ಕಮ್ಯುನಿಸ್ಟ್ ಮನಸ್ಥಿತಿಯ ಅಧಿಕಾರಿಗಳಿಂದ ಹಿಂದೂ ಸಮಾಜದ ಒಗ್ಗಟ್ಟು ಒಡೆಯಲು ಹುನ್ನಾರ: ಶಾಸಕ ಯಶ್ ಪಾಲ್ ಸುವರ್ಣ; ಶ್ರೀಕ್ಷೇತ್ರ ಧರ್ಮಸ್ಥಳದ ಬಗ್ಗೆ ಅಪಪ್ರಚಾರ ಮಾಡುವವರ ವಿರುದ್ಧ ಸೂಕ್ತ ಕ್ರಮಕ್ಕೆ ಒತ್ತಾಯಿಸಿ ಧರಣಿ
ಉಡುಪಿ: ಶ್ರೀಕ್ಷೇತ್ರ ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ದೇವಾಲಯ ಹಾಗೂ ಹೆಗ್ಗಡೆ ಕುಟುಂಬಕ್ಕೆ ಕಳಂಕ ತರಲು ಒಳಸಂಚು ನಡೆಸುತ್ತಿರುವವರ ವಿರುದ್ಧ ಸೂಕ್ತ ತನಿಖೆ ನಡೆಸಿ ಕ್ರಮಕೈಗೊಳ್ಳಬೇಕೆಂದು ಆಗ್ರಹಿಸಿ ಶ್ರೀ ಧರ್ಮಸ್ಥಳ ಭಕ್ತಾಭಿಮಾನಿ ವೇದಿಕೆಯ ನೇತೃತ್ವದಲ್ಲಿ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಮುಂಭಾಗದಲ್ಲಿ ಧರಣಿ ನಡೆಸಲಾಯಿತು.
ನೂರಾರು ಸಂಖ್ಯೆಯಲ್ಲಿ ಸೇರಿದ್ದ ಶ್ರೀ ಧರ್ಮಸ್ಥಳದ ಭಕ್ತಾಭಿಮಾನಿಗಳು ಧರ್ಮಸ್ಥಳ ಕ್ಷೇತ್ರ ಹಾಗೂ ಹೆಗ್ಗಡೆ ಕುಟುಂಬ ಬಗ್ಗೆ ಅಪಪ್ರಚಾರ ಮಾಡುವವರ ವಿರುದ್ಧ ಸೂಕ್ತ ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಮಾತನಾಡಿ, ಕಮುನಿಷ್ಟ್ ಮಾನಸಿಕತೆಯ ಕೆಲವೊಂದು ವ್ಯಕ್ತಿಗಳು ಹಿಂದೂ ಸಮಾಜವನ್ನು ಒಡೆಯುವ ಕೆಲಸ ಮಾಡುತ್ತಿದ್ದಾರೆ. ಧರ್ಮಸ್ಥಳ ದೇವಸ್ಥಾನದ ಬಗ್ಗೆ ಸುಳ್ಳು ಪ್ರಚಾರ ಮಾಡವವರನ್ನು ಸುಮ್ಮನೆ ಬಿಡುವ ಪ್ರಶ್ನೆಯೇ ಇಲ್ಲ. ಅವರಿಗೆ ಸರಿಯಾದ ಉತ್ತರವನ್ನು ಕೊಡುತ್ತೇವೆ. ಕರಾವಳಿ ಜನರ ತಾಳ್ಮೆಯನ್ನು ಪರೀಕ್ಷೆ ಮಾಡಲು ಹೋಗಬೇಡಿ ಎಂದು ಎಚ್ಚರಿಕೆ ನೀಡಿದರು.
