
ಕರಾವಳಿಯಲ್ಲಿ ಹೆಚ್ಚುತ್ತಿರುವ ಕೋಮು ಉದ್ವಿಗ್ನತೆ ಹಿನ್ನೆಲೆ; ಆ್ಯಂಟಿ ಕಮ್ಯೂನಲ್ ಟಾಸ್ಕ್ ಫೋರ್ಸ್ ರಚನೆ: ಪರಮೇಶ್ವರ್
ಮಂಗಳೂರು: ರೌಡಿಶೀಟರ್ ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಬಳಿಕ ಬಳಿಕ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋಮು ಉದ್ವಿಗ್ನತೆ ಹೆಚ್ಚಾಗಿದ್ದು, ಗೃಹ ಸಚಿವ ಡಾ. ಜಿ ಪರಮೇಶ್ವರ್ ಶನಿವಾರ ಮಂಗಳೂರಿಗೆ ಭೇಟಿ ನೀಡಿ ಪೊಲೀಸ್ ಅಧಿಕಾರಿಗಳ ಜೊತೆ ಸಭೆ ನಡೆಸಿದರು.
ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹಾಗೂ ಪೊಲೀಸ್ ಅಧಿಕಾರಿಗಳ ಜೊತೆ ಮಂಗಳೂರಿನ ಸರ್ಕ್ಯೂಟ್ ಹೌಸ್ನಲ್ಲಿ ಸಭೆ ನಡೆಸಿದ ಬಳಿಕ ಮಾತನಾಡಿದ ಅವರು, ದಕ್ಷಿಣ ಕನ್ನಡ ಜಿಲ್ಲೆ ಮತ್ತು ಉಡುಪಿ ಜಿಲ್ಲೆಗೆ ಸೀಮಿತವಾಗಿ ಪ್ರತ್ಯೇಕವಾಗಿ ಆ್ಯಂಟಿ ಕಮ್ಯೂನಲ್ ಟಾಸ್ಕ್ ಫೋರ್ಸ್ ಆರಂಭಿಸಲಾಗುವುದು. ಕೋಮು ಪ್ರಚೋದನಾಕಾರಿ ಹೇಳಿಕೆ ನೀಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ಭರವಸೆ ನೀಡಿದರು.
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಸಂಬಂಧಪಟ್ಟ 8 ಮಂದಿಯನ್ನು ಪೊಲೀಸರು ಈಗಾಗಲೇ ಬಂಧಿಸಿದ್ದಾರೆ. ಆ ಕುರಿತು ಹೆಚ್ಚಿನ ಮಾಹಿತಿಯನ್ನು ಪೊಲೀಸರೇ ನೀಡಲಿದ್ದಾರೆ. ಕರಾವಳಿ ಜಿಲ್ಲೆಗಳಲ್ಲಿ ಕೋಮುಗಲಭೆ ನಡೆಯುವ ನಿಟ್ಟಿನಲ್ಲಿ ಐಜಿ ಮಟ್ಟದ ಅಧಿಕಾರಿಗಳ ನೇತೃತ್ವದಲ್ಲಿ ಆ್ಯಂಟಿ ಕಮ್ಯೂನಲ್ ಟಾಸ್ಕ್ ಫೋರ್ಸ್ ಎರಡು ವಾರಗಳಲ್ಲಿ ಆರಂಭವಾಗಲಿದೆ. ಈ ಟಾಸ್ಕ್ ಫೋರ್ಸ್ ಪೊಲೀಸರ ಜೊತೆಗೂಡಿ ಕಾರ್ಯನಿರ್ವಹಿಸಲಿದೆ ಎಂದು ಪರಮೇಶ್ವರ ತಿಳಿಸಿದರು.