ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ‘ಸನ್ಮತಿ’ ಪತ್ರಿಕೆ ಬಿಡುಗಡೆಗೊಳಿಸಿದ ಎಂ.ಎ. ಗಫೂರ್

ಉಡುಪಿ: ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಉಡುಪಿ ಪತ್ರಿಕಾ ಭವನ ಸಮಿತಿಯ ಸಹಯೋಗದಲ್ಲಿ ಸಂಘದ ಮಾಸಿಕ ಪತ್ರಿಕೆ ‘ಸನ್ಮತಿ’ ಮಾರ್ಚ್ ತಿಂಗಳ ಸಂಚಿಕೆಯ ಬಿಡುಗಡೆ ಹಾಗೂ 2025–28ನೇ ಸಾಲಿನ ಗಣ್ಯರೊಂದಿಗೆ ಸಂವಾದ ‘ತಿಂಗಳ ಅಂಗಳ’ ಕಾರ್ಯಕ್ರಮದ ಉದ್ಘಾಟನೆ ಗುರುವಾರ ಉಡುಪಿ ಪತ್ರಿಕಾ ಭವನದಲ್ಲಿ ನಡೆಯಿತು.



ಪತ್ರಿಕೆ ಬಿಡುಗಡೆಗೊಳಿಸಿ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಕರಾವಳಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಎಂ.ಎ. ಗಫೂರ್, ಕೇರಳದ ಕೊಚ್ಚಿ ವಾಟರ್ ಮೆಟ್ರೋ ಮಾದರಿಯನ್ನು ಆಧರಿಸಿ ಕರ್ನಾಟಕದ ಕರಾವಳಿ ನಗರಗಳಲ್ಲಿ ಸಮಾನ ವ್ಯವಸ್ಥೆಗಳನ್ನು ಅಭಿವೃದ್ಧಿಪಡಿಸುವ ಪ್ರಸ್ತಾವನೆ ಇದ್ದು, ಈ ಸಂಬಂಧ ಕೊಚ್ಚಿ ವಾಟರ್ ಮೆಟ್ರೋ ತಂಡವು ಕರಾವಳಿಯ ಮೂರು ಜಿಲ್ಲೆಗಳಿಗೆ ಭೇಟಿ ನೀಡಿ ಅಧ್ಯಯನ ನಡೆಸಿದೆ. ತಂಡವು ಶೀಘ್ರವೇ ಪ್ರಾಥಮಿಕ ವರದಿ ನೀಡುವ ನಿರೀಕ್ಷೆ ಇದೆ ಎಂದರು.

ಈ ಯೋಜನೆ ಸಂಬಂಧ ಮುಂದಿನ ಹಂತದಲ್ಲಿ ತಾಂತ್ರಿಕವಾಗಿ ಟ್ರಾಫಿಕ್ ಸರ್ವೆ ನಡೆಸಿ, ವಿಸ್ತೃತ ಯೋಜನಾ ವರದಿ ತಯಾರಿಸಲಾಗುವುದು. ಈ ಕುರಿತು ಮೂರು ಜಿಲ್ಲೆಯ ಜಿಲ್ಲಾಧಿಕಾರಿಗಳೊಂದಿಗೆ ಸತತ ಸಂಪರ್ಕದಲ್ಲಿದ್ದು, ಯೋಜನೆ ಜಾರಿಗೆ ತರುವ ನಿಟ್ಟಿನಲ್ಲಿ ಪ್ರಯತ್ನಗಳನ್ನು ಮಾಡಲಾಗುತ್ತಿದೆ ಎಂದು ತಿಳಿಸಿದರು.

ಉಡಾನ್ ಯೋಜನೆಯಡಿ ಮಂಗಳೂರು–ಮರವಂತೆ–ಗೋವಾ ಕರಾವಳಿ, ಮಂಗಳೂರು–ಕೊಚ್ಚಿ ಮತ್ತು ಮಂಗಳೂರು–ಮೈಸೂರು (ಕಬಿನಿ ಪ್ರದೇಶ) ಸಂಪರ್ಕಿಸುವ ವಾಟರ್ ಏರೋಡ್ರೋಮ್‌ಗಳಿಗೆ ಅನುಮೋದನೆ ನೀಡಲಾಗಿದೆ. ಭಾರೀ ವಾಹನಗಳ ಸಂಚಾರದಿಂದ ಉಂಟಾಗುವ ನಗರ ಸಂಚಾರ ದಟ್ಟಣೆ ಕಡಿಮೆ ಮಾಡಲು ಟ್ರಕ್‌ಗಳನ್ನು ನದಿ/ಸಮುದ್ರ ಮಾರ್ಗದ ಮೂಲಕ ಸಾಗಿಸುವ ರೋ-ರೋ ಫೆರ್ರಿ ಸೇವೆಗಳನ್ನು ಪರಿಚಯಿಸುವ ಯೋಜನೆ ಇದೆ ಎಂದು ಅವರು ಮಾಹಿತಿ ನೀಡಿದರು.