ಹಿಂದಿನ ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿಯಾಗಿದ್ದ ಸಸಿಕಾಂತ್ ಸೆಂಥಿಲ್ ಅವರು ಚುನಾವಣೆ ಸಂದರ್ಭದಲ್ಲಿ ಹಿಂದೂ ಸಮಾಜದ ಒಗ್ಗಟ್ಟು ಒಡೆಯಲು ಕೆಲಸ ಮಾಡಿದ್ದರು. ಕಮ್ಯುನಿಸ್ಟ್ ಮನಸ್ಥಿತಿ ಇರುವ ಕೆಲವೊಂದು ಅಧಿಕಾರಿಗಳು ಹಿಂದೂ ಸಮಾಜವನ್ನು ಒಡೆಯುವ ಕೆಲಸ ಮಾಡುತ್ತಿದ್ದಾರೆ. ಹಿಂದೂ ಸಮಾಜದ ಒಗ್ಗಟ್ಟನ್ನು ಒಡೆಯಲು ಯಾರಿಂದಲೂ ಸಾಧ್ಯವಿಲ್ಲ. ಸೆಂಥಿಲ್ ಅವರನ್ನು ತನಿಖೆಗೆ ಒಳಪಡಿಸಿ, ಸತ್ಯಾಂಶವನ್ನು ಹೊರತೆಗೆಯುವ ಕೆಲಸ ಮಾಡಬೇಕು. ಧರ್ಮಸ್ಥಳ ಹಿಂದೂಗಳ ಧಾರ್ಮಿಕ ಶ್ರದ್ಧಾಕೇಂದ್ರ ವಿರುದ್ಧ ಮಾತನಾಡುವವರ ವಿರುದ್ಧ ಕ್ರಮಕೈಗೊಳ್ಳಬೇಕು. ಹೋರಾಟಗಾರರು ರೂಪರೇಷೆಗಳನ್ನು ಅರಿತುಕೊಂಡು ತಮ್ಮ ಹೋರಾಟ ಮಾಡಬೇಕು ಎಂದರು.
ಕುಂದಾಪುರ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮಾತನಾಡಿ, ಎಸ್ ಐಟಿ ತನಿಖೆಯ ದಿಕ್ಕನ್ನು ತಪ್ಪಿಸಲು ಕೆಲವೊಂದು ಶಕ್ತಿಗಳು ಪ್ರಯತ್ನಿಸುತ್ತಿವೆ. ತನಿಖೆಯಾಗಿ ಸತ್ಯಾಂಶ ಹೊರಬರಲಿ. ಆದರೆ ಧರ್ಮಸ್ಥಳ ಕ್ಷೇತ್ರಕ್ಕೆ ಮಸಿ ಬಳಿಯುವ ಕೆಲಸವನ್ನು ಯಾರು ಮಾಡಬಾರದು. ಧರ್ಮಾಧಿಕಾರಿಗಳ ವಿರುದ್ಧ ನಡೆಯುತ್ತಿರುವ ಅಪಪ್ರಚಾರದ ವಿರುದ್ಧ ಹಿಂದೂಗಳು ಒಗ್ಗಟ್ಟಿಂದ ಹೋರಾಟ ನಡೆಸಬೇಕು ಎಂದು ಕರೆನೀಡಿದರು.
ಶ್ರೀ ಧರ್ಮಸ್ಥಳ ಭಕ್ತಾಭಿಮಾನಿ ವೇದಿಕೆಯ ಜಿಲ್ಲಾಧ್ಯಕ್ಷ ನೀರೆ ಕೃಷ್ಣ ಶೆಟ್ಟಿ, ಮಾಜಿ ಶಾಸಕ ರಘುಪತಿ ಭಟ್, ಮುಖಂಡರಾದ ಬೈಕಾಡಿ ಸುಪ್ರಸಾದ್ ಶೆಟ್ಟಿ, ಮಹೇಶ್ ಠಾಕೂರ್, ನವೀನ್ ಶೆಟ್ಟಿ ಕುತ್ಯಾರು ಮೊದಲಾದವರುಇದ್ದರು.

