ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ರಿಂದ ಡಾ.ಶೇಖ್ ವಾಹಿದ್ಗೆ 'ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ' ಪ್ರದಾನ
ಉಡುಪಿ: ನಿರಂತರವಾಗಿ ಸಮಾಜ ಸೇವೆಯಲ್ಲಿ ತನ್ನನ್ನು ತೊಡಗಿಸಿಕೊಂಡಿರುವ ಡಾ.ಶೇಖ್ ವಾಹಿದ್ ದಾವೂದ್ ಅವರು ಸಮಾಜಕ್ಕೆ ನೀಡುತ್ತಿರುವ ಕೊಡುಗೆಯನ್ನು ಗುರುತಿಸಿ ಶನಿವಾರ ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಉಡುಪಿಯಲ್ಲಿ ಶನಿವಾರ ನಡೆದ 70ನೇ ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಿದರು.
ಕಳೆದ ಹಲವು ವರ್ಷಗಳಿಂದ ಸಾಮಾಜಿಕ ಕಾರ್ಯದಲ್ಲಿ ತೊಡಗಿಕೊಂಡಿರುವ ವಾಹಿದ್ರವರು ಪ್ರಸಕ್ತ ಕೆಪಿಸಿಸಿ ಅಲ್ಪಸಂಖ್ಯಾತ ಘಟಕದ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ.
ಸಮಾಜ ಸೇವೆ ಕ್ಷೇತ್ರದಲ್ಲಿ ನೀಡಿರುವ ಅಮೂಲ್ಯ ಕೊಡುಗೆಯನ್ನು ಗುರುತಿಸಿ ಅವರಿಗೆ ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ನೀಡಲಾಗಿದೆ.
ಉಡುಪಿ ಅಲ್ಲದೆ, ರಾಜ್ಯದ ಹಾಗು ಗಲ್ಫಿನ ಹಲವಾರು ಸಂಘ-ಸಂಸ್ಥೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು ಸಮಾಜಮುಖಿ ಚಟುವಟಿಕೆಗಳನ್ನು ನಿರತರಾಗಿರುವ ಡಾ. ವಾಹಿದ್ ಅವರು, ಶಿಕ್ಷಣ, ಆರೋಗ್ಯ, ಪರಿಸರ ಮತ್ತು ಮಾನವೀಯ ಸೇವೆ ಕ್ಷೇತ್ರಗಳಲ್ಲಿ ತಮ್ಮ ಶ್ರಮ ಹಾಗೂ ನಿಸ್ವಾರ್ಥ ಸೇವೆಯಿಂದ ಸಮಾಜದಲ್ಲಿ ಆದರ್ಶ ವ್ಯಕ್ತಿಯಾಗಿ ಗುರುತಿಸಿಕೊಂಡಿದ್ದಾರೆ.
ಸಮಾಜದ ಹಿತದೃಷ್ಟಿಯಿಂದ ವಿವಿಧ ಯೋಜನೆಗಳನ್ನು ಕೈಗೊಂಡು ಜನಜಾಗೃತಿ ಮೂಡಿಸುವ ಕಾರ್ಯಗಳಲ್ಲಿ ತೊಡಗಿಸಿಕೊಂಡಿರುವ ಅವರ ಸೇವೆಯು ಇತರರಿಗೆ ಮಾದರಿಯಾಗಿದೆ.
ಸಮಾರಂಭದಲ್ಲಿ xಉಡುಪಿ ಶಾಸಕ ಯಶ್ ಪಾಲ್ ಸುವರ್ಣ, ಕರಾವಳಿ ಅಭಿವೃದ್ಧಿ ಮಂಡಳಿ ಅಧ್ಯಕ್ಷರಾದ ಎಂ.ಎ.ಗಫೂರ್, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ದಿನಕರ ಹೇರೂರು, ಉಡುಪಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಅಶೋಕ್ ಕುಮಾರ್ ಕೊಡವೂರು, ಜಿಲ್ಲಾಧಿಕಾರಿ ಟಿ.ಕೆ.ಸ್ವರೂಪ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್, ಜಿಲ್ಲಾ ಪಂಚಾಯತ್ ಪ್ರತೀಕ್ ಬಾಯಲ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.