ಕರಾವಳಿ ಅಭಿವೃದ್ಧಿ ಮಂಡಳಿಯು ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಸಮಗ್ರ ಅಭಿವೃದ್ಧಿಗಾಗಿ ವಿವಿಧ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಯೋಜನೆಗಳನ್ನು ಸಮನ್ವಯಗೊಳಿಸುವ ನಿಟ್ಟಿನಲ್ಲಿ ರೂಪುರೇಷೆ ಸಿದ್ಧಪಡಿಸುತ್ತಿದೆ. ಬಹುಸಂಪರ್ಕ ವ್ಯವಸ್ಥೆ, ಪ್ರವಾಸೋದ್ಯಮ, ಮೀನುಗಾರಿಕೆ, ಕೈಗಾರಿಕೆ ಹಾಗೂ ಪರಿಸರಕ್ಕೆ ಸಂಬಂಧಿಸಿದ ಯೋಜನೆಗಳನ್ನು ರೂಪಿಸಲಾಗುತ್ತಿದೆ ಎಂದು ಅವರು ಹೇಳಿದರು.

ಕರಾವಳಿಯ ಮೂರು ಜಿಲ್ಲೆಗಳಲ್ಲಿ ರಾಷ್ಟ್ರಿಯ ಹೆದ್ದಾರಿಗೆ ಪರ್ಯಾಯವಾಗಿ ರಸ್ತೆ ನಿರ್ಮಿಸುವ ಯೋಜನೆ ರೂಪಿಸಲಾಗಿದ್ದು, ಇದನ್ನು ರಾಷ್ಟ್ರೀಯ ಹೆದ್ದಾರಿ ಇಲಾಖೆಯ ಮೂಲಕ ನಡೆಸಲು ಮಾಸ್ಟರ್ ಪ್ಲಾನ್ ಸಿದ್ಧಪಡಿಸಲಾಗಿದೆ ಎಂದು ಎಂ.ಎ. ಗಫೂರ್ ತಿಳಿಸಿದರು.

ಮಂಡಳಿಗೆ 100–500 ಕೋಟಿ ರೂ. ವಿಶೇಷ ಅನುದಾನ ನೀಡುವಂತೆ ಮುಖ್ಯಮಂತ್ರಿ ಅವರಿಗೆ ಪ್ರಸ್ತಾಪ ಸಲ್ಲಿಸಲಾಗಿದೆ. ಕರಾವಳಿ ಅಭಿವೃದ್ಧಿ ಮಂಡಳಿ ಅಧ್ಯಕ್ಷನಾಗಿ ಅಧಿಕಾರ ಸ್ವೀಕರಿಸುವ ಸಂದರ್ಭದಲ್ಲಿ ಮಂಡಳಿಯಲ್ಲಿದ್ದ 10 ಕೋಟಿ ರೂ. ಅನುದಾನವನ್ನು ಸಮರ್ಪಕವಾಗಿ ವಿನಿಯೋಗಿಸಲಾಗಿದೆ. ಈ ಬಾರಿಯ ಬಜೆಟ್‌ನಲ್ಲಿ ಮತ್ತೆ 10 ಕೋಟಿ ರೂ. ಅನುದಾನ ಒದಗಿಸಲಾಗಿದೆ ಎಂದು ಅವರು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಘದ ಉಡುಪಿ ಜಿಲ್ಲಾ ಅಧ್ಯಕ್ಷ ಸುಬ್ರಹ್ಮಣ್ಯ ಜಿ. ಕುರ್ಯ ವಹಿಸಿದ್ದರು. ರಾಜ್ಯ ಸಮಿತಿ ಸದಸ್ಯ ಅಸ್ಟೋ ಮೋಹನ್ ಉಪಸ್ಥಿತರಿದ್ದರು. ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ನಝೀರ್ ಪೊಲ್ಯ ಸ್ವಾಗತಿಸಿದರು. ಪತ್ರಿಕಾ ಭವನ ಸಮಿತಿಯ ನಿಕಟಪೂರ್ವ ಸಂಚಾಲಕ ಅಜಿತ್ ಆರಾಡಿ ವಂದಿಸಿದರು. ಪತ್ರಕರ್ತ ರಹೀಂ ಉಜಿರೆ ಕಾರ್ಯಕ್ರಮ ನಿರೂಪಿಸಿದರು.