ಅಕ್ಷತಾ ಪೂಜಾರಿಗೆ ನ್ಯಾಯ ಸಿಗದಿದ್ದರೆ ನಮ್ಮ ಹೋರಾಟವನ್ನು ರಾಜ್ಯಮಟ್ಟಕ್ಕೆ ಕೊಂಡೊಯ್ಯುತ್ತೇವೆ: ಪ್ರವೀಣ್ ಎಂ. ಪೂಜಾರಿ
ಉಡುಪಿ: ಅಕ್ಷತಾ ಪೂಜಾರಿಗೆ ನ್ಯಾಯ ಸಿಗಬೇಕೆಂಬ ನಿಟ್ಟಿನಲ್ಲಿ ನಾವು ಕಾನೂನು ಬದ್ಧವಾಗಿ ಪ್ರತಿಭಟನೆ ಮಾಡುತ್ತಿದ್ದೇವೆ. ಆದರೆ ಪೊಲೀಸರು ನಮ್ಮ ಹೋರಾಟವನ್ನು ಹತ್ತಿಕ್ಕುವ ಕೆಲಸ ಮಾಡುತ್ತಿದ್ದಾರೆ ಎಂದು ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆ ಅಧ್ಯಕ್ಷ ಪ್ರವೀಣ್ ಎಂ. ಪೂಜಾರಿ ದೂರಿದರು.
ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪೊಲೀಸ್ ದೌರ್ಜನ್ಯ ಖಂಡಿಸಿ ಶಾಂತಿಯುತವಾಗಿ ಪ್ರತಿಭಟನೆ ನಡೆಸಿದರೂ ನಮ್ಮ ಮೇಲೆ ಸುಳ್ಳು ಕೇಸ್ ದಾಖಲಿಸಿದ್ದಾರೆ. ಹೀಗಾಗಿ ನಮ್ಮ ಹೋರಾಟವನ್ನು ರಾಜ್ಯಮಟ್ಟಕ್ಕೆ ಕೊಂಡೊಯ್ಯಲು ತೀರ್ಮಾನಿಸಿದ್ದೇವೆ ಎಂದರು.
ಬ್ರಹ್ಮಾವರ ಪೊಲೀಸ್ ಠಾಣೆಯ ಮುಂಭಾಗದಲ್ಲಿ ನಾವು ನಡೆಸಿದ ಪ್ರತಿಭಟನೆಗೆ ಮಣಿದು ಮೂರು ಮಂದಿ ಪೊಲೀಸರ ವಿರುದ್ಧ ಎಫ್ಐಆರ್ ದಾಖಲಿಸಿಕೊಂಡಿದ್ದರೂ ಅವರ ವಿರುದ್ಧ ಇನ್ನೂ ತನಿಖೆಯೇ ಆರಂಭ ಆಗಿಲ್ಲ. ತನಿಖಾಧಿಕಾರಿಯ ನೇಮಕವಾಗಿಲ್ಲ. ಇದರಿಂದ ನಮಗೆ ಸಂಶಯ ಉಂಟಾಗಿದೆ. ಹೀಗಾಗಿ ನಮ್ಮ ಹೋರಾಟವನ್ನು ರಾಜ್ಯಮಟ್ಟಕ್ಕೆ ತೆಗೆದುಕೊಂಡು ಹೋಗಲು ನಿರ್ಧರಿಸಿದ್ದೇವೆ ಎಂದರು.
ಅಕ್ಷತಾ ಪೂಜಾರಿ ನೀಡಿದ ದೂರಿನಂತೆ ಆರೋಪಿಗಳ ವಿರುದ್ಧ ದೂರು ದಾಖಲಾಗಿದ್ದರೂ, ಈವರೆಗೂ ತಪ್ಪಿತಸ್ಥರ ವಿರುದ್ಧ ಯಾವುದೇ ರೀತಿಯ ಕ್ರಮ ಆಗಿಲ್ಲ. ಪೊಲೀಸರ ನಡೆಯ ಬಗ್ಗೆ ಸಂಶಯ ಉಂಟಾಗುತ್ತಿದೆ. ಆದ್ದರಿಂದ ಪೊಲೀಸ್ ವರಿಷ್ಠಾಧಿಕಾರಿಗಳು ತಕ್ಷಣವೇ ನಿಷ್ಪಕ್ಷಪಾತ ಹಾಗೂ ನ್ಯಾಯಸಮ್ಮತ ತನಿಖೆ ಮಾಡಿ ಅಕ್ಷತಾ ಪೂಜಾರಿ ವಿರುದ್ಧ ದಾಖಲಾಗಿರುವ ಸುಳ್ಳು ಕೇಸ್ ಅನ್ನು ರದ್ದುಗೊಳಿಸಬೇಕು. ತಪ್ಪಿತಸ್ಥರ ವಿರುದ್ಧ ಕ್ರಮಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದರು.
ಸುದ್ದಿಗೋಷ್ಠಿಯಲ್ಲಿ ಪ್ರಮುಖರಾದ ಸುಧಾಕರ್ ಅಮೀನ್ ಪಾಂಗಾಳ, ರಾಜು ಪೂಜಾರಿ , ಮಹೇಶ್ ಕುಮಾರ್ ಉಪಸ್ಥಿತರಿದ್ದರು.