ಬೆಂಗಳೂರಿನ ಇಸ್ರೋ ಕೇಂದ್ರ ಕಚೇರಿಗೆ ಬಾಂಬ್ ಬೆದರಿಕೆ; ಯುಪಿ ಮೂಲದ ನಿಶಾಂತ್ ತ್ಯಾಗಿ ಅರೆಸ್ಟ್‌

ಬೆಂಗಳೂರು: ಇಲ್ಲಿನ ನ್ಯೂ ಬಿಇಎಲ್ ರಸ್ತೆಯಲ್ಲಿರುವ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ISRO) ಕೇಂದ್ರ ಕಚೇರಿಗೆ ಬಾಂಬ್ ಇಡುವುದಾಗಿ ಇ-ಮೇಲ್ ಬೆದರಿಕೆ(Bomb Threat) ಹಾಕಿದ್ದ ಆರೋಪಿಯನ್ನು ಸಂಜಯನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ.

ಗಾಝಿಯಾಬಾದ್ ನ ನಿಶಾಂತ್ ತ್ಯಾಗಿ (36) ಬಂಧಿತ ಆರೋಪಿ. ಆರೋಪಿಯು ಮಾನಸಿಕ ಅಸ್ವಸ್ಥನಾಗಿದ್ದು, ಕೃತ್ಯಕ್ಕೆ ಉಪಯೋಗಿಸಿದ್ದ ಎಲೆಕ್ಟ್ರಾನಿಕ್ ಸಾಧನವನ್ನು ವಶಕ್ಕೆ ಪಡೆದು, ಮುಂದಿನ ತನಿಖೆ ಕೈಗೊಳ್ಳಲಾಗಿದೆ ಎಂದು ಸಂಜಯನಗರ ಠಾಣಾ ಪೊಲೀಸರು ಮಾಹಿತಿ ನೀಡಿದ್ದಾರೆ.

ಇಸ್ರೋ ಕಛೇರಿಯಲ್ಲಿ ಬಾಂಬ್ ಸ್ಪೋಟಿಸುವುದಾಗಿ ಇ-ಮೇಲ್ ಮೂಲಕ ಸಂದೇಶ ಬಂದಿದೆ ಎಂದು ಇಸ್ರೋ ಕೇಂದ್ರ ಕಛೇರಿಯ ಆಡಳಿತಾಧಿಕಾರಿಗಳು ಸಂಜಯನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ದೂರನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದರು.

ಪ್ರಕರಣದ ಆರೋಪಿಯ ಪತ್ತೆಗಾಗಿ ಠಾಣೆಯ ಅಧಿಕಾರಿ ಮತ್ತು ಸಿಬ್ಬಂದಿಯವರನ್ನೊಳಗೊಂಡ ವಿಶೇಷ ತನಿಖಾ ತಂಡವನ್ನು ರಚಿಸಲಾಗಿತ್ತು. ಈ ತಂಡವು ತಾಂತ್ರಿಕ ಸಹಾಯದಿಂದ ಮಾಹಿತಿ ಸಂಗ್ರಹಿಸಿ, ಉತ್ತರ ಪ್ರದೇಶದ ಗಾಝಿಯಾಬಾದ್‍ಗೆ ತೆರಳಿ, ಇಸ್ರೋ ಕಛೇರಿಗೆ ಬಾಂಬ್ ಬೆದರಿಕೆ ಸಂದೇಶ ಕಳುಹಿಸಿದ್ದ ವ್ಯಕ್ತಿಯನ್ನು ಪತ್ತೆ ಮಾಡಿದೆ. ಆತನನ್ನು ವಶಕ್ಕೆ ಪಡೆದ ಪೊಲೀಸರು, ಆರೋಪಿಯ ಬಳಿಯಿದ್ದ ಎಲೆಕ್ಟ್ರಾನಿಕ್ ಸಾಧನವನ್ನು ವಶಕ್ಕೆ ಪಡೆದುಕೊಂಡಿದ್ದಾರೆ.