ಬೆಂಗಳೂರಿನ ಶಿವಾಜಿನಗರ ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಕುಸಿದು ಏಳು ಜನ ಮೃತ್ಯು; ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂ ಪರಿಹಾರ ಘೋಷಣೆ ಮಾಡಿದ ಸಿಎಂ

ಬೆಂಗಳೂರು: ಬೆಂಗಳೂರಿನಲ್ಲಿ ಸಂಜೆ ಅಲಿಕಲ್ಲು ಸಹಿತ ಧಾರಾಕಾರ ಮಳೆಯಾಗಿದೆ. ಇನ್ನು ಮಳೆಯಿಂದಾಗಿ ಶಿವಾಜಿನಗರ ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಕುಸಿದು ಏಳು ಜನ ಸಾವನ್ನಪ್ಪಿದ್ದು, ಘಟನಾ ಸ್ಥಳಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೀಡಿ ಪರಿಶೀಲನೆ ನಡೆಸಿದರು. ನಂತರ ಆಸ್ಪತ್ರೆಗೆ ತೆರಳಿ ಗಾಯಾಳುಗಳ ಆರೋಗ್ಯ ವಿಚಾರಿಸಿದ ಸಿದ್ದರಾಮಯ್ಯ ಮೃತರ ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರ ಘೋಷಿಸಿದರು.

ಆಸ್ಪತ್ರೆಯ ಕಾಂಪೌಂಡ್ ಪಕ್ಕದಲ್ಲಿ ಸಣ್ಣಪುಟ್ಟ ಅಂಗಡಿ ಮೂಲಕ ವ್ಯಾಪಾರಿ ಮಾಡುತ್ತಿದ್ದ ಬೀದಿಬದಿ ವ್ಯಾಪಾರಿಗಳು ಮತ್ತು ಮಕ್ಕಳು ಮೇಲೆ ಕಾಂಪೌಂಡ್ ಗೋಡೆ ಕುಸಿದಿದೆ. ಇಬ್ಬರೂ ಮಕ್ಕಳು ಸೇರಿ ಏಳು ಜನ ಸಾವನ್ನಪ್ಪಿದ್ದು ತನಿಖೆ ಮಾಡಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಘಟನೆಯಲ್ಲಿ 7 ಮಂದಿ ಗಾಯಗೊಂಡಿದ್ದು ಅವರಿಗೆ ಬೌರಿಂಗ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಪೊಲೀಸರು ಮತ್ತು ತುರ್ತು ಸೇವಾ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಜೆಸಿಬಿ ಸಹಾಯದೊಂದಿಗೆ ಮೃತದೇಹಗಳನ್ನು ಮತ್ತು ಗಾಯಾಳುಗಳನ್ನು ಅವಶೇಷಗಳಿಂದ ಹೊರತೆಗೆಯಲಾಗಿದೆ.


ತಲಾ ರೂ.5 ಲಕ್ಷ ಪರಿಹಾರ: ಸಿದ್ದರಾಮಯ್ಯ 

ಬೆಂಗಳೂರಿನ ಶಿವಾಜಿನಗರದಲ್ಲಿ ಮಳೆಯಿಂದ ಕಾಂಪೌಂಡ್ ಕುಸಿದು 7 ಜನ ಸಾವನ್ನಪ್ಪಿದ್ದು ಅತ್ಯಂತ ನೋವಿನ ವಿಚಾರ. ಮೃತರ ಆತ್ಮಕ್ಕೆ ಚಿರಶಾಂತಿ ಲಭಿಸಲಿ‌ ಎಂದು ಪ್ರಾರ್ಥಿಸುತ್ತೇನೆ.

ಈ ಘೋರ ದುರಂತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಸರ್ಕಾರದಿಂದ ತಲಾ ರೂ.5 ಲಕ್ಷ ಪರಿಹಾರ ನೀಡಲಾಗುವುದು ಎಂದು  ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಸಂಜೆ ಘಟನಾ ಸ್ಥಳಕ್ಕೆ ಭೇಟಿ ನೀಡಿ, ಅಧಿಕಾರಿಗಳಿಂದ ಮಾಹಿತಿ ಪಡೆದು, ತುರ್ತು ಪರಿಹಾರ ಕಾರ್ಯ ಕೈಗೊಳ್ಳುವಂತೆ ಸೂಚನೆ ನೀಡಿದ್ದೇನೆ. ಬೌರಿಂಗ್ ಆಸ್ಪತ್ರೆಯ ತುರ್ತು ಚಿಕಿತ್ಸಾ ಘಟಕಕ್ಕೆ ಭೇಟಿನೀಡಿ, ಘಟನೆಯಲ್ಲಿ ಗಾಯಗೊಂಡವರ ಆರೋಗ್ಯ ವಿಚಾರಿಸಿದೆ. ಗಾಯಾಳುಗಳಿಗೆ ಉಚಿತ ಚಿಕಿತ್ಸೆ ನೀಡುವಂತೆ ಆರೋಗ್ಯಾಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ, ಎಲ್ಲರೂ ಆದಷ್ಟು ಶೀಘ್ರ ಗುಣಮುಖರಾಗಲಿ ಎಂದು ಹಾರೈಸುತ್ತೇನೆ ಎಂದಿದ್ದಾರೆ.