ಅತ್ಯಾಚಾರ ಪ್ರಕರಣ; ಹಾಸನ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ದೋಷಿ ಎಂದ ಜನಪ್ರತಿನಿಧಿಗಳ ನ್ಯಾಯಾಲಯ
ಬೆಂಗಳೂರು: ಇಡೀ ದೇಶವನ್ನು ಬೆಚ್ಚಿ ಬೀಳಿಸಿದ್ದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ದೋಷಿ ಎಂದು ಜನಪ್ರತಿನಿಧಿಗಳ ನ್ಯಾಯಾಲಯ ಮಹತ್ವದ ತೀರ್ಪು ನೀಡಿದೆ.
ಅಶ್ಲೀಲ ವಿಡಿಯೋ ಹಾಗೂ ಅತ್ಯಾಚಾರ ಪ್ರಕರಣದಲ್ಲಿ ಬಂಧಿತರಾಗಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ದೋಷಿ ಎಂದು ಜನಪ್ರತಿನಿಧಿಗಳ ನ್ಯಾಯಾಲಯ ಶುಕ್ರವಾರ ಮಹತ್ವದ ತೀರ್ಪುನೀಡಿದೆ.
26 ಸಾಕ್ಷಿಗಳ ವಿಚಾರಣೆ ನಡೆಸಿರುವ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ (Special Court) ಈ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ಅಪರಾಧಿ ಎಂದು ತೀರ್ಪು ನೀಡಿದೆ.
ಅತ್ಯಾಚಾರ ಪ್ರಕರಣದಲ್ಲಿ ಜೈಲು ಸೇರಿರುವ ಮಾಜಿ ಸಂಸದ ಪ್ರಜಲ್ವ್ ರೇವಣ್ಣ ಕಳೆದ ಕಳೆದ 14 ತಿಂಗಳಿನಿಂದ ಸೆರೆಮನೆಯಲ್ಲಿ ಬಂಧಿಯಾಗಿದ್ದಾರೆ. ಪ್ರಜ್ವಲ್ ರೇವಣ್ಣ ವಿರುದ್ಧ ಹಲವು ಸೆಕ್ಷನ್ಗಳ ಅಡಿಯಲ್ಲಿ ಕೇಸ್ ದಾಖಲಾಗಿತ್ತು.
ಐಪಿಸಿ ಸೆಕ್ಷನ್ 376 (2)(k) ಅಡಿ ಮಹಿಳೆಯ ಮೇಲೆ ಹಕ್ಕು ಚಲಾಯಿಸುವ ಸ್ಥಿತಿಯಲ್ಲಿದ್ದು ಅತ್ಯಾಚಾರ ಎಸಗಲಾಗಿದೆ. 376 (2) (n) ಅಡಿ ಮಹಿಳೆಯ ಮೇಲೆ ಪದೇ ಪದೇ ಅತ್ಯಾಚಾರ. 354(A) ಲೈಂಗಿಕತೆ ಬೇಡಿಕೆ ಇಡುವುದು. 354 (B) ಮಹಿಳೆಯನ್ನು ವಿವಸ್ತ್ರಗೊಳಿಸುವುದು. 354 (c) ಮಹಿಳೆಯ ಅಶ್ಲೀಲ ದೃಶ್ಯ ಚಿತ್ರೀಕರಿಸುವುದು. 506 ಜೀವ ಬೆದರಿಕೆ, 201 ಸಾಕ್ಷ್ಯನಾಶದ ಅಡಿ ದೋಷಾರೋಪ ಹೊರಿಸಲಾಗಿದೆ.
ನ್ಯಾಯಧೀಶರಾದ ಸಂತೋಷ್ ಗಜಾನನ ಭಟ್ ಅವರು ವಿಚಾರಣೆ ಪೂರ್ಣಗೊಳಿಸಿ ಇಂದಿಗೆ ತೀರ್ಪು ಕಾಯ್ದಿರಿಸಿದ್ದರು. ಅದರಂತೆ ಇಂದು ಪ್ರಜ್ವಲ್ ರೇವಣ್ಣ ದೋಷಿ ಎಂದು ತೀರ್ಪು ನೀಡಿದ್ದಾರೆ. ಇನ್ನು ನ್ಯಾಯಾಧೀಶರು ನಾಳೆ ಶಿಕ್ಷೆ ಪ್ರಮಾಣ ಪ್ರಕಟಿಸುವುದಾಗಿ ಹೇಳಿದ್ದಾರೆ ಎಂದು ಹೇಳಲಾಗಿದೆ.
