ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲಿನ ಹಲ್ಲೆಗೆ ಖಂಡನೆ; ವಿಶ್ವಹಿಂದೂ ಪರಿಷತ್ ಮತ್ತು ಬಜರಂಗ ದಳ ಉಡುಪಿ ಜಿಲ್ಲಾ ಘಟಕದಿಂದ ಪ್ರತಿಭಟನೆ
ಉಡುಪಿ: ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲಿನ ಹಲ್ಲೆ ಖಂಡಿಸಿ ವಿಶ್ವಹಿಂದೂ ಪರಿಷತ್ ಮತ್ತು ಬಜರಂಗ ದಳ ಉಡುಪಿ ಜಿಲ್ಲಾ ಘಟಕದ ವತಿಯಿಂದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಸಲಾಯಿತು.
ಮಣಿಪಾಲದ ಸಿಂಡಿಕೇಟ್ ಸರ್ಕಲ್ ನಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪಾದಯಾತ್ರೆ ಮೂಲಕ ಪಿಎಚ್‌ಪಿ, ಬಜರಂಗದಳದ ಕಾರ್ಯಕರ್ತರು ಸಾಗಿಬಂದರು. ಬಾಂಗ್ಲಾದೇಶದಲ್ಲಿ ಇತ್ತೀಚೆಗೆ ಅಲ್ಲಿನ ಹಿಂದೂಗಳ ಮೇಲೆ ದೌರ್ಜನ್ಯ ಹೆಚ್ಚಾಗುತ್ತಿದೆ. ದೀಪುಚಂದ್ರದಾಸ್ ಎಂಬ ಯುವಕ ನನ್ನು ಅಮಾನುಷವಾಗಿ ಕೊಲೆ ಮಾಡಲಾಗಿದೆ. ಬಾಂಗ್ಲಾದಲ್ಲಿ ಹಿಂದೂಗಳ ಮೇಲೆ ನಡೆಯುತ್ತಿರುವ ಹಿಂಸಾಚಾರ ನಿಲ್ಲಬೇಕು. ಈ ನಿಟ್ಟಿನಲ್ಲಿ ಭಾರತ ಸರಕಾರವೂ ಅಗತ್ಯ ಕ್ರಮ ತೆಗೆದುಕೊಳ್ಳಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.
ಸಭಾ ಕಾರ್ಯಕ್ರಮದಲ್ಲಿ ಗುರುಪುರ ವಜ್ರದೇಹಿ ಮಠದ ಶ್ರೀ ರಾಜಶೇಖರಾನಂದ ಸ್ವಾಮೀಜಿ ಮಾತನಾಡಿ, ಬಾಂಗ್ಲಾದ ಹಿಂದೂಗಳಿಗೆ ಅಗತ್ಯ ರಕ್ಷಣೆ ಆಗಬೇಕು. ಅಲ್ಲಿನ ಅಲ್ಪಸಂಖ್ಯಾತರ ರಕ್ಷಣೆ ಅಲ್ಲಿನ ಸರಕಾರದ ಹೊಣೆ. ಈ ಕಾರ್ಯವನ್ನು ಅಗತ್ಯ ನೆಲೆಯಲ್ಲಿ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಪ್ರಾಂತ್ಯ ಗೋ ರಕ್ಷ ಪ್ರಮುಖ್ ಸುನಿಲ್ ಕೆ.ಆರ್. ಮಾತನಾಡಿದರು. ಶಾಸಕ ಯಶ್‌ಪಾಲ್ ಸುವರ್ಣ, ಪ್ರಮುಖರಾದ ದಿನೇಶ್ ಮೆಂಡನ್, ಅಜಯ್ ಪಿ. ಶೆಟ್ಟಿ ಮಟ್ಟಾರು ರತ್ನಾಕರ ಹೆಗ್ಡೆ, ವಿಜಯ ಕೊಡವೂರು, ದಿಲೇಶ್ ಶೆಟ್ಟಿ ಉಪಸ್ಥಿತರಿದ್ದರು.