ಬಾಗಲಕೋಟೆ: ಮುಂದಿನ ಹದಿನೈದು ದಿನಗಳ ಒಳಗಾಗಿ ರಾಜ್ಯ ಸಚಿವ ಸಂಪುಟ ವಿಸ್ತರಣೆಯಾಗಲಿದೆ(Cabinet Expansion) ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್ ಹೇಳಿದ್ದಾರೆ.
ಬಾಗಲಕೋಟೆಯಲ್ಲಿ (Bagalkote) ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸದ್ಯಕ್ಕೆ ನಾವು ತಾತ್ಕಾಲಿಕ ಮಾತ್ರ. ಮುಂದಿನ 15 ದಿನಗಳಲ್ಲಿ ಸಂಪುಟ ವಿಸ್ತರಣೆಯಾಗಲಿದ್ದು, ಆ ಸಂದರ್ಭದಲ್ಲಿ ನಿಮ್ಮ ಜಿಲ್ಲೆಯವರಿಗೇ ಸಚಿವ ಸ್ಥಾನ ಸಿಗಲಿದೆ ಎಂದು ಭರವಸೆ ನೀಡಿದರು.
ಇದೇ ವೇಳೆ ಜಿಲ್ಲೆಗೆ ಸಚಿವ ಸ್ಥಾನದ ಪ್ರಾತಿನಿಧ್ಯ ಸಿಗದ ಕುರಿತ ಪ್ರಶ್ನೆಗೆ ಉತ್ತರಿಸಿದ ಅವರು, ಇಷ್ಟು ದಿನಗಳ ಕಾಲ ನಿಮ್ಮ ಜಿಲ್ಲೆಯವರು ಸಚಿವ ಸಂಪುಟದಲ್ಲಿ ಇರಲಿಲ್ಲವೇ ಎಂದು ಮರುಪ್ರಶ್ನಿಸಿದರು. ಸಂಪುಟ ವಿಸ್ತರಣೆಯ ಸಂಪೂರ್ಣ ನಿರ್ಧಾರ ಕಾಂಗ್ರೆಸ್ ಹೈಕಮಾಂಡ್‌ಗೆ ಬಿಟ್ಟಿದ್ದು. ಈ ವಿಷಯದಲ್ಲಿ ಹೈಕಮಾಂಡ್ ತೀರ್ಮಾನವೇ ಅಂತಿಮ, ನನ್ನ ಕೈಯಲ್ಲಿ ಏನೂ ಇಲ್ಲ ಎಂದು ಸ್ಪಷ್ಟಪಡಿಸಿದರು.
ಜಿಲ್ಲೆಯ ಬರ ಪರಿಸ್ಥಿತಿ ಮತ್ತು ವಿಪತ್ತು ನಿರ್ವಹಣೆ ಕುರಿತು ಮಾತನಾಡಿದ ಸಚಿವರು, ಕುಡಿಯುವ ನೀರಿನ ನಿರ್ವಹಣೆಗೆ ಹಣದ ಕೊರತೆ ಇಲ್ಲವೇ ಇಲ್ಲ. ಅಗತ್ಯ ಬಿದ್ದರೆ ಉಳಿದೆಲ್ಲ ಯೋಜನೆಗಳನ್ನು ಸದ್ಯಕ್ಕೆ ಸ್ಥಗಿತಗೊಳಿಸುತ್ತೇವೆ. ಆದರೆ ಜನರಿಗೆ ಕುಡಿಯುವ ನೀರು ಒದಗಿಸುವುದು ನಮ್ಮ ಮೊದಲ ಕರ್ತವ್ಯ ಎಂದು ಕಟ್ಟುನಿಟ್ಟಾಗಿ ಹೇಳಿದರು.