ಪ್ರಜ್ವಲ್ ರೇವಣ್ಣಗೆ ಶಿಕ್ಷೆ ಏನು? ಎಷ್ಟು? ಎಂಬುದನ್ನು ನ್ಯಾಯಾಲಯ ಇನ್ನಷ್ಟೇ ಪ್ರಕಟಿಸಬೇಕಿದೆ. ಕನಿಷ್ಠ 10 ವರ್ಷ, ಗರಿಷ್ಠ ಜೀವಾವಧಿ ಶಿಕ್ಷೆಗೆ ಒಳಪಡುವ ಸಾಧ್ಯತೆ ಇದೆ.
ಏನಿದು ಪ್ರಕರಣ?
ಏಪ್ರಿಲ್ 28, 2024 ರಂದು ಹಾಸನದ ಹೊಳೆನರಸೀಪುರ ಪಟ್ಟಣ ಪೊಲೀಸ್ ಠಾಣೆಯಲ್ಲಿ 47 ವರ್ಷದ ಮನೆಕೆಲಸದವಳು ಸಲ್ಲಿಸಿದ ದೂರಿನ ಆಧಾರದ ಮೇಲೆ ಪ್ರಕರಣವನ್ನು ದಾಖಲಿಸಲಾಗಿತ್ತು. ಪ್ರಜ್ವಲ್ ರೇವಣ್ಣ ಅತ್ಯಾಚಾರ ಮತ್ತು ಕಿರುಕುಳ ನೀಡಿದ್ದಾರೆ ಎಂದು ಸಂತ್ರಸ್ಥ ಮಹಿಳೆ ಆರೋಪಿಸಿದ್ದರು.
ಹಗರಣ ಬಯಲಾದ ನಂತರ, ಪ್ರಜ್ವಲ್ ರೇವಣ್ಣ ಪೋಷಕರಾದ ಮಾಜಿ ಸಚಿವ ಮತ್ತು ಹೊಳೆನಸಸೀಪುರ ಶಾಸಕ ಎಚ್.ಡಿ. ರೇವಣ್ಣ ಮತ್ತು ಭವಾನಿ ರೇವಣ್ಣ ಸಾಕ್ಷಿ ಹೇಳದಂತೆ ಬೆದರಿಕೆ ಹಾಕಿ ಅಪಹರಿಸಿದ್ದರು ಎಂದು ಹೇಳಲಾಗಿದೆ. ನಂತರ ಮೈಸೂರಿನ ಕೆ.ಆರ್. ನಗರದಲ್ಲಿರುವ ತೋಟದ ಮನೆಯಿಂದ ವಿಶೇಷ ತನಿಖಾ ತಂಡ (ಎಸ್‌ಐಟಿ) ಮಹಿಳೆಯನ್ನು ರಕ್ಷಿಸಿತು. ಸೆಪ್ಟೆಂಬರ್ 2024 ರಲ್ಲಿ ಪ್ರಕರಣದಲ್ಲಿ ಎಸ್‌ಐಟಿ 1,632 ಪುಟಗಳ ಆರೋಪಪಟ್ಟಿ ಸಲ್ಲಿಸಿತು.
ಕರ್ನಾಟಕದಲ್ಲಿ ಲೋಕಸಭಾ ಚುನಾವಣೆಯ ಒಂದು ದಿನದ ನಂತರ ಬೆಳಕಿಗೆ ಬಂದ ನಾಲ್ಕು ಲೈಂಗಿಕ ದೌರ್ಜನ್ಯ ಮತ್ತು ಅತ್ಯಾಚಾರ ಪ್ರಕರಣಗಳಲ್ಲಿ ಪ್ರಜ್ವಲ್ ರೇವಣ್ಣ ಪ್ರಮುಖ ಆರೋಪಿಯಾಗಿದ್ದರು.
ಸಾಮಾಜಿಕ ಮಾಧ್ಯಮಗಳಲ್ಲಿ ಬಹು ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯವನ್ನು ಚಿತ್ರಿಸುವ ಅಶ್ಲೀಲ ವೀಡಿಯೊ ತುಣುಕುಗಳು ಕಾಣಿಸಿಕೊಂಡವು ಮತ್ತು ಅಂತಹ ವೀಡಿಯೊಗಳನ್ನು ಹೊಂದಿರುವ ಪೆನ್ ಡ್ರೈವ್‌ಗಳನ್ನು ಹಾಸನದಲ್ಲಿ ವಶಪಡಿಸಿಕೊಳ್ಳಲಾಗಿತ್ತು ಎಂದು ಹೇಳಲಾಗಿದೆ. ಹಗರಣ ಸ್ಫೋಟಗೊಳ್ಳುವ ಸ್ವಲ್ಪ ಸಮಯದ ಮೊದಲು, ಏಪ್ರಿಲ್ 27, 2024 ರಂದು ಪ್ರಜ್ವಲ್ ದೇಶ ಬಿಟ್ಟು ಪಲಾಯನ ಮಾಡಿದ್ದರು.