
ಮುಂದಿನ ದೆಹಲಿ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ ಸ್ವತಂತ್ರವಾಗಿ ಸ್ಪರ್ಧಿಸಲಿದೆ: ಕೇಜ್ರಿವಾಲ್
ನವದೆಹಲಿ: ಮುಂಬರುವ ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಜೊತೆಗಿನ ಮೈತ್ರಿ ವರದಿಯನ್ನು ದೆಹಲಿ ಮುಖ್ಯಮಂತ್ರಿ ಹಾಗೂ ಆಮ್ ಆದ್ಮಿ ಪಕ್ಷದ (ಎಎಪಿ) ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅವರು ಬುಧವಾರ ತಳ್ಳಿಹಾಕಿದ್ದು, ಸ್ವತಂತ್ರವಾಗಿ ಸ್ಪರ್ಧೆಗಿಳಿಯುವುದಾಗಿ ಘೋಷಣೆ ಮಾಡಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿ ಕೇಜ್ರಿವಾಲ್ ಅವರು ಸ್ಪಷ್ಟನೆ ನೀಡಿದ್ದಾರೆ.
ಆಮ್ ಆದ್ಮಿ ಪಕ್ಷವು ದೆಹಲಿಯಲ್ಲಿ ತನ್ನ ಸ್ವಂತ ಬಲದ ಮೇಲೆ ಈ ಚುನಾವಣೆಯಲ್ಲಿ ಹೋರಾಡಲಿದೆ. ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಳ್ಳುವ ಸಾಧ್ಯತೆ ಇಲ್ಲ ಎಂದು ಹೇಳಿದ್ದಾರೆ.
ಈ ಮೂಲಕ ರಾಷ್ಟ್ರ ರಾಜಧಾನಿಯಲ್ಲಿ ಭಾರತೀಯ ಜನತಾ ಪಕ್ಷವನ್ನು (ಬಿಜೆಪಿ) ಎದುರಿಸಲು ಎರಡು ಪಕ್ಷಗಳ ನಡುವಿನ ಮೈತ್ರಿ ಕುರಿತ ಇತ್ತೀಚಿನ ಊಹಾಪೋಹಗಳಿಗೆ ತೆರೆ ಎಳೆದಿದ್ದಾರೆ.
ಮುಂದಿನ ವರ್ಷ ಫೆಬ್ರವರಿಯಲ್ಲಿ ದೆಹಲಿಯಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದ್ದು, ಪ್ರಸ್ತುತ ಆಡಳಿತದಲ್ಲಿರುವ ಎಎಪಿ ಈಗಾಗಲೇ ಪಕ್ಷದ ಅಭ್ಯರ್ಥಿಗಳ ಎರಡು ಪಟ್ಟಿಯನ್ನು ಬಿಡುಗಡೆ ಮಾಡಿದೆ.
ಈ ಬಾರಿಯ ಚುನಾವಣಾ ಕದನಕ್ಕೆ ದೆಹಲಿ ಸಾಕ್ಷಿಯಾಗಲಿದೆ, ಎಎಪಿ ಸತತ ಮೂರನೇ ಅವಧಿಗೆ ಅಧಿಕಾರವನ್ನು ಪಡೆಯುವ ಗುರಿಯನ್ನು ಹೊಂದಿದ್ದರೆ, ಬಿಜೆಪಿ ಮತ್ತು ಕಾಂಗ್ರೆಸ್ ತಮ್ಮ ಅಧಿಕಾರವನ್ನು ಮರಳಿ ಪಡೆಯಲು ಪ್ರಯತ್ನ ನಡೆಸಲಿವೆ.