
ಇದು ಕನ್ನಡ, ಕನ್ನಡಿಗ ಮತ್ತು ಕರ್ನಾಟಕ ಸಂಭ್ರಮಿಸುವ ಹೊತ್ತು; ಪ್ರತಿಷ್ಠಿತ 'ಬೂಕರ್" ಪ್ರಶಸ್ತಿ' ಪುರಸ್ಕೃತ ಲೇಖಕಿ ಬಾನು ಮುಷ್ತಾಕ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿನಂದನೆ
ಬೆಂಗಳೂರು: ಅಂತಾರಾಷ್ಟ್ರೀಯ 'ಬೂಕರ್ ಪ್ರಶಸ್ತಿ'ಗೆ ಭಾಜನರಾಗಿರುವ ನ್ನಡದ ಹೆಮ್ಮೆಯ ಲೇಖಕಿ ಬಾನು ಮುಷ್ತಾಕ್ಗೆ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿನಂದನೆ ಸಲ್ಲಿಸಿದ್ದಾರೆ.
ಅಂತಾರಾಷ್ಟ್ರೀಯ ಬೂಕರ್ ಸಾಹಿತ್ಯ ಪ್ರಶಸ್ತಿ ಪುರಸ್ಕೃತರಾಗಿರುವ ಕನ್ನಡದ ಹೆಮ್ಮೆಯ ಲೇಖಕಿ ಬಾನು ಮುಸ್ತಾಕ್ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು. ಇದು ಕನ್ನಡ, ಕನ್ನಡಿಗ ಮತ್ತು ಕರ್ನಾಟಕ ಸಂಭ್ರಮಿಸುವ ಹೊತ್ತು ಎಂದು ಅವರು ಹೇಳಿದ್ದಾರೆ.
ಈ ನೆಲದ ಸೌಹಾರ್ದತೆ, ಜಾತ್ಯತೀತತೆ ಮತ್ತು ಸೋದರತ್ವದ ನಿಜ ಮೌಲ್ಯಗಳನ್ನು ಮೈಗೂಡಿಸಿಕೊಂಡು ಬರೆಯುತ್ತಿರುವ ಬಾನು ಮುಷ್ತಾಕ್ ಅವರು ಕನ್ನಡದ ಹಿರಿಮೆಯ ಬಾವುಟವನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಹಾರಿಸಿ ನಮಗೆಲ್ಲ ಗೌರವ ತಂದುಕೊಟ್ಟಿದ್ದಾರೆ. ಅವರು ಇನ್ನಷ್ಟು ಕಾಲ ಸತ್ವಯುತವಾಗಿ ಬರೆಯುತ್ತಾ ಕನ್ನಡದ ಕಂಪನ್ನು ಜಗದಗಲಕ್ಕೆ ಪಸರಿಸುತ್ತಾ ಇರಲಿ ಎಂದು ಶುಭ ಹಾರೈಸಿದ್ದಾರೆ.
ಬೂಕರ್ ಪ್ರಶಸ್ತಿಗೆ ಭಾಜನವಾಗಿರುವ ಅವರ ಕೃತಿ 'ಹೃದಯ ದೀಪ'ವನ್ನು ಇಂಗ್ಲೀಷ್ ಗೆ ಅನುವಾದಿಸಿರುವ ಪ್ರತಿಭಾವಂತ ಲೇಖಕಿ ದೀಪಾ ಭಸ್ತಿ ಅವರಿಗೂ ಕನ್ನಡಿಗರೆಲ್ಲರ ಪರವಾಗಿ ಸಿದ್ದರಾಮಯ್ಯ ಅಭಿನಂದನೆ ಸಲ್ಲಿಸಿದ್ದಾರೆ.