'ಉಡುಪಿ ಉಚ್ಚಿಲ ದಸರಾ' ವೈಭವಕ್ಕೆ ಅದ್ದೂರಿ ಚಾಲನೆ; ದಸರಾ-ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟಿಸಿದ ರೋಹಿಣಿ ಸಿಂಧೂರಿ
ಫೋಟೋ: ಸಚಿನ್ ಉಚ್ಚಿಲ
ಉಚ್ಚಿಲ: ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ನಡೆಯುತ್ತಿರುವ ವೈಭವಪೂರಿತ 'ಉಡುಪಿ ಉಚ್ಚಿಲ ದಸರಾ-2025'ಕ್ಕೆ ಸೋಮವಾರ ಅದ್ದೂರಿಯ ಚಾಲನೆ ನೀಡಲಾಯಿತು.
ನಾಡೋಜ ಜಿ.ಶಂಕರ್ ಅವರ ಸಾರಥ್ಯದಲ್ಲಿ ಅ.2ರವರೆಗೆ ಶ್ರೀ ಕ್ಷೇತ್ರದ ಶ್ರೀಮತಿ ಶಾಲಿನಿ ಡಾ.ಜಿ.ಶಂಕರ್ ಸಭಾಂಗಣದಲ್ಲಿ ನಡೆಯಲಿರುವ ಈ 4ನೇ ವರ್ಷದ ದಸರಾ ಮಹೋತ್ಸವವು ಶ್ರೀ ಮಹಾಲಕ್ಷ್ಮೀ ದೇವಸ್ಥಾನ ಶ್ರೀಕ್ಷೇತ್ರ ಉಚ್ಚಿಲ, ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘ ಉಚ್ಚಿಲ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಕಾರದೊಂದಿಗೆ ಬಹಳಷ್ಟು ವಿಜೃಂಭಣೆಯಿಂದ ಕಂಗೊಳಿಸಲಿದೆ.
'ಉಡುಪಿ ಉಚ್ಚಿಲ ದಸರಾ-2025' ಹಾಗು ಸಾಂಸ್ಕೃತಿಕ ಕಾರ್ಯಕ್ರಮವನ್ನು ಉಡುಪಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ರೋಹಿಣಿ ಸಿಂಧೂರಿ ದೀಪ ಬೆಳಗಿಸುವ ಮೂಲಕ ವಿದ್ಯುಕ್ತವಾಗಿ ಉದ್ಘಾಟಿಸಿದರು.
ಬಳಿಕ ಮಾತನಾಡಿದ ಅವರು, ಮೈಸೂರು ದಸರಾ ಮಾದರಿಯಲ್ಲಿಯೇ ವಿನೂತನವಾಗಿ ಉಚ್ಚಿಲ ದಸರಾ ನಡೆಯುತ್ತಿರುವುದನ್ನು ನೋಡಿದರೆ ಸಂತಸ ಆಗುತ್ತಿದೆ. ಇದರ ರೂವಾರಿ ಜಿ.ಶಂಕರ್ ಅವರ ಶ್ರಮ ಇದರ ಹಿಂದಿದೆ. ಉಡುಪಿ ಜಿಲ್ಲೆಯಲ್ಲಿ ಈ ದಸರಾವನ್ನು ಇನ್ನು ಹೆಚ್ಚಿನ ವಿಜೃಂಭಣೆಯಿಂದ ಮಾಡಬೇಕೆಂಬ ಕಲ್ಪನೆ ಅವರಲ್ಲಿದೆ. ಅದಕ್ಕೆ ಬೇಕಾದ ಎಲ್ಲ ರೀತಿಯ ಸಹಾಯ-ಸಹಕಾರ ನೀಡಲು ನಾವು ಸಿದ್ಧರಾಗಿದ್ದೇವೆ ಎಂದು ಭರವಸೆ ನೀಡಿದರು.
ಮುಖ್ಯ ಅತಿಗಳಾಗಿ ಭಾಗವಹಿಸಿದ ಕಾಪು ಶಾಸಕ ಸುರೇಶ್ ಶೆಟ್ಟಿ ಗುರ್ಮೆ, ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ, ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ., ಮಾತನಾಡಿ, ಈ ಬಾರಿಯ ದಸರಾ ಉತ್ತಮವಾಗಿ ಮೂಡಿಬರಲಿ ಎಂದು ಶುಭ ಹಾರೈಸಿದರು.
