ಸಚಿನ್ ಆತ್ಮಹತ್ಯೆ ಪ್ರಕರಣಕ್ಕೂ ನನಗೂ ಸಂಬಂಧವಿಲ್ಲ: ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ ಪ್ರಿಯಾಂಕ್ ಖರ್ಗೆ; ಮಣಿಕಂಠ ರಾಠೋಡ್ ಆಡಿಯೋ ಬಿಡುಗಡೆ
ಬೆಂಗಳೂರು: ಸಚಿನ್ ಆತ್ಮಹತ್ಯೆ ಪ್ರಕರಣಕ್ಕೂ ನನಗೂ ಸಂಬಂಧವಿಲ್ಲ. ಹಾಗಿದ್ದರೂ ನನ್ನ ವಿರುದ್ಧ ಇಲ್ಲಸಲ್ಲದ ಆರೋಪ ಮಾಡುತ್ತಿದ್ದಾರೆ ಎಂದು ಪ್ರಿಯಾಂಕ್ ಖರ್ಗೆ ಗುರುವಾರ ವಾಗ್ದಾಳಿ ನಡೆಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪ್ರಿಯಾಂಕ್ ಖರ್ಗೆ, ಸಚಿನ್ ಪಾಂಚಲ್ ಹಾಗೂ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣಗಳಲ್ಲಿ ಹೊಂದಾಣಿಕೆ ಇಲ್ಲ ಎಂದರು.
ಸಂತೋಷ್ ಪಾಟೀಲ್ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ 2022, ಏಪ್ರಿಲ್ 12 ರಂದು ಉಡುಪಿಯ ಹೋಟೆಲ್ ಕೊಠಡಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಗುತ್ತಿಗೆದಾರರ ಸಂತೋಷ್ ಪಾಟೀಲ್ ಡೆತ್ ನೋಟ್ ನಲ್ಲಿ ಅಂದಿನ ಸಚಿವ ಕೆ.ಎಸ್ ಈಶ್ವರಪ್ಪ ಅವರ ಹೆಸರು ಉಲ್ಲೇಖಿಸಿದ್ದರು. ಅಲ್ಲದೆ, ಹೆಂಡತಿ ಮಕ್ಕಳಿಗೆ ಪರಿಹಾರ ಕೊಡಬೇಕು ಎಂದು ಹೇಳಿದ್ದರು. ಆದರೆ ಸಚಿನ್ ಪಾಂಚಲ್ ಡೆತ್ ನೋಟ್ ನಲ್ಲಿ ನನ್ನ ಹೆಸರು ಏಲ್ಲಿದೆ ಎಂದು ಪ್ರಿಯಾಂಕ್ ಖರ್ಗೆ ಪ್ರಶ್ನಿಸಿದರು.
ಸಂತೋಷ್ ಪಾಟೀಲ್ ಕುಟುಂಬಕ್ಕೆ ಬಿಜೆಪಿಗರು ಸಹಾಯ ಮಾಡಿದ್ದಾರಾ? ಸಂತೋಷ್ ಪಾಟೀಲ್ ಕುಟುಂಬವನ್ನು ಬಿಜೆಪಿಯವರು ಇದುವರೆಗೂ ಏಕೆ ಭೇಟಿ ಮಾಡಿಲ್ಲ? ಕೇವಲ ಮೊಸಳೆ ಕಣ್ಣೀರು ಸುರಿಸಿದರೆ ರಾಜ್ಯದ ಜನ ಮೋಸ ಹೋಗುವುದಿಲ್ಲ ಎಂದು ಬಿಜೆಪಿ ನಾಯಕರ ವಿರುದ್ಧ ಕಿಡಿಕಾರಿದರು.
ಇದೇ ವೇಳೆ ಬಿಜೆಪಿ ಅಭ್ಯರ್ಥಿ ಮಣಿಕಂಠ ರಾಠೋಡ್ ಅವರ ಧ್ವನಿಯುಳ್ಳ ಆಡಿಯೋವೊಂದನ್ನು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಬಿಡುಗಡೆ ಮಾಡಿದ್ದಾರೆ.
ಈ ಮಣಿಕಂಠ ರಾಠೋಡ್ ಮೇಲೆ ಸುಮಾರು 20ರಿಂದ 30 ಪ್ರಕರಣಗಳು ದಾಖಲಾಗಿವೆ. ಆದರೂ ಬಿಜೆಪಿ ಈತನ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ. ಮಣಿಕಂಠ ರಾಠೋಡ್ ನೇತೃತ್ವದಲ್ಲೇ ಬಿಜೆಪಿ 'ಕಲಬುರಗಿ ಚಲೋ' ಹಮ್ಮಿಕೊಂಡಿದೆ ಎಂದು ಪ್ರಿಯಾಂಕ್ ಖರ್ಗೆ ವಾಗ್ದಾಳಿ ನಡೆಸಿದರು.