
ಭಾರತದ ಮೇಲೆ ಶೇ.25 ಸುಂಕ ವಿಧಿಸುವುದಾಗಿ ಹೇಳಿದ ಬೆನ್ನಲ್ಲೇ ಪಾಕಿಸ್ತಾನ ಜೊತೆ ಅಮೆರಿಕ ತೈಲ ಒಪ್ಪಂದ
ಭಾರತಕ್ಕೆ ಭವಿಷ್ಯದಲ್ಲಿ ಪಾಕ್‌ನವರು ತೈಲ ಮಾರಾಟ ಮಾಡಬಹುದು ಎಂದ ಅಮೆರಿಕ ಅಧ್ಯಕ್ಷ
ವಾಷಿಂಗ್ಟನ್: ಭಾರತದಿಂದ ಆಮದು ಮಾಡಿಕೊಳ್ಳುವ ವಸ್ತುಗಳ ಮೇಲೆ ಶೇ.25 ಸುಂಕ ವಿಧಿಸುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಿಸಿರುವ ಬೆನ್ನಲ್ಲೇ, ಪಾಕಿಸ್ತಾನದೊಂದಿಗೆ ಅಮೆರಿಕ ವ್ಯಾಪಾರ ಒಪ್ಪಂದ ಮಾಡಿಕೊಂಡಿರುವುದು ಚರ್ಚೆಗೆ ಗ್ರಾಸವಾಗಿದೆ.
ಭಾರತಕ್ಕೆ 25% ಸುಂಕ ವಿಧಿಸಿದ ಕೆಲವೇ ಗಂಟೆಗಳಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಪಾಕಿಸ್ತಾನದೊಂದಿಗೆ ಜಂಟಿಯಾಗಿ ತೈಲ ನಿಕ್ಷೇಪಗಳನ್ನು ಅಭಿವೃದ್ಧಿಪಡಿಸಲು ಹೊಸ ವ್ಯಾಪಾರ ಒಪ್ಪಂದವನ್ನು ಮಾಡಿಕೊಂಡಿರುವುದಾಗಿ ಹೇಳಿದ್ದಾರೆ.
ಟ್ರಂಪ್ ತನ್ನ ಸಾಮಾಜಿಕ ಮಾಧ್ಯಮ ವೇದಿಕೆ ಟ್ರೂತ್ ಸೋಶಿಯಲ್‌ನಲ್ಲಿ ಪೋಸ್ಟ್ ಮಾಡಿದ್ದು, ಅಮೆರಿಕ ಮತ್ತು ಪಾಕಿಸ್ತಾನದ ನಡುವಿನ ತೈಲ ಒಪ್ಪಂದದ ಬಗ್ಗೆ ಮಾಹಿತಿ ನೀಡಿದರು.
ನಾವು ಪಾಕಿಸ್ತಾನದೊಂದಿಗೆ ಒಪ್ಪಂದವನ್ನು ಮಾಡಿಕೊಂಡಿದ್ದೇವೆ. ಆ ಮೂಲಕ ಪಾಕಿಸ್ತಾನ ಮತ್ತು ಅಮೆರಿಕ ತಮ್ಮ ಬೃಹತ್ ತೈಲ ನಿಕ್ಷೇಪಗಳನ್ನು ಅಭಿವೃದ್ಧಿಪಡಿಸುವಲ್ಲಿ ಒಟ್ಟಾಗಿ ಕೆಲಸ ಮಾಡಲಿವೆ. ಈ ಪಾಲುದಾರಿಕೆಯನ್ನು ಮುನ್ನಡೆಸುವ ತೈಲ ಕಂಪೆನಿಯನ್ನು ಆಯ್ಕೆ ಮಾಡುವ ಪ್ರಕ್ರಿಯೆಯಲ್ಲಿದ್ದೇವೆ. ಪಾಕಿಸ್ತಾನ ಮುಂದೊಂದು ದಿನ ಭಾರತಕ್ಕೆ ತೈಲವನ್ನು ಮಾರಾಟ ಮಾಡಬಹುದು ಎಂದು ಟ್ರಂಪ್ ಹೇಳಿದ್ದಾರೆ.
ಡೊನಾಲ್ಡ್ ಟ್ರಂಪ್ ಅವರು ಭಾರತದ ಉತ್ಪನ್ನಗಳ ಮೇಲೆ ಶೇ.25ರಷ್ಟು ಸುಂಕ ವಿಧಿಸುವುದಾಗಿ ಘೋಷಿಸಿದ್ದರು. ಇದು ಆ.1ರಿಂದಲೇ ಜಾರಿಗೊಳ್ಳಲಿದೆ. ರಷ್ಯಾದಿಂದ ತೈಲ ಮತ್ತು ಶಸ್ತ್ರಾಸ್ತ್ರಗಳನ್ನು ಖರೀದಿಸುತ್ತಿರುವುದಕ್ಕಾಗಿ ಭಾರತವು ಹೆಚ್ಚುವರಿ ದಂಡವನ್ನೂ ಪಾವತಿಸಬೇಕಿದೆ ಎಂದು ಟ್ರಂಪ್ ಹೇಳಿದ್ದರು.
ಟ್ರಂಪ್ ಪರಿಗಣಿಸಲಾಗುತ್ತಿರುವ ತೈಲ ಕಂಪನಿಗಳ ಹೆಸರು ಮತ್ತು ಸಮಯದ ಬಗ್ಗೆ ವಿವರಗಳನ್ನು ನೀಡಲಿಲ್ಲ. ಈ ಬಗ್ಗೆ ವಾಷಿಂಗ್ಟನ್‌ನಲ್ಲಿರುವ ಪಾಕಿಸ್ತಾನಿ ರಾಯಭಾರಿ ಕಚೇರಿಯು ತಕ್ಷಣಕ್ಕೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.