ಉಡುಪಿ: ಕೇಂದ್ರ ಸರ್ಕಾರದ ಜನವಿರೋಧಿ ನೀತಿಗಳನ್ನು ಖಂಡಿಸಿ ಜಿಲ್ಲಾ ಕಾಂಗ್ರೆಸ್ ಸಮಿತಿ ನೇತೃತ್ವದಲ್ಲಿ ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಯಿತು.
ಬ್ರಹ್ಮಗಿರಿಯ ಕಾಂಗ್ರೆಸ್ ಭವನದಿಂದ ಆರಂಭವಾದ ಪ್ರತಿಭಟನಾ ಮೆರವಣಿಗೆಯಲ್ಲಿ ನೂರಾರು ಕಾರ್ಯಕರ್ತರು ಭಾಗವಹಿಸಿದರು. ಎಸ್‌ಐಆರ್ ಪ್ರಕ್ರಿಯೆ, ನೀಟ್ ಹಗರಣ ಹಾಗೂ ಅಗತ್ಯ ವಸ್ತುಗಳ ಬೆಲೆ ಏರಿಕೆ ಸೇರಿದಂತೆ ಕೇಂದ್ರ ಸರ್ಕಾರದ ವಿವಿಧ ನೀತಿಗಳ ವಿರುದ್ಧ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.
ಕಾಂಗ್ರೆಸ್ ಭವನದಿಂದ ಹೊರಟ ಮೆರವಣಿಗೆಯು ಬ್ರಹ್ಮಗಿರಿ ವೃತ್ತದ ಮೂಲಕ ಅಜ್ಜರಕಾಡಿನ ಹುತಾತ್ಮ ಸ್ಮಾರಕದವರೆಗೆ ಸಾಗಿತು. ಅಲ್ಲಿ ಪ್ರತಿಭಟನೆ ನಡೆಸಿದ ಕಾರ್ಯಕರ್ತರು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ಬಳಿಕ ಜೋಡುಕಟ್ಟೆ ಬಳಿ ರಸ್ತೆ ತಡೆ ನಡೆಸಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.
ರಸ್ತೆ ತಡೆ ನಡೆಸಿದ ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದು ಬಳಿಕ ಬಿಡುಗಡೆ ಮಾಡಿದರು.
ಕರಾವಳಿ ಅಭಿವೃದ್ಧಿ ಮಂಡಳಿಯ ಎಂ.ಎ ಗಫೂರ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕೊಡವೂರು ,ಮಾಜಿ ಸಂಸದ ಜಯಪ್ರಕಾಶ್ ಹೆಗ್ಡೆ, ಮುಖಂಡರಾದ ಗೋಪಾಲ ಪೂಜಾರಿ, ಉದಯಕುಮಾರ್ ಶೆಟ್ಟಿ ಮುನಿಯಾಲು, ಪ್ರಸಾದ್ ರಾಜ್ ಕಾಂಚನ್, ಮಂಜುನಾಥ ಪೂಜಾರಿ ಹೆಬ್ರಿ, ರಮೇಶ್ ಕಾಂಚನ್, ಹರಿಪ್ರಸಾದ್ ರೈ, ಹರೀಶ್ ಕಿಣಿ, ಕಿಶನ್ ಹೆಗ್ಡೆ, ಕೆ. ಪಿ.ಸಿ ಸಿ ಅಲ್ಪಸಂಖ್ಯಾತರ ಘಟಕದ ರಾಜ್ಯ ಪ್ರದಾನ ಕಾರ್ಯದರ್ಶಿ ಡಾ.ಶೇಖ್ ವಹೀದ್, ಸೌರಭ್ ಬಲ್ಲಾಳ್, ಪ್ರಖ್ಯಾತ್ ಶೆಟ್ಟಿ, ಜ್ಯೋತಿ ಹೆಬ್ಬಾರ್ ಮೊದಲಾದವರು ಪ್ರತಿಭಟನೆಯಲ್ಲಿ ಪಾಲ್ಗೊಂಡರು.

