ದೆಹಲಿಯಲ್ಲಿ ಪ್ರತಿಭಟನಾಕಾರರ ಮೇಲೆ ನಡೆದ ಪೊಲೀಸ್ ಕ್ರಮ ಪ್ರಜಾಪ್ರಭುತ್ವ ವಿರೋಧಿ; ಪ್ರಧಾನಿ- ಕೇಂದ್ರ ಶಿಕ್ಷಣ ಸಚಿವರು ರಾಜೀನಾಮೆ ನೀಡಲಿ: ಎಂ.ಎ.ಗಫೂರ್

ಉಡುಪಿಯಲ್ಲಿ ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ, ರಸ್ತೆ ತಡೆ 

ಉಡುಪಿ: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣವನ್ನು ಖಂಡಿಸಿ ಹಾಗೂ ದೆಹಲಿಯಲ್ಲಿ ಪ್ರತಿಭಟನಾಕಾರರ ವಿರುದ್ಧ ಪೊಲೀಸರು ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿ ಉಡುಪಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಬುಧವಾರ ನಗರದ ಬ್ರಹ್ಮಗಿರಿ ವೃತ್ತದಲ್ಲಿ ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಲಾಯಿತು.

ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಪೊಲೀಸರು ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿದ ಪ್ರತಿಭಟನಾಕಾರರು, ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಕರಾವಳಿ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಎಂ.ಎ. ಗಫೂರ್, ದೆಹಲಿಯಲ್ಲಿ ಪ್ರತಿಭಟನಾಕಾರರ ಮೇಲೆ ನಡೆದ ಪೊಲೀಸ್ ಕ್ರಮವನ್ನು ಪ್ರಜಾಪ್ರಭುತ್ವ ವಿರೋಧಿ ನಡೆ ಎಂದು ಟೀಕಿಸಿದರು. ಜನರ ಧ್ವನಿಯನ್ನು ಹತ್ತಿಕ್ಕುವ ಪ್ರಯತ್ನವನ್ನು ಸಹಿಸಲಾಗದು. ಘಟನೆಗೆ ಸಂಬಂಧಿಸಿ ಪ್ರಧಾನಿ ನರೇಂದ್ರ ಮೋದಿ ದೇಶದ ಜನರ ಕ್ಷಮೆಯಾಚಿಸಬೇಕು. ನೈತಿಕ ಹೊಣೆ ಹೊತ್ತು ಪ್ರಧಾನಿ ಹಾಗೂ ಕೇಂದ್ರ ಶಿಕ್ಷಣ ಸಚಿವರು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.

ಬಳಿಕ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಕೆಲಕಾಲ ರಸ್ತೆ ತಡೆ ನಡೆಸಿದ ಪರಿಣಾಮ ಸಂಚಾರದಲ್ಲಿ ಅಲ್ಪ ವ್ಯತ್ಯಯ ಉಂಟಾಯಿತು. ನಂತರ ಸ್ಥಳಕ್ಕೆ ಆಗಮಿಸಿದ ಪೊಲೀಸರು ಪ್ರತಿಭಟನಾಕಾರರನ್ನು ವಶಕ್ಕೆ ಪಡೆದು ಕರೆದೊಯ್ದರು.

ಪ್ರತಿಭಟನೆಯಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಕಾಂಚನ್, ಕಾರ್ಯಾಧ್ಯಕ್ಷ ಕಿಶನ್ ಹೆಗ್ಡೆ ಕೊಳ್ಕೆಬೈಲು, ಹರೀಶ್ ಕಿಣಿ ಅಲೆವೂರು, ವೆರೋನಿಕಾ ಕರ್ನೆಲಿಯೋ, ಪ್ರಖ್ಯಾತ್ ಶೆಟ್ಟಿ, ಸೌರಭ್ ಬಲ್ಲಾಳ್ ಸೇರಿದಂತೆ ಹಲವು ಮುಖಂಡರು ಮತ್ತು ಕಾರ್ಯಕರ್ತರು ಭಾಗವಹಿಸಿದ್ದರು.