಿ ಕೋರ್ಟ್‌ಗೆ ಅವರನ್ನು ಹಾಜರುಪಡಿಸಿದ್ದರು. ಈ ವೇಳೆ ಸಿಟಿ ರವಿ ಪರ ವಕೀಲರಾದ ಎಂಬಿ ಜಿರಲಿ ಅವರು ಜಾಮೀನು ನೀಡುವಂತೆ ಮನವಿ ಮಾಡಿದ್ದರು. ವಾದ-ಪ್ರತಿವಾದಗಳನ್ನು ಆಲಿಸಿದ ಬಳಿಕ ನ್ಯಾಯಮೂರ್ತಿಗಳು ಆದೇಶ ಕಾಯ್ದಿರಿಸಿದ್ದರು. ಇನ್ನು ತನಿಖಾಧಿಕಾರಿಗಳು ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಕರೆದೊಯ್ಯಲು ಅನುಮತಿ ನೀಡುವಂತೆ ಮನವಿ ಮಾಡಿದ್ದರು. ಅದರಂತೆ ಬೆಳಗಾವಿ ಕೋರ್ಟ್ ಪ್ರಕರಣವನ್ನು ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಲಯಕ್ಕೆ ವರ್ಗಾಹಿಸಿದೆ.
ಖಾನಾಪುರ ಪೊಲೀಸ್ ಠಾಣೆಯಲ್ಲಿ ಗುರುವಾರ ರಾತ್ರಿ ಹೇಳಿಕೆ ದಾಖಲಿಸಿಕೊಂಡು ಇದನ್ನು ಚಿತ್ರೀಕರಿಸಿಕೊಂಡಿದ್ದಾರೆ. ನಾನು ಸಚಿವೆ ವಿರುದ್ಧ ಯಾವುದೇ ರೀತಿಯ ಅಶ್ಲೀಲ ಪದ ಬಳಸಿಲ್ಲ. ಮಹಿಳೆಯರ ಬಗ್ಗೆ ನನಗೆ ಗೌರವಿದೆ. ಯಾರೋ ಹೇಳಿದ ಹೇಳಿಕೆ ಕೇಳಿ ನನ್ನ ಮೇಲೆ ಸಚಿವೆ ಸುಳ್ಳು ದೂರು ದಾಖಲಿಸಿದ್ದಾರೆ. ದೂರಿನಲ್ಲಿರುವ ಅಂಶಗಳು ಸತ್ಯಕ್ಕೆ ದೂರವಾಗಿವೆ ಎಂದು ಸಿಟಿ ರವಿ ಹೇಳಿಕೆ ನೀಡಿದ್ದಾರೆ.
ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ತಮ್ಮ ವಿರುದ್ಧ ಅಶ್ಲೀಲ ಪದ ಬಳಸಿ ನಿಂದಿಸಿದ್ದಾರೆ ಎಂದು ದೂರು ನೀಡಿದ್ದು ಈ ಹಿನ್ನೆಲೆಯಲ್ಲಿ ಸಿಟಿ ರವಿ ವಿರುದ್ಧ ಎಫ್ಐಆರ್ ದಾಖಲಾಗಿತ್ತು. ಹೀಗಾಗಿ ಹಿರೇಬಾಗೇವಾಡಿ ಪೊಲೀಸ್ ಠಾಣೆಯಲ್ಲಿ ಸಿಟಿ ರವಿ ವಿರುದ್ಧ ಬಿಎನ್‌ಎಸ್ ಕಾಯ್ದೆ 75 ಮತ್ತು 79ಅಡಿಯಲ್ಲಿ ಎಫ್ಐಆರ್ ದಾಖಲಿಸಿದ್ದಾರೆ. ಲೈಂಗಿಕ ಕಿರುಕುಳ, ಮಹಿಳೆ ಇಚ್ಛೆ ವಿರುದ್ಧ ಅಶ್ಲೀಲತೆ ತೋರುವುದು. ಮಹಿಳೆಯ ನಮ್ರತೆ ಅವಮಾನಿಸುವ ಉದ್ದೇಶದಿಂದ ಸನ್ನೆ, ಪದ ಅಥವಾ ಕ್ರಿಯೆ, ಲೈಂಗಿಕ ಬಣ್ಣದ ಟೀಕೆ ಎಂದು ಎಫ್ಐಆರ್ನಲ್ಲಿ ಉಲ್ಲೇಖವಾಗಿದೆ.