ಸಮಾರಂಭದಲ್ಲಿ ಉಡುಪಿ ಎಸ್ಪಿ ಹರಿರಾಮ್ ಶಂಕರ್, ಉಡುಪಿ ಶಾಸಕ ಯಶ್ಪಾಲ್ ಸುವರ್ಣ, ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ಗೌರವ ಸಲಹೆಗಾರರಾದ ನಾಡೋಜ ಡಾ.ಜಿ. ಶಂಕರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ, ಹೈದರಾಬಾದಿನ ಉದ್ಯಮಿ ಕೃಷ್ಣಮೂರ್ತಿ ಮಂಜಾರಕಟ್ಟೆ, ಅಂಜಲಿ ವಿಜಯ್, ದೇವಳದ ಪ್ರಧಾನ ಅರ್ಚಕ ರಾಘವೇಂದ್ರ ಉಪಾಧ್ಯಾಯ, ಮಲ್ಪೆ ಮೀನುಗಾರರ ಸಂಘದ ಅಧ್ಯಕ್ಷ ನಾರಾಯಣ ಕರ್ಕೇರ, ಮಹಿಳಾ ಸಂಚಾಲಕಿ ಸಂಧ್ಯಾ ದೀಪ ಸುನೀಲ್, ಸತೀಶ್ ಅಮೀನ್ ಬೆಣ್ಣೆಕುದ್ರು, ಉದ್ಯಮಿ ಸಾಧು ಸಾಲ್ಯಾನ್, ಉಚ್ಚಿಲ ದಸರಾ ಉತ್ಸವ ಸಮಿತಿ ಅಧ್ಯಕ್ಷ ವಿನಯ ಕರ್ಕೇರ, ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ಉಪಾಧ್ಯಕ್ಷರಾದ ಮೋಹನ್ ಬೇಂಗ್ರೆ, ಸುಗುಣ ಕರ್ಕೇರ, ಗಿರಿಧರ್ ಕೋಟ್ಯಾನ್, ದಿವಾಕರ ಹೆಜಮಾಡಿ, ಶಿವಕುಮಾರ್ ಶ್ರೀಯಾನ್, ವೆಂಕಟೇಶ್ ಕುಂದರ್, ಕೋಶಾಧಿಕಾರಿ ರತ್ನಾಕರ ಸಾಲ್ಯಾನ್, ಮಹಿಳಾ ಸಂಘದ ಅಧ್ಯಕ್ಷೆ ಉಷಾ ರಾಣಿ, ಅರುಣ್ ಕೋಟ್ಯಾನ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಜಯ ಸಿ.ಸುವರ್ಣ ಬೆಳ್ಳಂಪಳ್ಳಿ ಅವರು ಗಣ್ಯರನ್ನು ಸ್ವಾಗತಿಸಿದರು. ಕಾರ್ಯದರ್ಶಿ ಶರಣ ಕುಮಾರ್ ಮಟ್ಟು ವಂದಿಸಿದರು. ದೇವಳದ ಪ್ರಧಾನ ವ್ಯವಸ್ಥಾಪಕ ಸತೀಶ್ ಅಮೀನ್ ಪಡುಕರೆ ಅವರು ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ನಿರೂಪಿದರು.
ಕಲಾಕೃತಿ, ವಸ್ತು ಪ್ರದರ್ಶನವನ್ನು ಉದ್ಘಾಟಿಸಿದ ಕಾಪು ಶಾಸಕ ಸುರೇಶ್ ಶೆಟ್ಟಿ ಗುರ್ಮೆ- ಉಡುಪಿ ಎಸ್ಪಿ ಹರಿರಾಮ್ ಶಂಕರ್
ದಸರಾ ಮಹೋತ್ಸವದ ಪ್ರಯುಕ್ತ ದೇವಸ್ಥಾನದ ಆವರಣದಲ್ಲಿ ಆಯೋಜಿಸಲಾಗಿರುವ ಫಲಪುಷ್ಪ ಪ್ರದರ್ಶನ , ಗುಡಿಕೈಗಾರಿಕೆ ಪ್ರಾತ್ಯಕ್ಷಿಕೆ, ಸಮುದ್ರದ ಜೀವಂತ ಮೀನು ಹಾಗೂ ಹೊಳೆ ಮೀನುಗಳ ಪ್ರದರ್ಶನ, ಮರಳು ಕಲಾಕೃತಿ, ಕುಬ್ಜ ಸಹೋದರರ ಕಲಾಕೃತಿ, ಜನಜಾಗೃತಿ ಕಲಾಕೃತಿ, ವಿಶೇಷ ಶಾಲೆಯ ಮಕ್ಕಳ ಕಲಾಕೃತಿ ಸೇರಿದಂತೆ ನಾನಾ ಪ್ರದರ್ಶನಗಳನ್ನು ಕಾಪು ಶಾಸಕ ಸುರೇಶ್ ಶೆಟ್ಟಿ ಗುರ್ಮೆ- ಉಡುಪಿ ಜಿಲ್ಲಾ ಎಸ್ಪಿ ಹರಿರಾಮ್ ಶಂಕರ್ ಜಂಟಿಯಾಗಿ ಉದ್ಘಾಟಿಸಿದರು.
ಬೆಳಗ್ಗೆ ನವದುರ್ಗೆಯರು ಮತ್ತು ಶ್ರೀ ಶಾರದಾ ಮಾತೆಯ ವಿಗ್ರಹಗಳನ್ನು ಕ್ಷೇತ್ರದ ತಂತ್ರಿ ಕುಕ್ಕಿಕಟ್ಟೆ ರಾಘವೇಂದ್ರ ತಂತ್ರಿ ಹಾಗೂ ಪ್ರಧಾನ ಪುರೋಹಿತ ರಾಘವೇಂದ್ರ ಉಪಾಧ್ಯಾಯರ ನೇತೃತ್ವದಲ್ಲಿ ಪ್ರತಿಷ್ಠಾಪಿಸಲಾಯಿತು.



















